ಶಿರಾ ಉಪಚುನಾವಣೆಯ ಪ್ರಚಾರ ದಿನದಿಂದ ದಿನಕ್ಕೆ ಕಾವೇರತೊಡಗಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪಕ್ಷಗಳು ಸಾಮಾಜಿಕ ಮಾಧ್ಯಮದಲ್ಲಿ ಜೋರಾಗಿ ಸದ್ದು ಮಾಡತೊಡಗಿವೆ. ದೇವಾಲಯಗಳಿಗೆ ಹಣ, ಮದಲೂರು ಕೆರೆಗೆ ನೀರು ಹರಿಸುವುದು, ಕ್ಷೇತ್ರದ ಅಭಿವೃದ್ಧಿ ವಿಷಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿವೆ.
ಬಿಜೆಪಿ ಮಿನಿವಿಧಾನಸೌಧ ಉದ್ಘಾಟಿಸಿ ಪ್ರಚಾರಕ್ಕೆ ನಾಂದಿ ಹಾಡಿದ್ದರೆ, ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಸಭೆ ನಡೆಸಿ ಪಕ್ಷ ಸಂಘಟನೆಗೆ ಮುಂದಾಗಿದೆ. ಜೆಡಿಎಸ್ ಬೆಂಗಳೂರಿನಲ್ಲಿ ಕಾರ್ಯಕರ್ತರ ಸಭೆ ನಡೆಸಿದೆ. ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮೂರು ಪಕ್ಷಗಳು ಇನ್ನಿಲ್ಲದ ತಂತ್ರಗಳನ್ನು ಹೆಣೆಯುತ್ತಿವೆ.

ಶಿರಾ ನಗರದ ಕಲ್ಯಾಣ ಮಂಟಪವೊಂದರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆದಿದೆ. ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಆ ಮೂಲಕ ಮತದಾರರನ್ನು ನೇರವಾಗಿ ತಲುಪುವ ಕಾರ್ಯಕ್ಕೆ ಕಾಂಗ್ರೆಸ್ ತಯಾರಿ ನಡೆಸಿದೆ. ಕಾರ್ಯಕರ್ತರ ಸಭೆಯಲ್ಲಿ ಮುಖಂಡರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಕಾರ್ಯಕರ್ತರು ಪಕ್ಷದ ಗೆಲುವಿಗೆ ಶ್ರಮವಹಿಸಬೇಕು. ಸರ್ಕಾರದ ಲೋಪದೋಷಗಳು, ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಂದೇಶ ರವಾನಿಸಲಾಗಿದೆ.
ಮಾಜಿ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮಾತನಾಡಿ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆಯಿತು. ಯಾವುದೇ ಅಭಿವೃದ್ಧಿ ಆಗಿಲ್ಲ. ಜನರಲ್ಲಿ ಗೊಂದಲಗಳನ್ನು ಸೃಷ್ಟಿ ಮಾಡುತ್ತಿದೆ. ಕೊರೊನ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿದೆ. ನಮಗೆ ಅಧಿಕಾರ ಕೊಡಿ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದೇ ವಿಷಯವನ್ನು ಚುನಾವಣೆಯಲ್ಲಿ ಜನರಿಗೆ ತಿಳಿಸಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳು, ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಮತ ಯಾಚನೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ನಾನು ಸಚಿವ, ಶಾಸಕನಾಗಿದ್ದ ಸಂದರ್ಭದಲ್ಲಿ ಶಿರಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಚೆಕ್ ಡ್ಯಾಂಗಳನ್ನು ನಿರ್ಮಿಸಿದ್ದೇನೆ. ಹೇಮಾವತಿ ನೀರನ್ನು ಶಿರಾದ ಕೆರೆಗಳಿಗೆ ಹರಿಸಿದ್ದೇನೆ. ಮದಲೂರು ಕೆರೆಗೂ 42 ದಿನ ನೀರು ಹರಿಸಲಾಗಿದೆ. ಕ್ಷೇತ್ರದಲ್ಲಿ ನಾನು ಸಾಕಷ್ಟು ಅಬಿವೃದ್ಧಿ ಮಾಡಿದ್ದೇನೆ. ನನಗೆ ಜನರೇ ದೇವರು. ನೀವು ನನಗೆ ಶಕ್ತಿ ನೀಡಿ. ಜನರ ಸೇವೆಯನ್ನು ಮಾಡುತ್ತೇನೆ. ಋಣ ತೀರಿಸುತ್ತೇನೆ ಎಂದು ಹೇಳಿದರು.
ವೇದಿಕೆಯಲ್ಲಿ ಮಾತನಾಡಿದ ಬಹುತೇಕ ಮುಖಂಡರು ಉಪಚುನಾವಣೆಯನ್ನು ನಿರ್ಲಕ್ಷಿಸುವಂತಿಲ್ಲ, ಇದು ಕಾಂಗ್ರೆಸ್ ಪಕ್ಷದ ಅಳಿವು-ಉಳಿವಿನ ಪ್ರಶ್ನೆ. ಇಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲೇಬೇಕು ಎಂದರು. ಬಿಜೆಪಿ ಭಾವನಾತ್ಮಕ ವಿಷಯಗಳನ್ನು ಎತ್ತಿದರೆ, ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳನ್ನು ಮುಂದಿಡುತ್ತಿದೆ. ಜೆಡಿಎಸ್ ಅನುಕಂಪದ ಅಲೆಯಲ್ಲೇ ಮುಳುಗಿದೆ ಎಂದು ಟೀಕಾಪ್ರಹಾರ ನಡೆಸಿದರು.
ಇದನ್ನೂ ಓದಿ:


