ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದ ಮಹಿಳಾ ಮೀಸಲಾತಿಯ ಹೊಸ ಮಸೂದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ (ನವೆಂಬರ್ 27) ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ. ಮುಂದಿನ ವಾರದಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ.
ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಹೊಸ ಮಸೂದೆಯನ್ನು ಮಂಡಿಸಲಾಗಿದ್ದು, ಕೆಲವು ತಿದ್ದುಪಡಿಗಳೊಂದಿಗೆ ಅದಕ್ಕೆ ಅನುಮೋದನೆ ದೊರೆತಿದೆ ಎಂದು ಮೂಲಗಳು ತಿಳಿಸಿವೆ. ಕ್ಷೇತ್ರ ಮರುವಿಂಗಡಣೆ ಬಳಿಕ ಇತರ ರಾಜ್ಯಗಳಿಗೆ ಹೋಲಿಸಿದಾಗ ಯಾವುದೇ ರಾಜ್ಯವು ಲೋಕಸಭೆಯಲ್ಲಿ ತನ್ನ ಪ್ರಾತಿನಿಧ್ಯದ ಪ್ರಮಾಣವನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳಲು ಈ ತಿದ್ದುಪಡಿಗಳನ್ನು ಮಾಡಲಾಗಿದೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಸೇವಾ ತೀರ್ಥದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. ಸೋಮವಾರದಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಈ ಮಸೂದೆಯನ್ನು ಅಂಗೀಕರಿಸಲು ಸರ್ಕಾರ ಉತ್ಸುಕವಾಗಿರುವ ಹಿನ್ನೆಲೆಯಲ್ಲಿ ಸಭೆ ಕರೆಯಲಾಗಿತ್ತು.
ಕಳೆದ ಏಪ್ರಿಲ್ನಲ್ಲಿ ನಡೆದ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಸರ್ಕಾರ ಈ ಮಸೂದೆಯನ್ನು ಮಂಡಿಸಿತ್ತು. ಆದರೆ, ಲೋಕಸಭೆಯಲ್ಲಿ ಅಗತ್ಯ ಬೆಂಬಲ ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ ಮಸೂದೆ ಅಂಗೀಕಾರಗೊಂಡಿರಲಿಲ್ಲ.
ಈ ಬಾರಿ ಮಸೂದೆಯನ್ನು ಅಂಗೀಕರಿಸಲು ಅಗತ್ಯವಾದ ಸಂಖ್ಯಾಬಲ ತಮ್ಮ ಬಳಿ ಇದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.
ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರಗೊಳ್ಳಲು ಸಂಸತ್ತಿನ ಉಭಯ ಸದನಗಳಲ್ಲೂ ಮೂರನೇ ಎರಡರಷ್ಟು ಬಹುಮತದ ಬೆಂಬಲ ಕಡ್ಡಾಯವಾಗಿದೆ.
ಡಿಎಂಕೆ, ಎನ್ಸಿಪಿ ಮತ್ತು ಬಿಆರ್ಎಸ್ ಪಕ್ಷಗಳು ಈ ಮಸೂದೆಯನ್ನು ಬೆಂಬಲಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ, ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ಈ ಮಸೂದೆಯನ್ನು ವಿರೋಧಿಸುತ್ತಿದ್ದು, ಮುಂದಿನ ಶನಿವಾರ ಸಭೆ ಸೇರಿ ತನ್ನ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಲಿದೆ.


