“ನಾವು ಗಾಂಧಿಯನ್ನೇ ಬಿಟ್ಟಿಲ್ಲ, ನೀವು ಯಾವ ಲೆಕ್ಕ ಸ್ವಾಮಿ?” ಎಂದು ಹೇಳಿಕೆ ನೀಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವೆ ಶಶಿಕಲಾ ಜೊಲ್ಲೆಯವರಿಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಮತ್ತೆ ಮೂವರನ್ನು ಬಂಧಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರನನ್ನು ಭಾನುವಾರ ಬಂಧಿಸಲಾಗಿತ್ತು. ಹಿಂದೂ ಮಹಾಸಭಾದ ಪ್ರಮುಖರಾದ ಬಂಟ್ವಾಳದ ಪ್ರೇಮ್ ರಾಜೇಶ್ ಶೆಟ್ಟಿ (48), ರಾಜೇಶ್ ಪವಿತ್ರನ್ (40), ಅಡ್ಕಾರಿನ ಸಂದೀಪ್ ಗಣೇಶ್ ಶೆಟ್ಟಿ (40) ಬಂಧಿತರು.
ಧರ್ಮೇಂದ್ರ ವಿರುದ್ಧ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿ ಡಾ.ಲೋಹಿತ್ ಕುಮಾರ್ ಸುವರ್ಣ ಎಂಬವರು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿತ್ತು. ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪ್ರತಿಕ್ರಿಯಿಸಿರುವ ಧರ್ಮೇಂದ್ರ, “ನಾನು ಕೊಲೆ ಬೆದರಿಕೆ ಹಾಕಿಲ್ಲ; ಮಾಧ್ಯಮಗಳಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದು ಯೂಟರ್ನ್ ಹೊಡೆದಿದ್ದರು.
ಇದನ್ನೂ ಓದಿ: ಗಾಂಧಿ ಕೊಂದವರು ನಾವು ಎಂದೇಳಿ ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದ ಧರ್ಮೇಂದ್ರ ಬಂಧನ
ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ ಸ್ವಾಮಿ, ನೀವು ಯಾವ ಲೆಕ್ಕ ನಮಗೆ? ಗಾಂಧೀಜಿಯನ್ನೇ ಹತ್ಯೆ ಮಾಡಿದವರಿಗೆ ನಿಮ್ಮ ವಿಚಾರದಲ್ಲಿ ಆಲೋಚನೆ ಮಾಡಲ್ಲಿಕ್ಕೆ ಸಾಧ್ಯವಿಲ್ಲ ಎನ್ನುತ್ತೀರಾ? ಮಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಪ್ರಚೋದನಕಾರಿ ಹೇಳಿಕೆ pic.twitter.com/K0mZLbDtLX
— Naanu Gauri (@naanugauri) September 18, 2021
“ನಾವು ಗಾಂಧೀಜಿಯನ್ನೆ ಬಿಟ್ಟಿಲ್ಲ ಸ್ವಾಮಿ, ಇನ್ನು ನೀವು ಯಾವ ಲೆಕ್ಕ ನಮಗೆ? ಹಿಂದೂಗಳ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದವರಿಗೆ ನಿಮ್ಮ ವಿಚಾರದಲ್ಲಿ ಆಲೋಚನೆ ಮಾಡಲ್ಲಿಕ್ಕೆ ಸಾಧ್ಯವಿಲ್ಲ ಎನ್ನುತ್ತೀರಾ?” ಎಂದು ಮಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಅಖಿಲ ಭಾರತ ಹಿಂದೂ ಮಹಾಸಭಾ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರರನ್ನು ಬಂಧಿಸಿರುವುದಾಗಿ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭಾನುವಾರ ಹೇಳಿದ್ದರು. ಈಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಗಾಂಧೀಜಿಯನ್ನೆ ಹತ್ಯೆ ಮಾಡಿದವರು ನಾವು, ಇನ್ನು ನೀವು ಯಾವ ಲೆಕ್ಕ?: ಹಿಂದೂ ಮಹಾಸಭಾ ಮುಖಂಡನ ಪ್ರಚೋದನಾಕಾರಿ ಹೇಳಿಕೆ!


