ನವದೆಹಲಿ: ದೇಶದ ಉನ್ನತ ನ್ಯಾಯಾಂಗದಲ್ಲಿ ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ), ಇತರೆ ಹಿಂದುಳಿದ ವರ್ಗ (ಒಬಿಸಿ) ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಸಮರ್ಪಕ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂದು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ನೇಮಕಾತಿಗಳಲ್ಲಿ ಅರ್ಹತೆ ಮತ್ತು ಸಾಮಾಜಿಕ ಒಳಗೊಳ್ಳುವಿಕೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದ್ದು, ಸಮಾಜದ ನಿರ್ದಿಷ್ಟ ವರ್ಗವೊಂದರ ಅಭ್ಯರ್ಥಿಗಳಿಗೆ ನಿರಂತರವಾಗಿ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.
ಶುಕ್ರವಾರ ರಾಷ್ಟ್ರಪತಿಗಳಿಗೆ ಮೂರು ಪುಟಗಳ ಪತ್ರ ಬರೆದಿರುವ ನ್ಯಾಯಮೂರ್ತಿ ಗವಾಯಿ, ಉನ್ನತ ನ್ಯಾಯಾಂಗದ ನೇಮಕಾತಿ ಪ್ರಕ್ರಿಯೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸಾಮಾಜಿಕ ಅಸಮಾನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ ಐದಕ್ಕಿಂತಲೂ ಕಡಿಮೆ ಇರುವ ಒಂದು ನಿರ್ದಿಷ್ಟ ಸಮುದಾಯವು ಸುಪ್ರೀಂ ಕೋರ್ಟ್ನಲ್ಲಿ ಶೇಕಡಾ 40ಕ್ಕಿಂತ ಹೆಚ್ಚು ಪ್ರಾತಿನಿಧ್ಯ ಹೊಂದಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ, ಈ ಸಮುದಾಯದ ಹೆಸರನ್ನು ಅವರು ಬಹಿರಂಗಪಡಿಸಿಲ್ಲ. ನ್ಯಾಯಾಂಗ ವ್ಯವಸ್ಥೆಯಲ್ಲಿ ಎಲ್ಲ ಸಮುದಾಯಗಳಿಗೂ ಸಮಾನ ಅವಕಾಶ ಮತ್ತು ಪ್ರಾತಿನಿಧ್ಯ ದೊರೆಯಬೇಕಾದ ಅಗತ್ಯವನ್ನು ಅವರು ಒತ್ತಿಹೇಳಿದ್ದಾರೆ.
ತಮ್ಮ ವಾದಕ್ಕೆ ಪೂರಕವಾಗಿ ಸರ್ಕಾರದ ಅಂಕಿಅಂಶಗಳನ್ನು ಉಲ್ಲೇಖಿಸಿರುವ ಗವಾಯಿ, 2018ರಿಂದ ದೇಶದ ವಿವಿಧ ಹೈಕೋರ್ಟ್ಗಳಿಗೆ ನೇಮಕಗೊಂಡಿರುವ ಒಟ್ಟು 715 ನ್ಯಾಯಮೂರ್ತಿಗಳ ಪೈಕಿ ಕೇವಲ 22 ಮಂದಿ ಪರಿಶಿಷ್ಟ ಜಾತಿಗೆ, 16 ಮಂದಿ ಪರಿಶಿಷ್ಟ ಪಂಗಡಕ್ಕೆ, 89 ಮಂದಿ ಇತರೆ ಹಿಂದುಳಿದ ವರ್ಗಗಳಿಗೆ ಮತ್ತು 37 ಮಂದಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದವರಾಗಿದ್ದಾರೆ ಎಂದು ತಿಳಿಸಿದ್ದಾರೆ. ಈ ಅಂಕಿಅಂಶಗಳು ಉನ್ನತ ನ್ಯಾಯಾಂಗದಲ್ಲಿ ಸಾಮಾಜಿಕವಾಗಿ ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಪ್ರಾತಿನಿಧ್ಯದ ಕೊರತೆಯನ್ನು ಸ್ಪಷ್ಟಪಡಿಸುತ್ತವೆ ಎಂಬುದು ಅವರ ಆಕ್ಷೇಪವಾಗಿದೆ.
ಸಾಂವಿಧಾನಿಕ ನ್ಯಾಯಾಲಯಗಳಲ್ಲಿರುವ ಪ್ರತಿ ನಾಲ್ವರು ನ್ಯಾಯಮೂರ್ತಿಗಳ ಪೈಕಿ ಸರಿಸುಮಾರು ಮೂವರು ಸಾಮಾನ್ಯ ವರ್ಗಕ್ಕೆ ಸೇರಿದವರಾಗಿದ್ದಾರೆ ಎಂದೂ ಅವರು ಪತ್ರದಲ್ಲಿ ಗಮನಸೆಳೆದಿದ್ದಾರೆ. ನ್ಯಾಯಾಂಗದಂತಹ ಮಹತ್ವದ ಸಾಂವಿಧಾನಿಕ ಸಂಸ್ಥೆಯಲ್ಲಿ ಸಾಮಾಜಿಕ ವೈವಿಧ್ಯತೆ ಮತ್ತು ಸಮಾನ ಪ್ರಾತಿನಿಧ್ಯಕ್ಕೆ ಆದ್ಯತೆ ನೀಡಬೇಕೆಂಬ ಚರ್ಚೆಯನ್ನು ಮಾಜಿ ಸಿಜೆಐ ಅವರ ಈ ಪತ್ರ ಮತ್ತೆ ಮುನ್ನೆಲೆಗೆ ತಂದಿದೆ.
ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದ ಬಿ.ಆರ್. ಗವಾಯಿ ಅವರು 2025ರ ನವೆಂಬರ್ 23ರಂದು ತಮ್ಮ ಅಧಿಕಾರಾವಧಿ ಪೂರ್ಣಗೊಳಿಸಿದ್ದರು. ಅವರ ನಂತರ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.


