ಮೈಸೂರು: ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡಲು ಹಗಲಿರುಳು ಶ್ರಮಿಸುವ ಪೌರಕಾರ್ಮಿಕರಿಗೆ ಸ್ವಂತ ಮನೆಯ ಸೌಲಭ್ಯ ಕಲ್ಪಿಸುವುದು ಸರ್ಕಾರದ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಪೌರಕಾರ್ಮಿಕರ ಬದುಕಿನಲ್ಲಿ ಗೌರವ, ಸ್ವಾಭಿಮಾನ ಮತ್ತು ಭದ್ರತೆ ತರುವ ಉದ್ದೇಶದಿಂದ ಜಾರಿಗೆ ತಂದಿರುವ ಗೃಹಭಾಗ್ಯ ಯೋಜನೆಯನ್ನು ಮುಂದುವರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮೈಸೂರಿನ ನಾಯ್ಡು ನಗರ ಮುಖ್ಯರಸ್ತೆಯ ಎಸ್‌ಟಿಪಿ ಪ್ಲಾಂಟ್ ಸಮೀಪದ ಹಳೆ ಕೆಸರೆಯಲ್ಲಿ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಮತ್ತು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಿರುವ ಜಿ+3 ಮಾದರಿಯ ವಸತಿ ಸಮುಚ್ಚಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಒಟ್ಟು 158 ಪೌರಕಾರ್ಮಿಕ ಕುಟುಂಬಗಳಿಗಾಗಿ ವಸತಿ ಸಮುಚ್ಚಯ ನಿರ್ಮಿಸಲಾಗಿದೆ. ಈ ಪೈಕಿ 122 ಕುಟುಂಬಗಳನ್ನು ಪಾರದರ್ಶಕ ಲಾಟರಿ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಿ ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಮನೆ ಹಂಚಿಕೆ ಪತ್ರಗಳನ್ನು ವಿತರಿಸಲಾಯಿತು. ಪೌರಕಾರ್ಮಿಕರ ಬಹುದಿನಗಳ ಸ್ವಂತ ಮನೆಯ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ ಹೆಜ್ಜೆಯಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ತಮ್ಮ ತಂದೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2014-15ನೇ ಸಾಲಿನಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಸ್ವಂತ ಮನೆ ಕಲ್ಪಿಸುವ ಉದ್ದೇಶದಿಂದ ಗೃಹಭಾಗ್ಯ ಯೋಜನೆಗೆ ಚಾಲನೆ ನೀಡಿ ಭದ್ರ ಬುನಾದಿ ಹಾಕಿದ್ದರು. ಇದೇ ಅವಧಿಯಲ್ಲಿ ಸುಮಾರು 29 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸುವ ಮೂಲಕ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದರು. ಈ ಕ್ರಮಗಳು ಪೌರಕಾರ್ಮಿಕರ ಬದುಕಿನಲ್ಲಿ ಉದ್ಯೋಗದ ಭದ್ರತೆ ಮತ್ತು ಗೌರವ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದು ಅವರು ಸ್ಮರಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿವರ್ಷ ಪೌರಕಾರ್ಮಿಕರ ದಿನಾಚರಣೆ ಆಚರಿಸುವುದಾಗಿ ಘೋಷಿಸಿರುವುದರ ಜೊತೆಗೆ, ಪೌರಕಾರ್ಮಿಕರಿಗೆ ನೀಡಲಾಗುವ ಬೆಳಗಿನ ಉಪಾಹಾರದ ಅನುದಾನವನ್ನೂ ಹೆಚ್ಚಿಸಿದ್ದಾರೆ. ಪೌರಕಾರ್ಮಿಕರ ಕಲ್ಯಾಣಕ್ಕೆ ಸರ್ಕಾರ ನಿರಂತರ ಆದ್ಯತೆ ನೀಡುತ್ತಿದೆ ಎಂದರು.
ಹಳೆ ಕೆಸರೆಯಲ್ಲಿ ಪರ್ಯಾಯ ನಿವೇಶನ ಒದಗಿಸುವ ವಿಚಾರದಲ್ಲಿ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರು ವಿಶೇಷ ಮುತುವರ್ಜಿ ವಹಿಸಿದ್ದಾರೆ. ಅವರ ಸಾಮಾಜಿಕ ಕಳಕಳಿ ಮತ್ತು ಸಹಕಾರಕ್ಕೆ ಧನ್ಯವಾದ ಸಲ್ಲಿಸಿದ ಯತೀಂದ್ರ ಸಿದ್ದರಾಮಯ್ಯ, ಪೌರಕಾರ್ಮಿಕರ ಬೇಡಿಕೆಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಈಡೇರಿಸಲು ಸರ್ಕಾರ ಬದ್ಧವಾಗಿದ್ದು, ಅವರೊಂದಿಗೆ ಸದಾ ಇರಲಿದೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಆಶಯದೊಂದಿಗೆ ಶೋಷಿತರು, ಹಿಂದುಳಿದವರು ಮತ್ತು ಶ್ರಮಿಕ ವರ್ಗದವರ ಬದುಕಿನಲ್ಲಿ ಗೌರವ ಹಾಗೂ ಸ್ವಾಭಿಮಾನ ಹೆಚ್ಚಿಸಲು ಬದ್ಧವಾಗಿದೆ. ಪೌರಕಾರ್ಮಿಕರ ಬದುಕನ್ನು ಸುಧಾರಿಸುವುದು ಕೇವಲ ಯೋಜನೆಯಲ್ಲ, ಅದು ಸರ್ಕಾರದ ಸಾಮಾಜಿಕ ಹೊಣೆಗಾರಿಕೆ. ನಗರದ ಸ್ವಚ್ಛತೆಗಾಗಿ ದುಡಿಯುವ ಕಾರ್ಮಿಕರಿಗೆ ಉತ್ತಮ ವಸತಿ ಮತ್ತು ಗೌರವಯುತ ಬದುಕು ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನೀಲ್ ಬೋಸ್, ಶಾಸಕ ತನ್ವೀರ್ ಸೇಠ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಕರ್ನಾಟಕ ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ, ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ಅಧ್ಯಕ್ಷ ಎಚ್.ಡಿ. ಗಣೇಶ್, ಮೈಸೂರು ಮಹಾನಗರ ಪಾಲಿಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಪುಷ್ಪವಲ್ಲಿ, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಶೋಕ್ ಸಾಲಪ್ಪ, ಪಾಲಿಕೆ ಆಡಳಿತಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಪಾಲಿಕೆ ಆಯುಕ್ತೆ ಎಂ.ಕೆ. ಸವಿತ ಸೇರಿದಂತೆ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


