ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಹಾಗೂ ಅತ್ಯಾಚಾರದ ಆರೋಪಿಯನ್ನು ಜೊತೆಯಾಗಿ ಕಟ್ಟಿ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಡಕಟ್ಟು ಪ್ರಾಬಲ್ಯದ ಅಲಿರಾಜ್‌ಪುರದಲ್ಲಿ ಅತ್ಯಾಚಾರ ಆರೋಪಿ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. 16 ವರ್ಷದ ಬಾಲಕಿ ಮೇಲೆ 21 ವರ್ಷದ ಯುವಕ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.
ಬಾಲಕಿ ಹಾಗೂ ಆರೋಪಿಯನ್ನು ಜೊತೆಯಾಗಿ ಹಗ್ಗದಿಂದ ಕಟ್ಟಿ, ಥಳಿಸಿ ಬೀದಿಯಲ್ಲಿ ಮೆರವಣಿಗೆ ಮಾಡಿಸುತ್ತಾ “ಭಾರತ್ ಮಾತಾ ಕಿ ಜೈ” ಎಂದು ಘೋಷಣೆ ಕೂಗುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಬಾಲಕಿಯನ್ನು ಪೊಲೀಸರು ರಕ್ಷಿಸಿದ್ದು, ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಎರಡು ಪ್ರಕರಣ ದಾಖಲಿಸಲಾಗಿದೆ ಎಂದು ಉಪವಿಭಾಗ ಪೊಲೀಸ್ ಅಧಿಕಾರಿ ದಿಲೀಪ್ ಸಿಂಗ್ ಬಿಲ್ವಾಲ್ ಹೇಳಿದ್ದಾರೆ.
ಇದನ್ನೂ ಓದಿ: ಬಾಂಗ್ಲಾದೇಶಕ್ಕಾಗಿ ಹೋರಾಡಿ ಜೈಲು ಸೇರಿದ್ದ ಪ್ರಧಾನಿ: RTI ಅಡಿಯಲ್ಲಿ ಮಾಹಿತಿ ಕೋರಿ ಅರ್ಜಿ
“21 ವರ್ಷದ ಯುವಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯನ್ನು ಹೊಡೆದು ಮೆರವಣಿಗೆ ಮಾಡಿದ್ದಕ್ಕಾಗಿ ಸಂತ್ರಸ್ತೆಯ ಕುಟುಂಬದವರು ಮತ್ತು ಗ್ರಾಮಸ್ಥರ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ” ಎಂದು ಹೇಳಿದ್ದಾರೆ. ಆರೋಪಿ ಯುವಕ ವಿವಾಹಿತನಾಗಿದ್ದು, ಈತನಿಗೆ ಇಬ್ಬರು ಮಕ್ಕಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಭಾರತೀಯ ದಂಡಸಂಹಿತೆ ಮತ್ತು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಆರೋಪಿ ವಿರುದ್ಧ ದೂರು ದಾಖಲಿಸಲಾಗಿದೆ. ಸಂತ್ರಸ್ತೆಯ ಕುಟುಂಬದವರು ಮತ್ತು ಸಂಬಂಧಿಕರ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 294 (ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲ ಕ್ರಮ), 355 (ಹಲ್ಲೆ ಅಥವಾ ವ್ಯಕ್ತಿಯ ಗೌರವಕ್ಕೆ ಚ್ಯುತಿ ಬರುವ ರೀತಿಯಲ್ಲಿ ಅಪರಾಧ ಬಲಪ್ರಯೋಗ), 323 (ಘಾಸಿಗೊಳಿಸಿರುವುದು) ಮತ್ತು 342 (ಅಕ್ರಮ ಬಂಧನ) ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ದೆಹಲಿ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ: ಈ ಮಸೂದೆ ಏನು ಹೇಳುತ್ತದೆ?


