ಮಹೇಶ್ ಜೋಶಿ ಆಡಳಿತಾವಧಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣ ಹಾಗೂ ಅಧಿಕಾರ ದುರ್ಬಳಕೆ ಸೇರಿ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ನೂತನ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆದೇಶದ ಬೆನ್ನಲ್ಲೇ ಕೆ.ಎಂ. ಗಾಯತ್ರಿ ಅವರು ಕ.ಸಾ.ಪ ಕೇಂದ್ರ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದ್ದಾರೆ. ಕ.ಸಾ.ಪದಲ್ಲಿ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆಯ ಆರೋಪಗಳ ವಿಚಾರಣೆಗೆ ಸಂಬಂಧಿಸಿದಂತೆ ಸಹಕಾರ ಇಲಾಖೆ ಕಳೆದ ಜುಲೈನಲ್ಲಿ ಆದೇಶ ಹೊರಡಿಸಿ ವಿಚಾರಣಾಧಿಕಾರಿಯನ್ನು ನೇಮಕ ಮಾಡಿತ್ತು.
ವಿಚಾರಣೆಗೆ ಸಂಬಂಧಿಸಿದಂತೆ ಕಸಾಪದವರು ನಿಗದಿತ ಕಾಲಾವಧಿಯಲ್ಲಿ ಹಾಜರಾಗದಿರುವುದು, ಅಗತ್ಯ ದಾಖಲಾತಿಗಳನ್ನು ಒದಗಿಸದಿರುವ ಕಾರಣ ನೀಡಿ ಆಡಳಿತಾಧಿಕಾರಿ ನೇಮಿಸುವಂತೆ ಸಹಕಾರ ಇಲಾಖೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಶಿಫಾರಸು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದ ಪ್ರಸ್ತುತ ಅಧ್ಯಕ್ಷರಾಗಿದ್ದ ಮಹೇಶ್ ಜೋಶಿ ಅವರಿಗೆ ತೀವ್ರ ಹಿನ್ನಡೆಯಾದಂತಾಗಿದೆ.
ಮುಂದಿನ ಮೂರು ತಿಂಗಳವರೆಗೆ ಅಥವಾ ಕಸಾಪದ ಹಣಕಾಸಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿಯುವವರೆಗೆ ಆಡಳಿತಾಧಿಕಾರಿಯಾಗಿ ಗಾಯತ್ರಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸರ್ಕಾರದ ಆದೇಶಕ್ಕೆ ಸಂಬಂಧಿಸಿದಂತೆ ‘ನಾನು ಗೌರಿ’ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಲೇಖಕಿ, ಡಾ. ವಸುಂಧರಾ ಭೂಪತಿ ಅವರು ‘ಇದು ಸತ್ಯಕ್ಕೆ ಸಂದ ಜಯ. ಸಂಘಟಿತರಾಗಿನಡೆಸಿದ ಹೋರಾಟಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದೆ. ಆದರೆ ತನಿಖೆ ಸಂಪೂರ್ಣಗೊಂಡು ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಆಗಬೇಕು. ಕರ್ನಾಟಕ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿರುವುದನ್ನು ಮನ: ಪೂರ್ವಕವಾಗಿ ಸ್ವಾಗತಿಸುತ್ತೇವೆ. ಇಂತಹ ದಿಟ್ಟ ನಿರ್ಧಾರ ಕೈಗೊಂಡ ನಾಡಿನ ಮುಖ್ಯ ಮಂತ್ರಿ ಸಿದ್ದರಾಮಯ್ಯನವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಮುಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷತೆಗೆ ಸ್ಪರ್ಧೆ ಮಾಡುವ ಎಲ್ಲರಿಗೂ ಇದೊಂದು ಪಾಠವಾಗಿದೆ. ಸರ್ವಾಧಿಕಾರಿ ಮನೋಭಾವ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದಲ್ಲಿ ಸಾಮಾನ್ಯ ಸದಸ್ಯರು ಸುಮ್ಮನಿರುವುದಿಲ್ಲ ಎಂಬ ಸಂದೇಶ ಕೂಡ ಈ ಮೂಲಕ ತಲುಪಿದೆ.’ ಎಂದು ತಿಳಿಸಿದ್ದಾರೆ.


