Homeಕರ್ನಾಟಕ‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

- Advertisement -
- Advertisement -

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕರ್ನಾಟಕ ರಾಜಕಾರಣದಲ್ಲಿ ನಡೆಯುತ್ತಿದ್ದ ಕುರ್ಚಿ ಕಾಳಗಗಕ್ಕೆ ಕೊನೆಗೂ ಕ್ಲೈಮ್ಯಾಕ್ಸ್ ದೊರೆತಿದೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿರುವ ಸಿದ್ದರಾಮಯ್ಯ ಹೈಕಮಾಂಡ್ ಮೊನ್ನೆ ರಾಜೀನಾಮೆ ಕೊಡಿ ಎಂದು ಹೇಳಿದ್ದರು. ಹಾಗಾಗಿ, ಇವತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜ್ಯಪಾಲರು ಬಂದ ಮೇಲೆ ನನ್ನ ರಾಜೀನಾಮೆ ಅಂಗೀಕಾರ ಮಾಡುತ್ತಾರೆ ಎಂದು ಹೇಳಿದ್ದಾರೆ. ಈ ವೇಳೆ ನಾಡಿನ ಜನತೆಯನ್ನು ಉದ್ದೇಶಿಸಿ ಅವರು ಮಾತನಾಡಿದ ಭಾಷಣದ ಸಂಪೂರ್ಣ ವಿವರ ಇಲ್ಲಿದೆ. 

ಎಲ್ಲರಿಗೂ ನಮಸ್ಕಾರ…

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ. 

ಮೇರು ನಟ ಡಾ.ರಾಜ್ ಕುಮಾರ್ ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ‘ಮತದಾರ ದೇವರು’. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ.

ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.

ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ  ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.

ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ.  ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ. 

ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್‌ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.

ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.

ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ಮರಳಿನ ಮೇಲಿನ ಅಕ್ಷರಾಭ್ಯಾಸದ ಮೂಲಕ ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್…

ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ಧಾಂತಿಕ ಬದ್ಧತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸಬಯಸುತ್ತೇನೆ.

ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸು ವ್ಯರ್ಥಪ್ರಯತ್ನವನನ್ನು ನಾನು ಮಾಡುವುದಿಲ್ಲ., ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ.

ಜಾತಿ,ದುಡ್ಡು ಮತ್ತು ತೋಳ್ಭಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ. ಇದು ಈ ಕಾಲದ ಸತ್ಯವೂ ಹೌದು.  ಇಂತಹ ಪರಿಸ್ಥಿತಿಯಲ್ಲಿ  ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ  ನಾಲ್ಕುವರೆ ದಶಕಗಳ  ರಾಜಕೀಯ ಪಯಣದಲ್ಲಿ ನನಗಾಗಿದೆ.

ರಾಜಕೀಯ ಪಯಣದ ನನ್ನಹಾದಿಯಲ್ಲಿ ಹೆಜ್ಜೆಹೆಜ್ಜೆಗೂ ನಾನು ಪಟ್ಟಭದ್ರರ ದ್ವೇಷ ಅಸೂಯೆಗೆ ಈಡಾಗಿ‍ದ್ದೇನೆ.  ಹೊರಗಿನವರ ಮತ್ತು ಒಳಗಿನವರ ಮೋಸ-ವಂಚನೆ-ಪಿತೂರಿಗೆ ಒಳಗಾಗಿದ್ದೇನೆ. ಇದರಿಂದಾಗಿ ಹಲವಾರು ಬಾರಿ ಬಿದ್ದಿದ್ದೇನೆ, ಬಿದ್ದಲ್ಲಿಂದಲೇ ಎದ್ದಿದ್ದೇನೆ.

ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ, ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಇವೆಲ್ಲವನ್ನೂ ಅನುಭವಿಸಿದಾಗ ರಾಜಕೀಯ ಸನ್ಯಾಸ ತೆಗೆದುಕೊಂಡು ಬಿಡುವ ಎನ್ನುವಷ್ಟು ಮನಸ್ಸು ನೊಂದಿತ್ತು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ, ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ದ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ. ನನ್ನ ನೋವು,ದು:ಖ-ದುಮ್ಮಾನಗಳನ್ನು ಈ ಸಂದರ್ಭದಲ್ಲಿ  ಪಟ್ಟಿಮಾಡಿ ನನ್ನ ಮನಸ್ಸನ್ನು ಕಹಿಮಾಡಿಕೊಳ್ಳುವುದಿಲ್ಲ.

ಆದರೆ ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ.

ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ.

ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ  ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ  ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ   ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ. ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.

ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು.

ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ.  ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ.

ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್‌ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್‌ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ.

ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.

ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ.

ನನ್ನನ್ನು ನಾಯಕನನ್ನಾಗಿ ಸ್ವೀಕರಿಸಿ ಬೆಂಬಲ ನೀಡಿದ ನನ್ನ ಎಲ್ಲ ಶಾಸಕ ಮಿತ್ರರಿಗೆ, ಸರ್ಕಾರದ ಯಂತ್ರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಅಧಿಕಾರಿವರ್ಗಕ್ಕೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ..

ಮತ್ತೊಮ್ಮೆ ಎಲ್ಲರಿಗೂ ನನ್ನ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ, ವಂದನೆಗಳು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....