ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿ ಶತಪ್ರಯತ್ನ ನಡೆಸುತ್ತಿದೆ. ಈ ಉದ್ದೇಶದಿಂದ ಪಕ್ಷದ ಸಾಂಸ್ಥಿಕ ವಿಷಯಗಳ ಬಗ್ಗೆ ಮಾಹಿತಿ ಪಡೆಯಲು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಮುಖಂಡ ಅಮಿತ್ ಶಾ ನವೆಂಬರ್ 5 ರಿಂದ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ.
ಆದರೆ ಪಶ್ಚಿಮ ಬಂಗಾಳಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನವೆಂಬರ್ 6ಕ್ಕೆ ಭೇಟಿ ನೀಡಬೇಕಿತ್ತು. ಆದರೆ ತಡ ರಾತ್ರಿಯ ಬೆಳವಣಿಗೆಯಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿಗದಿತ ಭೇಟಿ ರದ್ದುಗೊಂಡಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಯಂತನ್ ಬಸು ಮಾಹಿತಿ ನೀಡಿದ್ದಾರೆ.
“ಜೆ.ಪಿ.ನಡ್ಡಾ ಜಿ ಅವರ ಭೇಟಿ ರದ್ದುಗೊಂಡಿದೆ. ಅಮಿತ್ ಶಾ ಜಿ ಅವರು ನವೆಂಬರ್ 5 ರಿಂದ ಎರಡು ದಿನಗಳ ಪಶ್ಚಿಮ ಬಂಗಾಳದಲ್ಲಿರುತ್ತಾರೆ ಎಂದು ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ. ’ಅಮಿತ್ ಶಾ ನವೆಂಬರ್ 5 ರಂದು ಮದಿನಿಪುರ ಸಾಂಸ್ಥಿಕ ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆಯಿದೆ ಮತ್ತು ಮರುದಿನ ಅವರು ರಾಜ್ಯದ ಪಕ್ಷದ ಮುಖಂಡರನ್ನು ಭೇಟಿಯಾಗಲಿದ್ದಾರೆ. ಈಗಿನ ವೇಳಾಪಟ್ಟಿಯನ್ನು ಇನ್ನು ಅಂತಿಮಗೊಳಿಸಲಾಗಿಲ್ಲ’ ಎಂದು ಬಸು ತಿಳಿಸಿದ್ದಾರೆ.
ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಪಕ್ಷ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದು, ಬಂಗಾಳ ಪ್ರವಾಸದಲ್ಲಿ ಸಂಘಟನೆಯ ವಿವಿಧ ಅಂಶಗಳನ್ನು ಪರಿಶೀಲಿಸಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಂಗಾಳದ ಉಸ್ತುವಾರಿ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.
ಇದನ್ನೂ ಓದಿ: ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ
ಅಮಿತ್ ಶಾ, ಪಕ್ಷದ ಹಿರಿಯ ನಾಯಕರಾದ ಕೈಲಾಶ್ ವಿಜಯವರ್ಗಿಯಾ, ಉಪಾಧ್ಯಕ್ಷ ಮುಕುಲ್ ರಾಯ್ ಮತ್ತು ಪಕ್ಷದ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಅವರೊಂದಿಗೆ ಮತ್ತು ಬೂತ್, ಜಿಲ್ಲಾ ಮಟ್ಟದ ನಾಯಕರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಕ್ಕೆ ತಿಳಿಸಿವೆ.
ಅಮಿತ್ ಶಾ ಈ ವರ್ಷದ ಆರಂಭದಲ್ಲಿ ಪಶ್ಚಿಮ ಬಂಗಾಳದಲ್ಲಿ ವರ್ಚುವಲ್ ರ್‍ಯಾಲಿ ನಡೆಸಿದ್ದರು. ಕೊರೊನಾ ಲಾಕ್‌ಡೌನ್ ನಂತರ ಪಶ್ಚಿಮ ಬಂಗಾಳಕ್ಕೆ ಇದು ಅವರ ಮೊದಲ ಪ್ರವಾಸವಾಗಿದೆ. ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಟೀಕಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಶಾ ಅವರ ಭೇಟಿ ಮಹತ್ವದ್ದಾಗಿದೆ.
ಪಶ್ಚಿಮ ಬಂಗಾಳದ ಬಿಜೆಪಿ ನಾಯಕರು ಮತ್ತು ರಾಜ್ಯಪಾಲ ಜಗದೀಪ್ ಧಂಕರ್ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೆಟ್ಟುಹೋಗಿದೆ ಎಂದು ಆರೋಪಿಸಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಒತ್ತಾಯಿಸುತ್ತಿದ್ದಾರೆ.
2019 ರ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆದ್ದ ಬಿಜೆಪಿ ಆಡಳಿತಾಎ ತೃಣಮೂಲ ಕಾಂಗ್ರೆಸ್ಸಿನ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಿದೆ. ಹೀಗಾಗಿ ಈ ಬಾರಿ ಹೇಗಾದರೂ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಅಮಿತ್ ಶಾ ಹೊಸ ಪಟ್ಟುಗಳನ್ನು ಹಾಕುತ್ತಿದ್ದಾರೆ. ಜೆ.ಪಿ.ನಡ್ಡಾರ ಪ್ರವಾಸವನ್ನು ರದ್ದುಗೊಳಿಸಿ, ತಾವೇ ಅಲ್ಲಿನ ಸ್ಥಿತಿಗತಿಗಳನ್ನು ತಿಳಿದುಕೊಳ್ಳು ಹೊರಟಿದ್ದಾರೆ.
ಮುಂದಿನ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ 10 ವರ್ಷಗಳ ಆಡಳಿತವನ್ನು ಕೊನೆಗೊಳಿಸುವುದಾಗಿ ಬಿಜೆಪಿ ಪಕ್ಷದ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


