ಆಂಧ್ರ ಪ್ರದೇಶದ ಶ್ರೀಕಾಕುಳಂನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 9 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಕಾರ್ತಿಕಮಾಸದ ಏಕಾದಶಿ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನಕ್ಕಾಗಿ ದೇವಸ್ಥಾನಕ್ಕೆ ಆಗಮಿಸಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎಂದು ವರದಿಗಳು ಹೇಳಿವೆ.
ಘಟನೆಯ ಬಗ್ಗೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ಆಘಾತವನ್ನುಂಟು ಮಾಡಿದೆ. ಈ ದುರಂತ ಘಟನೆಯಲ್ಲಿ ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಚಂದ್ರಬಾಬು ನಾಯ್ಡು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಗಾಯಗೊಂಡವರಿಗೆ ತ್ವರಿತ ಮತ್ತು ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವಂತೆ ಸ್ಥಳೀಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ನಿರ್ದೇಶಿಸಿದ್ದೇನೆ ಎಂದು ಹೇಳಿದ್ದಾರೆ.


