ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.
ಕೇಂದ್ರ ಸರ್ಕಾರವು ಈ ಕುರಿತು ನ್ಯಾಯಾಲಯದ ಮೊರೆ ಹೋದ ನಂತರ, ಸುಪ್ರೀಂ ಕೋರ್ಟ್ ಭಾರತೀಯ ಸಂವಿಧಾನದ ವಿಧಿ 142 ರ ಅಡಿಯಲ್ಲಿ ತನಗೆ ನೀಡಲಾದ ವಿಶೇಷ ಅಧಿಕಾರವನ್ನು ಬಳಸಿಕೊಂಡು ಜುಲೈ ತಿಂಗಳ ವಿದ್ಯಾರ್ಥಿ ಪ್ರತಿಭಟನೆಗೆ ಸಂಬಂಧಿಸಿದ ಎಲ್ಲಾ ಎಫ್‌ಐಆರ್‌ಗಳನ್ನು ಸಂಪೂರ್ಣವಾಗಿ ವಜಾಗೊಳಿಸಿದೆ.
ಇದಕ್ಕೂ ಮುನ್ನ, ದೆಹಲಿ ಮತ್ತು ಇತರ ಪ್ರದೇಶಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದವರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರ ಹಾಗೂ ನಾಲ್ಕು ರಾಜ್ಯಗಳು ಸಲ್ಲಿಸಿದ ಮನವಿಯ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 5 ರಂದು ನಡೆಸಲು ಉದ್ದೇಶಿಸಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯ ಕರೆಯನ್ನು ಹಿಂಪಡೆಯುತ್ತಿರುವುದಾಗಿ ಕಾಕ್ರೋಚ್ ಜನತಾ ಪಾರ್ಟಿ ಘೋಷಿಸಿದೆ.
ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ನೇತೃತ್ವದ ತ್ರಿಪೀಠದ ಮುಂದೆ ಸಿಜೆಪಿ ಸಹ-ಸಂಚಾಲಕ ಸೌರವ್ ದಾಸ್ ಮಾತನಾಡಿ, ಭಾರತ ಸರ್ಕಾರದ ಸಕಾರಾತ್ಮಕ ಭರವಸೆಗಳು, ನ್ಯಾಯಾಲಯದ ಗೌರವ ಹಾಗೂ ಇಂದು ಗೌರವಾನ್ವಿತ ನ್ಯಾಯಾಲಯ ನೀಡುತ್ತಿರುವ ಆದೇಶದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5 ಕ್ಕೆ ಕೆರ ನೀಡಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಗುತ್ತಿದೆ. ನ್ಯಾಯಾಲಯದ ಆದೇಶದ ಸಂಪೂರ್ಣ ಜಾರಿಯನ್ನು ನಾವು ನಿರೀಕ್ಷಿಸುತ್ತೇವೆ, ಎಂದು ತಿಳಿಸಿದರು.
ಜುಲೈನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ವಜಾಗೊಳಿಸುವಂತೆ ದೆಹಲಿ ಪೊಲೀಸ್ ಸೇರಿದಂತೆ ಮಹಾರಾಷ್ಟ್ರ, ಅಸ್ಸಾಂ, ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ನಡೆಸಿ ಈ ಮಹತ್ವದ ತೀರ್ಪು ನೀಡಿದೆ.


