ವಿಧಾನಸಭೆಗೆ ನಡೆಯುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಮತ್ತು ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನೂರಕ್ಕೆ ನೂರರಷ್ಟು ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತುಮಕೂರು ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲ ಜನರ ಅಭಿವೃದ್ಧಿಗೆ ಕೆಲಸ ಮಾಡುತ್ತಿವೆ. ಹಲವು ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ರಾಜ್ಯ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ಕಾರ್ಯಕರ್ತರು ಪ್ರತಿಯೊಬ್ಬ ಮತದಾರರನ್ನು ಭೇಟಿ ಮಾಡಿ ಬಿಜೆಪಿಗೆ ಮತ ಚಲಾಯಿಸುವಂತೆ ಮನವೊಲಿಸಬೇಕು ಎಂದು ತಿಳಿಸಿದರು.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾತನಾಡಿ ಕೇಂದ್ರ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಹಲವು ಸಮಸ್ಯೆಗಳನ್ನ ನೀಗಿಸಿದೆ. ಕೊರೊನ ಸೋಂಕು ನಿಯಂತ್ರಿಸುವಲ್ಲಿ ಹಲವು ಕಠಿಣ ಕ್ರಮಗಳನ್ನು ಅನುಸರಿಸಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಿಧಾನ ಪರಿಷತ್ ಚುನಾವಣೆಯ ಪ್ರಚಾರಕ್ಕೆ ಬಂದು ಹೋದರೆ ಹೊರತು, ಶಿರಾ ಉಪಚುನಾವಣಾ ಪ್ರಚಾರಕ್ಕೆ ತೆರಳಲಿಲ್ಲ. ಹೀಗಾಗಿ ವಿಧಾನ ಪರಿಷತ್‌ನಲ್ಲಿ ತನ್ನ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ ಶತಪ್ರಯತ್ನಪಡುತ್ತಿದೆ.
ಪರಿಷತ್‌ನಲ್ಲಿ ಆಡಳಿತ ಪಕ್ಷದ ಸದಸ್ಯರ ಸಂಖ್ಯೆ ಕಡಿಮೆ ಇರುವುದರಿಂದ ಮಸೂದೆಗಳನ್ನು ಅಂಗೀಕರಿಸಲು ಸಾಧ್ಯವಾಗುತ್ತಿಲ್ಲ. ವಿಧಾನಸಭೆಯಲ್ಲಿ ಹಲವು ಮಸೂದೆಗಳನ್ನು ಅಂಗೀಕರಿಸಲಾಗಿದ್ದರೂ ಪರಿಷತ್‌ನಲ್ಲಿ ಅಂಗೀಕಾರ ಪಡೆಯಲು ಸದಸ್ಯರ ಕೊರತೆ ಇದೆ. ಸುಗ್ರೀವಾಜ್ಞೆಗಳು ಕೂಡ ಪರಿಷತ್ತಿನಲ್ಲಿ ಬಿದ್ದುಹೋಗಿವೆ. ಹಾಗಾಗಿ ಬಿಜಪಿ ಇತ್ತ ಗಮನಹರಿಸಿದೆ ಎಂದು ಹೇಳಲಾಗುತ್ತಿದೆ.
ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕೂಡ ಪರಿಷತ್‌ನಲ್ಲಿ ಸದಸ್ಯರ ಸಂಖ್ಯೆಯನ್ನು ಹೆಚ್ಷಿಸಿಕೊಳ್ಳುವುದಕ್ಕೆ ಬಿಜೆಪಿ ಒತ್ತು ನೀಡುತ್ತಿದೆ ಎಂದು ಹೇಳಿ ಹೋಗಿದ್ದರು. ಈಗ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವುದು ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಆಗ್ನೇಯ ಪದವೀಧರರ ಕ್ಷೇತ್ರ ಜೆಡಿಎಸ್ ತೆಕ್ಕೆಯಲ್ಲಿತ್ತು. ಇದೀಗ ಚೌಡರೆಡ್ಡಿ ತೂಪಲ್ಲಿ ಜೆಡಿಎಸ್‌ನಿಂದ, ರಮೇಶ್ ಬಾಬು ಕಾಂಗ್ರೆಸ್‌ನಿಂದ ಮತ್ತು ಬಿಜೆಪಿಯಿಂದ ಚಿದಾನಂದಗೌಡ ಅಭ್ಯರ್ಥಿಗಳಾಗಿ ಕಣದಲ್ಲಿದ್ದಾರೆ. ಅದೇ ಕಾರಣಕ್ಕೇ ಬಿಜೆಪಿ ಚಿದಾನಂದಗೌಡರನ್ನು ಗೆಲ್ಲಿಸಿಕೊಳ್ಳಲು ತಂತ್ರ ಹೆಣೆದಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಕೂಡ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿವೆ.
ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿ ಕಣದಲ್ಲಿರುವ ಶ್ರೀನಿವಾಸ್ ಮತ್ತು ಹಾಲನೂರು ಲೇಪಾಕ್ಷ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಶ್ರೀನಿವಾಸ್ ಪತ್ನಿ ಪೂರ್ಣಿಮ ಬಿಜೆಪಿ ಶಾಸಕಿಯಾಗಿದ್ದಾರೆ. ಈ ಇಬ್ಬರೂ ಕೂಡ ಮತದಾರರ ಮೇಲೆ ಸ್ವಲ್ಪಮಟ್ಟಿನ ಪ್ರಭಾವ ಬೀರುವಷ್ಟು ಶಕ್ತಿಯನ್ನು ಹೊಂದಿದ್ದಾರೆ. ಇದು ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಹಿನ್ನಡೆಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.


