ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಶಿಕ್ಷಣ ಈ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗಲಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಮೊದಲ ಹಂತದಲ್ಲಿ 275 ಪಬ್ಲಿಕ್ ಶಾಲೆಗಳಲ್ಲಿ ಪ್ರಾರಂಭಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದಿದ್ದಾರೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ, ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಶಿಕ್ಷಣ ನೀಡುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. 275 ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ತೀರ್ಮಾನ ಮಾಡಲಾಗಿದೆ ಎಂದರು.
ಇದನ್ನೂ ಓದಿ: ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ
ಇನ್ನು ಇದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಶಿಕ್ಷಣ ನೀಡಲು ಡಿಎಡ್ ಆದವರಿಗೆ ಮಾಂಟೆಸ್ಸರಿ ತರಬೇತಿ ನೀಡಲಾಗುತ್ತಿದೆ. ಶಿಕ್ಷಕರಿಗೆ 7,500 ರೂಪಾಯಿ ಮತ್ತು ಆಯಾಗಳಿಗೆ 5,000 ರೂಪಾಯಿ ಗೌರವ ಸಂಭಾವನೆ ನೀಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದರು.
ಹಾಗೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಜಿಟಲ್ ಲರ್ನಿಂಗ್ ಕೋರ್ಸ್ ಆರಂಭಿಸಲು ತೀರ್ಮಾನ ಮಾಡಲಾಗಿದೆ ಎನ್ನುವ ಮಾಹಿತಿ ನೀಡಿದರು.
ಇದನ್ನೂ ಓದಿ: ಸರ್ಕಾರಿ ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ ಎಂದು ದೂರಿದ ಖಾಸಗಿ ಶಾಲೆಗಳು!


