ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಖಾಸಗಿ ಬಸ್ಗೆ ಕಾರು ಡಿಕ್ಕಿಯಾದ ಪರಿಣಾಮ ವಾಹನದ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಮಾಜಿ ಸಚಿವ ರಮಾನಾಥ ರೈ ಅವರು ಕಾರ್ಕಳದಿಂದ ಮೂಡುಬಿದ್ರೆ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ವೇಳೆ, ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಎದುರಿನಿಂದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಒಳಗೆ ಸಿಲುಕಿಕೊಂಡಿದ್ದ ರಮಾನಾಥ ರೈ ಅವರನ್ನು ಸಾರ್ವಜನಿಕರು ತಕ್ಷಣವೇ ಹರಸಾಹಸಪಟ್ಟು ಹೊರತೆಗೆದು, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪ್ರಸ್ತುತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


