ಅಕ್ಟೋಬರ್ನಲ್ಲಿ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ನಡೆದ ಪ್ರತಿಭಟನೆಗಳ ವರದಿ ಮಾಡುತ್ತಿದ್ದ ವೇಳೆ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮೂವರು ಮಹಿಳಾ ಪತ್ರಕರ್ತರು ಮಾಡಿದ್ದ ಆರೋಪಗಳನ್ನು ದೃಢೀಕರಿಸಲು ಸಾಧ್ಯವಾಗಿಲ್ಲ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾಗಿ ‘ಬಾರ್ ಅಂಡ್ ಬೆಂಚ್’ ಬುಧವಾರ (ನ.18) ವರದಿ ಮಾಡಿದೆ.
ಮೂರು ದೂರುಗಳನ್ನು ಮುಕ್ತಾಯಗೊಳಿಸಲಾಗಿದೆ (ಕ್ಲೋಸ್ ಮಾಡಲಾಗಿದೆ) ಎಂದು ಪೊಲೀಸರು ತಿಳಿಸಿದ್ದಾಗಿ ವರದಿ ಉಲ್ಲೇಖಿಸಿದೆ.
ಅಕ್ಟೋಬರ್ 3ರಂದು ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಅವರನ್ನು ಬಂಧಿಸುತ್ತಿದ್ದ ದೃಶ್ಯವನ್ನು ಚಿತ್ರೀಕರಿಸುತ್ತಿದ್ದಾಗ, ದೆಹಲಿ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ತಮ್ಮನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ (ಲೈಂಗಿಕ ದೌರ್ಜನ್ಯ ಎಸಗಿದ್ದಾರೆ) ಎಂದು ಪತ್ರಕರ್ತೆಯೊಬ್ಬರು ಆರೋಪಿಸಿದ್ದರು. ಈ ಬೆನ್ನಲ್ಲೇ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಭಗತ್ ಅವರು, ಪ್ರತಿಭಟನೆಯ ಸಂದರ್ಭದಲ್ಲಿ ಪತ್ರಕರ್ತೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಪ್ರತಿದೂರು ನೀಡಿದ್ದರು. ಈ ಕುರಿತು ಎಫ್ಐಆರ್ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಮತ್ತು ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಆಯೋಜಿಸಿದ್ದ ಈ ಪ್ರತಿಭಟನೆಗಳು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್ಐಆರ್) ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದವು.
ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ, ಮೂವರು ಪತ್ರಕರ್ತೆಯರಲ್ಲಿ ಇಬ್ಬರು ತಮ್ಮ ದೂರುಗಳನ್ನು ಮುಂದುವರಿಸಲು ಬಯಸುವುದಿಲ್ಲ ಎಂದು ತಿಳಿಸಿದ್ದು, ಮೂರನೆಯವರು ಪೊಲೀಸ್ ವಿಚಾರಣೆಗೆ ಹಾಜರಾಗಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಅಲ್ಲದೆ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿರುವುದು ಕಂಡುಬಂದಿಲ್ಲ ಎಂಬುವುದಾಗಿ ತಿಳಿಸಿದ್ದಾರೆ ಎಂದು ‘ಬಾರ್ ಅಂಡ್ ಬೆಂಚ್’ ವರದಿ ಮಾಡಿದೆ.
ಜನಸಂದಣಿ ನಿಯಂತ್ರಣ ಕಾರ್ಯಾಚರಣೆಗಳ ಸಮಯದಲ್ಲಿ ಮಹಿಳೆಯರನ್ನು ಕೇವಲ ಮಹಿಳಾ ಪೊಲೀಸ್ ಸಿಬ್ಬಂದಿಯೇ ನಿಭಾಯಿಸಬೇಕು ಎಂಬ ಯಾವುದೇ ಕಟ್ಟುನಿಟ್ಟಿನ ನಿಯಮವಿಲ್ಲ ಎಂಬುವುದಾಗಿ ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ ಎಂದು ‘ದಿ ಹಿಂದೂ’ ವರದಿ ತಿಳಿಸಿದೆ.
ಪ್ರತಿಭಟನೆಯ ಸಮಯದಲ್ಲಿ ಜನಸಂದಣಿ ನಿಯಂತ್ರಣ ಕಾರ್ಯಾಚರಣೆಗಳಲ್ಲಿ ಪುರುಷ ಪೊಲೀಸ್ ಸಿಬ್ಬಂದಿಯ ಉಪಸ್ಥಿತಿ ಅಥವಾ ಪಾಲ್ಗೊಳ್ಳುವಿಕೆಯನ್ನು ಮುಂದಿಟ್ಟುಕೊಂಡು ದುರ್ನಡತೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ವಾದಿಸಿದ್ದಾರೆ.
ಪತ್ರಕರ್ತರು, ವಕೀಲರು ಮತ್ತು ಇತರ ವೃತ್ತಿಪರರ ಕರ್ತವ್ಯ ನಿರ್ವಹಣೆಗೆ ‘ಅಡ್ಡಿಪಡಿಸಬಾರದು’ ಎಂದು ಸುಪ್ರೀಂ ಕೋರ್ಟ್ ಅಕ್ಟೋಬರ್ 11 ರಂದು ದೆಹಲಿ ಪೊಲೀಸರಿಗೆ ನೀಡಿದ್ದ ನಿರ್ದೇಶನವು ರೀಲ್ ಮೇಕರ್ಸ್ ಮತ್ತು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳಿಗೆ ಅನ್ವಯಿಸುವುದಿಲ್ಲ ಎಂಬುವುದಾಗಿ ಅಫಿಡವಿಟ್ನಲ್ಲಿ ವಾದಿಸಲಾಗಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.
ಯಾವುದೇ ಪತ್ರಕರ್ತರಿಗೆ ತಮ್ಮ ಕರ್ತವ್ಯ ನಿರ್ವಹಿಸಲು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾಗಿ ‘ಬಾರ್ ಅಂಡ್ ಬೆಂಚ್’ ವರದಿ ಮಾಡಿದೆ.
ಅಕ್ಟೋಬರ್ನಲ್ಲಿ ಗ್ಯಾನೇಶ್ ಕುಮಾರ್ ವಿರುದ್ಧ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ, ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಪ್ರತಿಭಟನೆಗಳ ವರದಿ ಮಾಡುತ್ತಿದ್ದ ಹಲವಾರು ಪತ್ರಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಅಕ್ರಮ ಪ್ರತಿಭಟನಾ ಸ್ಥಳಗಳಿಂದ ಪ್ರತಿಭಟನಾಕಾರರನ್ನು ಚದುರಿಸಲು, ತೆರವುಗೊಳಿಸಲು ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ಮರುಸ್ಥಾಪಿಸಲು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ಅಫಿಡವಿಟ್ನಲ್ಲಿ ತಿಳಿಸಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.
“ಮಾಧ್ಯಮ ಸಿಬ್ಬಂದಿ ತಮ್ಮ ವೃತ್ತಿಪರ ಕರ್ತವ್ಯಗಳನ್ನು ಕಾನೂನುಬದ್ಧವಾಗಿ ನಿರ್ವಹಿಸುವಾಗ ಅವರನ್ನು ವಶಕ್ಕೆ ಪಡೆಯುವ, ನಿರ್ಬಂಧಿಸುವ ಅಥವಾ ಅಡ್ಡಿಪಡಿಸುವ ಉದ್ದೇಶವನ್ನು ಇದು ಹೊಂದಿರಲಿಲ್ಲ ಮತ್ತು ಆ ನಿಟ್ಟಿನಲ್ಲಿ ನಿರ್ದೇಶಿತವಾಗಿರಲಿಲ್ಲ” ಎಂದು ಪೊಲೀಸರು ವಾದಿಸಿದ್ದಾರೆ.


