ಜಾರ್ಖಂಡ್ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರಿಗೆ ಮಹತ್ವದ ಪತ್ರ ಬರೆದಿದ್ದಾರೆ. ಪ್ರತಿಭಟನಾನಿರತ ಅಭ್ಯರ್ಥಿಗಳನ್ನು ಖುದ್ದಾಗಿ ಭೇಟಿಯಾಗಿ, ಅವರ ಅ ಕುಂದುಕೊರತೆಗಳನ್ನು ಆಲಿಸುವಂತೆ ಅವರು ಸಿಎಂಗೆ ಮನವಿ ಮಾಡಿದ್ದಾರೆ.
ಆಗಸ್ಟ್ 14ರಂದು ಬರೆದಿದ್ದ ಈ ಪತ್ರವನ್ನು ಸೋಮವಾರ ಬಹಿರಂಗಪಡಿಸಿರುವ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಪ್ರತಿಭಟನೆ ಶಾಂತಿಯುತವಾಗಿದ್ದು, ಅವರ ಬೇಡಿಕೆಗಳು ಸಂಪೂರ್ಣ ನ್ಯಾಯಯುತವಾಗಿವೆ ಎಂದು ಪ್ರತಿಪಾದಿಸಿದ್ದಾರೆ.
ಪತ್ರದಲ್ಲಿ RSS ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, “RSS ಮತ್ತು ಬಿಜೆಪಿ ದೇಶದ ಶೈಕ್ಷಣಿಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಂಡಿವೆ. ಒಂದು ದಶಕದ ಹಿಂದೆ ಜ್ಞಾನಾರ್ಜನೆಯ ಕೇಂದ್ರವಾಗಿದ್ದ ಶಿಕ್ಷಣ ವ್ಯವಸ್ಥೆಯನ್ನು ಇಂದು ಯುವಕರನ್ನು ಶೋಷಿಸುವ ಮತ್ತು ದಬ್ಬಾಳಿಕೆ ನಡೆಸುವ ಸಾಧನವನ್ನಾಗಿ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ವಿರುದ್ಧ ಧ್ವನಿ ಎತ್ತುತ್ತಿರುವ ವಿದ್ಯಾರ್ಥಿಗಳ ಪರ ಕಾಂಗ್ರೆಸ್ ಸದಾ ನಿಲ್ಲಲಿದೆ” ಎಂದಿದ್ದಾರೆ.
ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಸಂವಿಧಾನ ನೀಡಿರುವ ಮೂಲಭೂತ ಹಕ್ಕು ಹಾಗೂ ಪ್ರಜಾಪ್ರಭುತ್ವದ ಆಧಾರಸ್ತಂಭ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಸರ್ಕಾರ ಈಗಾಗಲೇ ವಿದ್ಯಾರ್ಥಿಗಳ ಜೊತೆ ಚರ್ಚಿಸಲು ಸಮಿತಿ ರಚಿಸಿರುವುದನ್ನು ಶ್ಲಾಘಿಸಿರುವ ಅವರು, ಕೆಲವು ಬೇಡಿಕೆಗಳಿಗೆ ಸಮ್ಮತಿ ಸಿಕ್ಕಿದ್ದರೂ ಹೋರಾಟ ಮುಂದುವರಿದಿದೆ. ಹೀಗಾಗಿ ಸಿಎಂ ಸೋರೆನ್ ತಾವೇ ನೇರವಾಗಿ ವಿದ್ಯಾರ್ಥಿಗಳನ್ನು ಭೇಟಿಯಾಗಬೇಕು.
ಹಲವು ಉದ್ಯೋಗಾಕಾಂಕ್ಷಿಗಳು ಪ್ರಾಣದ ಹಂಗು ತೊರೆದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದು ಆತಂಕಕಾರಿ ಸಂಗತಿಯಾಗಿದ್ದು, ಸರ್ಕಾರ ತಕ್ಷಣವೇ ಸ್ಪಂದಿಸಬೇಕು. “ದೇಶದ ಯುವಕರೇ ಭಾರತದ ಭವಿಷ್ಯ. ಈ ಸಂಕಷ್ಟದ ಸಮಯದಲ್ಲಿ ನಾವು ಅವರ ಬೆಂಬಲಕ್ಕೆ ನಿಂತು, ಅವರ ಧ್ವನಿಗೆ ಕಿವಿಗೊಡಬೇಕಿದೆ” ಎಂದು ರಾಹುಲ್ ಸೋರೆನ್ ಅವರನ್ನು ಒತ್ತಾಯಿಸಿದ್ದಾರೆ.
ಜಾರ್ಖಂಡ್ನಲ್ಲಿ ಆಡಳಿತ ನಡೆಸುತ್ತಿರುವ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನೇತೃತ್ವದ ಮೈತ್ರಿಕೂಟ ಸರ್ಕಾರದಲ್ಲಿ ಕಾಂಗ್ರೆಸ್ ಕೂಡ ಪ್ರಮುಖ ಪಾಲುದಾರ ಪಕ್ಷವಾಗಿದೆ ಎಂಬುದು ಗಮನಾರ್ಹ.


