ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ (ಸೆ.12) ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿ 9 ಮಂದಿ ಸಾವಿಗೀಡಾಗಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಮೃತ ಮೂವರು ವಿದ್ಯಾರ್ಥಿಗಳು ಮೊಸಳೆ ಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತರ ಮಾಹಿತಿಯನ್ನು ಸರ್ಕಾರ ಹಂಚಿಕೊಂಡಿದೆ..
ಮೊಸಳೆ ಹೊಸಹಳ್ಳಿಯ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಸಾಗುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ನುಗ್ಗಿದ ಮಿನಿ ಕ್ಯಾಂಟರ್ ಜನಸಂದಣಿ ಮೇಲೆ ಹರಿದಿದೆ. ಇದರಿಂದ ದುರಂತ ಸಂಭವಿಸಿದೆ. ಹಾಸನದಿಂದ ಹೊಳೆನರಸೀಪುರದ ಕಡೆಗೆ ಹೊರಟಿದ್ದ ಕ್ಯಾಂಟರ್ ಚಾಲಕನಿಗೂ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ಯಾಂಟರ್ ಲಾರಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಬೈಕ್ ಅಡ್ಡ ಬಂದಿದೆ. ಅದನ್ನು ತಪ್ಪಿಸಲು ಚಾಲಕ ಯತ್ನಿಸಿದಾಗ ರಸ್ತೆ ವಿಭಜಕ ದಾಟಿದ ಕ್ಯಾಂಟರ್ ಮೆರವಣಿಗೆಯಲ್ಲಿ ಸಾಗುತ್ತಿದ್ದ ಜನರ ಗುಂಪಿನ ಮೇಲೆ ಹರಿದಿದೆ ಎಂದು ತಿಳಿದು ಬಂದಿದೆ.
ಗಂಭೀರ ಸ್ಥಿತಿಯಲ್ಲಿರುವ ಹಲವು ಗಾಯಾಳುಗಳನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರು ಹಾಸನದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್.ಡಿ ರೇವಣ್ಣ ಮತ್ತು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಭೇಟಿ ನೀಡಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
“ರಾತ್ರಿ 8ರಿಂದ 8:45ರ ನಡುವೆ, ಮೊಸಳೆ ಹೊಸಳ್ಳಿಯಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆಯ ಮೇಲೆ ಕ್ಯಾಂಟರ್ ಲಾರಿಯೊಂದು ನುಗ್ಗಿದ್ದರಿಂದ ದುರ್ಘಟನೆ ಸಂಭವಿಸಿದೆ. ಈ ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದು, ಕ್ಯಾಂಟರ್ ಚಾಲಕ ಕೂಡ ಗಾಯಗೊಂಡಿದ್ದಾರೆ. 6 ಮಂದಿ ಗ್ರಾಮಸ್ಥರು ಮತ್ತು ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ” ಎಂದು ದಕ್ಷಿಣ ವಲಯದ ಐಜಿಪಿ ಎಂ.ಬಿ ಬೋರಲಿಂಗಯ್ಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
“ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
“ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ” ಎಂದಿದ್ದಾರೆ.
ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ರಾಹುಲ್‌ಗೆ ‘ಅಂತಿಮ ಭರವಸೆ ಪತ್ರ’; ಗಾಂಧಿ ಜಯಂತಿಯಂದು ದೆಹಲಿ ಚಲೋ


