ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಉಲ್ಬಣಗೊಂಡಿರುವುದಕ್ಕೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಜನರು ಮಾಸ್ಕ್ ಧರಿಸುವುದು, ಸ್ಯಾನಿಟೈಜರ್ ಬಳಕೆ ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಕೊರೊನಾ ನಿಯಮಾವಳಿಗಳನ್ನು ಪಾಲಿಸುತ್ತಿದ್ದಾರೆಯೇ ಎಂದು ಕಟ್ಟುನಿಟ್ಟಾಗಿ ಗಮನಿಸುವಂತೆ ಕೇಂದ್ರ ಸರ್ಕಾರ ಶುಕ್ರವಾರ ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.
ಕೊರೊನಾ ಪ್ರಕರಣಗಳು ಹಠಾತ್ ಉಲ್ಬಣವಾಗಲು ಜನರು, ಸಾರ್ವಜನಿಕ ಸ್ಥಳಗಳಲ್ಲಿ, ವಿಶೇಷವಾಗಿ ಕಿಕ್ಕಿರಿದ ಸ್ಥಳಗಳಲ್ಲಿ ಕೊರೊನಾ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದೆ ಇರುವುದು ಇದಕ್ಕೆ ಕಾರಣ ಎಂದು ಕೇಂದ್ರ ಸರ್ಕಾರ ಹೇಳಿದೆ.
“ದೇಶದಲ್ಲಿ ಸುಮಾರು ಐದು ತಿಂಗಳುಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕುಸಿತದ ನಂತರ, ಕಳೆದ ಕೆಲವು ವಾರಗಳಿಂದ, ಈ ಸಂಖ್ಯೆಯು ದೇಶದ ಹಲವಾರು ಭಾಗಗಳಲ್ಲಿ ಹೆಚ್ಚಾಗುತ್ತಿರುವುದು ಕಾಣಿಸುತ್ತಿದೆ. ಇದು ಹೆಚ್ಚಾಗಿ ಕೊರೊನಾ ನಿಯಮಗಳ ಉಲ್ಲಂಘನೆಯಿಂದ ಬಂದಿದೆ. ಜನಸಾಮಾನ್ಯರು, ವಿಶೇಷವಾಗಿ ಜನದಟ್ಟಣೆ ಇರುವ ಸ್ಥಳಗಳಲ್ಲಿ ಕೊರೊನಾ ನಿಯಮಾವಳಿಗಳನ್ನು ಪಾಲಿಸದಿರುವುದರಿಂದ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ” ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದು ತಿಳಿಸಿದ್ದಾರೆ.
ಇದನ್ನೂ ಓದಿ: ಮೋದಿ, ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ
’ಪ್ರಕರಣಗಳ ಸಂಖ್ಯೆಯಲ್ಲಿನ ಹೊಸ ಏರಿಕೆ ಮತ್ತು ಮುಂಬರುವ ಹಬ್ಬ ಹರಿದಿನಗಳನ್ನು ಗಮನದಲ್ಲಿಟ್ಟುಕೊಂಡು ಮಾರ್ಗಸೂಚಿಗಳ ಪಾಲನೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಕೊರೊನಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಮುಖ್ಯ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಪತ್ರದಲ್ಲಿ ಸೂಚಿಸಿದ್ದಾರೆ.
ಕಳೆದ ಐದು ತಿಂಗಳುಗಳ ನಂತರ, ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ ಏರಿಕೆ ಕಂಡು ಬಂದಿದೆ.
ದೇಶದಲ್ಲಿ ಕೊರೊನಾ ಆತಂಕಕಾರಿಯಾಗಿ ಉಲ್ಬಣವಾಗಿರುವುದರಿಂದ ಪಂಜಾಬ್ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಮತ್ತೆ ಶಾಲೆಗಳನ್ನು ಮುಚ್ಚಲಾಗಿದೆ. ಸಾರ್ವಜನಿಕ ಕಾರ್ಯಕ್ರಮಗಳ ಮೇಲಿನ ನಿರ್ಬಂಧಗಳನ್ನು ಹೆಚ್ಚಿಸಲಾಗಿದೆ.
ಮಹಾರಾಷ್ಟ್ರ, ಪಂಜಾಬ್, ಕರ್ನಾಟಕ, ಗುಜರಾತ್ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ದೈನಂದಿನ ಹೊಸ ಪ್ರಕರಣಗಳ ಹೆಚ್ಚಳ ಶೇಕಡಾ 80.63 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಪ್ರಸ್ತುತ ದೇಶದಲ್ಲಿ 40,953 ಹೊಸ ಕೊರೊನಾ ಪ್ರಕರಣಗಳಿವೆ. ಈ ಸಂಖ್ಯೆ ನವೆಂಬರ್ 29 ರ ನಂತರದ ಗರಿಷ್ಠ ದೈನಂದಿನ ಏರಿಕೆಯಾಗಿದೆ ಎಂದು ಸರ್ಕಾರದ ಅಂಕಿ ಅಂಶಗಳು ತೋರಿಸುತ್ತವೆ. ಕಳೆದ ವಾರದಿಂದ ದೇಶದಲ್ಲಿ 20,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.
ಇದನ್ನೂ ಓದಿ: ರಾಜ್ಯದಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ಹೇರುವುದಿಲ್ಲ- ಸಿಎಂ ಯಡಿಯೂರಪ್ಪ



We have to live with passage of time but not with rigid beliefs.