ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ ಲಿಮಿಟೆಡ್‌ನ 21 ನಿರ್ದೇಶಕರು ಮತ್ತು ಷೇರುದಾರರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 105 (ಕೊಲೆಗೆ ಸಮಾನವಲ್ಲದ ಅಪರಾಧಿಕ ನರಹತ್ಯೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದರು.
ಕಂಪನಿಯ ಒಂಬತ್ತು ನಿರ್ದೇಶಕರನ್ನು ಇದುವರೆಗೆ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಟೋಲ್ ತಹಸಿಲ್‌ನ ರೌಲ್ಗಾಂವ್‌ನಲ್ಲಿರುವ ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಕರಾದ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್‌ನ ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 18 ಕಾರ್ಮಿಕರು ಸುಟ್ಟು ಕರಕಲಾಗಿದ್ದು, 24 ಮಂದಿ ಗಾಯಗೊಂಡಿದ್ದಾರೆ, ಅವರಲ್ಲಿ ಹೆಚ್ಚಿನವರ ಸ್ಥಿತಿ ಗಂಭೀರವಾಗಿದೆ.
ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆ (PESO) ಮತ್ತು ರಕ್ಷಣಾ ಮಾಹಿತಿ ವ್ಯವಸ್ಥೆ ಭದ್ರತೆ (DISS) ನಡೆಸಿದ ಆರಂಭಿಕ ವರದಿಯು ಕಂಪನಿಯಲ್ಲಿನ ಸುರಕ್ಷತಾ ದೋಷಗಳನ್ನು ಸೂಚಿಸಿದೆ ಎಂದು ನಾಗ್ಪುರ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಡಾ. ಹರ್ಷ್ ಪೊದ್ದಾರ್ ಸೋಮವಾರ ಹೇಳಿದ್ದಾರೆ.
ವರದಿಯ ಮೇರೆಗೆ ಪೊಲೀಸರು ಕಂಪನಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದರು.
ಬಂಧಿತ ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣದಲ್ಲಿ ಉಳಿದ ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಶವಗಳು ಗುರುತಿಸಲಾಗದಷ್ಟು ಸುಟ್ಟುಹೋಗಿವೆ ಮತ್ತು ಮೃತರ ಗುರುತುಗಳನ್ನು ಖಚಿತಪಡಿಸಿಕೊಳ್ಳಲು ಕುಟುಂಬ ಸದಸ್ಯರ ಮಾದರಿಗಳನ್ನು ಡಿಎನ್‌ಎ ಪರೀಕ್ಷೆಗೆ ತೆಗೆದುಕೊಳ್ಳಲಾಗುತ್ತಿದೆ.
ಸ್ಫೋಟದ ಕಾರಣದ ಬಗ್ಗೆ ಸಮಗ್ರ ತನಿಖೆಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆದೇಶಿಸಿದ್ದಾರೆ.


