ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣಗಳ ವಿಚಾರಣೆಯನ್ನು ಮುಂಬರುವ ಆರು ತಿಂಗಳೊಳಗೆ ಪೂರ್ಣಗೊಳಿಸಿ, ಆರೋಪಿಗಳನ್ನು ಜೈಲಿಗೆ ಕಳುಹಿಸುವುದಾಗಿ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಕೇರಳದ ಕೊಚ್ಚಿಯ ಮರೈನ್ ಡ್ರೈವ್ನಲ್ಲಿ ಮುಸ್ಲಿಂ ಯೂತ್ ಲೀಗ್ (MYL) ಕೇರಳ ರಾಜ್ಯ ಸಮ್ಮೇಳನದ ಅಂಗವಾಗಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ಅವರು ಈ ಭರವಸೆ ನೀಡಿದ್ದಾರೆ. ಈ ಸಮಾವೇಶದಲ್ಲಿ ಕೇರಳದ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಿದ್ದರು.
ಸಮ್ಮೇಳನದಲ್ಲಿ ಮುಸ್ಲಿಂ ಯೂತ್ ಲೀಗ್ ಪ್ರಧಾನ ಕಾರ್ಯದರ್ಶಿ ಪಿ.ಕೆ. ಫಿರೋಜ್ ಅವರು ಗೌರಿ ಲಂಕೇಶ್, ಎಂ.ಎಂ. ಕಲ್ಬುರ್ಗಿ ಹಾಗೂ ನರೇಂದ್ರ ದಾಭೋಳ್ಕರ್ ಅವರ ಹತ್ಯೆಗಳ ವಿಷಯವನ್ನು ಪ್ರಸ್ತಾಪಿಸಿದಾಗ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರವಾಗಿ ಸ್ಪಂದಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇನ್ನು ಆರು ತಿಂಗಳಲ್ಲಿ ಈ ಪ್ರಕರಣಗಳನ್ನು ಮುಕ್ತಾಯಗೊಳಿಸಿ ಆರೋಪಿಗಳನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ನಾವು ಈ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಹಿಂಬಾಲಿಸುತ್ತಿದ್ದೇವೆ. ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದವರ ಸಿದ್ಧಾಂತವನ್ನೇ ಹೊಂದಿರುವವರು ಮತ್ತು ಸಂಘ ಪರಿವಾರದೊಂದಿಗೆ ಗುರುತಿಸಿಕೊಂಡಿರುವವರೇ ಈ ಹತ್ಯೆಗಳ ಹಿಂದಿದ್ದಾರೆ. ಪ್ರಗತಿಪರ ಧ್ವನಿ ಎತ್ತುವ ಮತ್ತು ತಮ್ಮ ಸಿದ್ಧಾಂತವನ್ನು ಪ್ರಶ್ನಿಸುವವರನ್ನು ಗುರಿಯಾಗಿಸಿಕೊಂಡು ಈ ಹತ್ಯೆಗಳನ್ನು ನಡೆಸಲಾಗಿದೆ ಎಂದರು.
ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದ ಈ ಹತ್ಯೆಗಳು ಸರಣಿ ರೂಪದಲ್ಲಿ ನಡೆದಿದ್ದವು. 2013ರ ಆಗಸ್ಟ್ನಲ್ಲಿ ಪುಣೆಯಲ್ಲಿ ವಿಚಾರವಾದಿ ನರೇಂದ್ರ ದಾಭೋಳ್ಕರ್ ಅವರನ್ನು ಹತ್ಯೆ ಮಾಡಲಾಗಿತ್ತು. ನಂತರ 2015ರ ಫೆಬ್ರವರಿಯಲ್ಲಿ ಕೊಲ್ಲಾಪುರದಲ್ಲಿ ಸಾಮಾಜಿಕ ಕಾರ್ಯಕರ್ತ ಗೋವಿಂದ್ ಪಾನ್ಸರೆ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಅದೇ ವರ್ಷದ ಆಗಸ್ಟ್ನಲ್ಲಿ ಧಾರವಾಡದ ತಮ್ಮ ನಿವಾಸದಲ್ಲಿ ವಿಚಾರವಾದಿ ಎಂ.ಎಂ. ಕಲ್ಬುರ್ಗಿ ಅವರನ್ನು ಹಂತಕರು ಕೊಲೆ ಮಾಡಿದ್ದರು. ತರುವಾಯ 2017ರ ಸೆಪ್ಟೆಂಬರ್ನಲ್ಲಿ ಬೆಂಗಳೂರಿನ ರಾಜರಾಜೇಶ್ವರಿನಗರದ ತಮ್ಮ ನಿವಾಸದ ಹೊರಗೆ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.
ಈ ಪ್ರಕರಣಗಳ ಪ್ರಸ್ತುತ ನ್ಯಾಯಾಂಗ ಸ್ಥಿತಿಗತಿಯನ್ನು ಗಮನಿಸಿದರೆ ವಿಚಾರಣೆ ಪೂರ್ಣಗೊಳ್ಳಲು ಹಲವು ಕಾನೂನಾತ್ಮಕ ಅಡೆತಡೆಗಳಿವೆ. ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 2018ರಲ್ಲಿಯೇ ವಿಶೇಷ ತನಿಖಾ ತಂಡ (SIT) ಚಾರ್ಜ್ಶೀಟ್ ದಾಖಲಿಸಿತ್ತಾದರೂ, ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಿದ್ದು 2022ರಲ್ಲಿ. ಸದ್ಯ ಪ್ರಕರಣದಲ್ಲಿ ಈಗಾಗಲೇ 7ನೇ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದು, ವಿಚಾರಣೆ ಸುದೀರ್ಘ ಕಾಲ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಬಹುತೇಕ ಪ್ರಮುಖ ಆರೋಪಿಗಳು ಈಗಾಗಲೇ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇನ್ನೊಂದೆಡೆ, ಪ್ರೊ. ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಯೂ ನ್ಯಾಯಾಲಯದಲ್ಲಿ ತೀವ್ರ ನಿಧಾನಗತಿಯಲ್ಲಿ ಸಾಗುತ್ತಿದೆ.


