ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ ಕಾಂಗ್ರೆಸ್ ಹೈಕಮಾಂಡ್ ಮಧ್ಯ ಪ್ರವೇಶಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಮಾತನಾಡಿದ್ದಾರೆ.
ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವ ರೀತಿ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ತೀವ್ರ ಕಳವಳ ವ್ಯಕ್ತಪಡಿಸಿದೆ. ಅಂತಹ ಕ್ರಮಗಳಿಗೆ ಹೆಚ್ಚಿನ ಎಚ್ಚರಿಕೆ, ಸೂಕ್ಷ್ಮತೆ ಮತ್ತು ಸಹಾನುಭೂತಿ ಅಗತ್ಯವೆಂದು ತಿಳಿಸಿರುವುದಾಗಿ ವೇಣುಗೋಪಾಲ್ ಹೇಳಿದ್ದಾರೆ.
ಸಂತ್ರಸ್ತ ಕುಟುಂಬಗಳಿಗೆ ಪುನರ್ವಸತಿ ಮತ್ತು ಪರಿಹಾರವನ್ನು ಖಚಿತಪಡಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಭರವಸೆ ನೀಡಿರುವುದಾಗಿ ವೇಣುಗೋಪಾಲ್ ತಿಳಿಸಿದ್ದಾರೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಸ್ಥಳೀಯ ನಿವಾಸಿಗಳ ಪ್ರತಿಭಟನೆಯ ನಡುವೆ ಸರ್ಕಾರದಿಂದ ಈ ಭರವಸೆ ನೀಡಲಾಗಿದೆ.
ಸರ್ಕಾರವು ದುರ್ಬಲ ಕುಟುಂಬಗಳನ್ನು ಬೇರೆ ವ್ಯವಸ್ಥೆ ಮಾಡದೆ ಸ್ಥಳಾಂತರಿಸುತ್ತಿದೆ. ನಿರಾಶ್ರಿತರಿಗೆ ತಕ್ಷಣ ಪುನರ್ವಸತಿ, ವಸತಿ ಮತ್ತು ಮೂಲಭೂತ ಅಗತ್ಯಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.


