- Advertisement -
- Advertisement -
ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು ಉಸ್ತುವಾರಿ ಸಚಿವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ತುಮಕೂರಿನಲ್ಲಿ ಸಹ ಸಂಪೂರ್ಣ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೂ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕಲಬುರಗಿ ನಗರದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯವರೆಗೆ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಹಕ್ಕೊತ್ತಾಯಗಳು:
- ನೇರ ನೇಮಕಾತಿಯ ಜೊತೆಗೆ ಪದೋನ್ನತಿಯಲ್ಲೂ ಹಾಗೂ ಬ್ಯಾಕ್‌ಲಾಗ್, ಕೆಐಎಡಿಬಿ, ಬಿಡಿಎ ಹಾಗೂ ಸರ್ಕಾರಿ ಗುತ್ತಿಗೆ ಸೇರಿದಂತೆ ಎಲ್ಲಾ ರಂಗಗಳಲ್ಲಿ ಒಳಮೀಸಲಾತಿ ಜಾರಿಮಾಡಬೇಕು.
- ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದಲ್ಲೂ ಸಹ 6:6:5ರ ಅನುಪಾತದಲ್ಲಿ ಹಂಚಿಕೆಯಾಗಬೇಕು.
- ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಶೇ.1 ಮೀಸಲಾತಿಯೊಂದಿಗೆ ಪ್ರತ್ಯೇಕ ನಿಗಮ ಹಾಗೂ ಪ್ರತ್ಯೇಕ ಪ್ಯಾಕೇಜ್ ಘೋಷಿಸಬೇಕು.
- ಶಾಶ್ವತ ಆಯೋಗ ನೇಮಕ ಹಾಗೂ ಮೀಸಲಾತಿ ಹೆಚ್ಚಳಕ್ಕೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು.
- ಒಳಮೀಸಲಾತಿ ಹೋರಾಟಗಾರರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಬೇಕು.
- ಆದಿ ಜಾಂಭವ ಅಭಿವೃದ್ಧಿ ನಿಗಮ, ಚರ್ಮ ಕೈಗಾರಿಕಾ ಅಭಿವೃದ್ದಿ ಮಂಡಳಿ(ಲಿಡ್ಕರ್), ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮಗಳಿಗೆ ‘ತಲಾ 2 ಸಾವಿರ ಕೋಟಿ ಅನುದಾನ ಒದಗಿಸಬೇಕು.


