ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ.
ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ ಇರುವ 543 ರಿಂದ 850ಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಮುಂದಿಟ್ಟಿದೆ. ಈ ಕುರಿತು ಮಸೂದೆ ಮಂಡಿಸಲು ಅಣಿಯಾಗಿದೆ.
ಕ್ಷೇತ್ರ ಪುನರ್ ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯ ಕಡಿಮೆಯಾಗಿ, ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿನ ಲಾಭವಾಗಬಹುದು ಎಂದು ತಮಿಳುನಾಡು ಸೇರಿದಂತೆ ದಕ್ಷಿಣದ ರಾಜ್ಯಗಳ ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಸ್ಥಾನಗಳನ್ನು ಮೀಸಲಿಡಲು ಮತ್ತೊಂದು ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ.
ಒಟ್ಟು 850 ಸ್ಥಾನಗಳಲ್ಲಿ ಸುಮಾರು 273 ಕ್ಷೇತ್ರಗಳು ಮಹಿಳೆಯರಿಗೆ ಮೀಸಲಾಗುವ ಸಾಧ್ಯತೆಯಿದೆ. 2027ರ ಜನಗಣತಿಗಿಂತ ಮೊದಲೇ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ 2029ರ ಚುನಾವಣೆಗೆ ಸಿದ್ಧತೆ ನಡೆಸಲು ಸರ್ಕಾರ ಮುಂದಾಗಿದೆ.
ಇನ್ನೊಂದು ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.


