ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶಿಸಿದ್ದಾರೆ.
ಗಾಯಾಳುಗಳಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತವೇ ಭರಿಸುವಂತೆ ಸೂಚನೆ ನೀಡಿದ್ದೇನೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸ್ಫೋಟಕ ತಜ್ಞರನ್ನು ಸ್ಥಳಕ್ಕೆ ಕಳುಹಿಸಿ, ಸ್ಫೋಟ ಸ್ಥಳದಲ್ಲಿ ಮಾದರಿಗಳನ್ನು ಸಂಗ್ರಹಿಸಿ ಸಮಗ್ರ ತನಿಖೆ ನಡೆಸಲು ಆದೇಶಿಸಿದ್ದೇನೆ ಎಂದು ಈಶ್ವರ್ ಖಂಡ್ರೆ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ತಿಳಿಸಿದ್ದಾರೆ.
ಸ್ಫೋಟಕ್ಕೆ ಕಾರಣವೇನು? ಬಳಸಿದ ವಸ್ತು ಯಾವುದು? ಅದು ಅಲ್ಲಿ ಹೇಗೆ ಬಂದಿತು? ಯಾವ ಉದ್ದೇಶಕ್ಕಾಗಿ ಬಳಸಲಾಗುತ್ತಿತ್ತು? ಎಂಬ ಎಲ್ಲ ವಿಷಯಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಕಾರಣರಾದವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.
ಮೊಳಕೇರಾ ಗ್ರಾಮದಲ್ಲಿ ಶನಿವಾರ ಮುಂಜಾನೆ ಅನುಮಾನಾಸ್ಪದ ವಸ್ತು ಸ್ಪೋಟಗೊಂಡು 6 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಗ್ರಾಮದ ಜಬ್ಬಾರ ಸಾಬ್ (70), ಅನ್ವರ್ (18), ಅರ್ಜಾನ್ (8), ಆರೀಶ್ (6), ಮಸ್ತಾನ್ (8) ಮತ್ತು ಬುಶೇರಾ (3) ಎಂದು ಗುರುತಿಸಲಾಗಿದೆ.
ಸ್ಪೋಟ ಸಂಭವಿಸಿದಾಗ ವಿದ್ಯಾರ್ಥಿಗಳಯ ಶಾಲೆಗೆ ತೆರಳುತ್ತಿದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ಹೇಳಿವೆ.


