ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ 42ನೇ ಅಡಿಷನಲ್ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACJM) ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.
ಕಳೆದ ವರ್ಷ ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯೊಂದರ ವೇಳೆ ಜಿಲ್ಲಾಧಿಕಾರಿ ಫೌಜಿಯಾ ಅವರ ವಿರುದ್ಧ ರವಿಕುಮಾರ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದರು ಎನ್ನಲಾಗಿದ್ದು, ಈ ಕುರಿತು ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದರೂ ರವಿಕುಮಾರ್ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಕಠಿಣ ಕ್ರಮ ಕೈಗೊಂಡು ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದೆ.
ಇದೇ ವೇಳೆ, ತಮ್ಮ ವಿರುದ್ಧ ದಾಖಲಾಗಿರುವ ಈ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಎನ್. ರವಿಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು. ಇದರ ಬೆನ್ನಲ್ಲೇ ಅಧೀನ ನ್ಯಾಯಾಲಯದ ಸಮನ್ಸ್‌ಗೂ ಗೈರಾದ ಹಿನ್ನೆಲೆಯಲ್ಲಿ, ಪ್ರಸ್ತುತ ಎಸಿಜೆಎಂ ನ್ಯಾಯಾಲಯದಿಂದ ಈ ಆದೇಶ ಹೊರಬಿದ್ದಿದೆ.


