‘ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು’ ಎಂಬ ಆದಿತ್ಯ ಠಾಕ್ರೆ ಹೇಳಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸುವರ್ಣ ಸೌಧದಲ್ಲಿ ಸೋಮವಾರ (ಡಿ.9) ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಆದಿತ್ಯ ಠಾಕ್ರೆ ಬಾಲಿಶ ಹೇಳಿಕೆ ನೀಡಿದ್ದಾರೆ. ಮಹಾಜನ್ ವರದಿಯೇ ಅಂತಿಮ. ಹೀಗಿರುವಾಗ ನಾವು ಏನೂ ಕೇಳಬಾರದು, ಅವರೂ ಏನು ಕೇಳಬಾರದು ಎಂದಿದ್ದಾರೆ.
ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.
ಎಂಇಎಸ್‌ನವರು ಬೆಳಗಾವಿ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆಯೇ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ “ಯಾರೇ ಪುಂಡಾಟಿಕೆ ಮಾಡಿದರೂ ಸುಮ್ಮನಿರಲ್ಲ” ಎಂದಿದ್ದಾರೆ.
ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಶಿವಸೇನೆ ಯುವ ನಾಯಕ ಹಾಗೂ ಮಹಾರಾಷ್ಟ್ರದ ವೊರ್ಲಿ ಕ್ಷೇತ್ರದ ಶಾಸಕ ಆದಿತ್ಯ ಠಾಕ್ರೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿ ವಾರ್ಷಿಕ ಸಮಾವೇಶ ನಡೆಸಲು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಗೆ ಕರ್ನಾಟಕ ಸರ್ಕಾರ ಅನುಮತಿ ನಿರಾಕರಿಸಿರುವ ಕುರಿತು ಮಹಾರಾಷ್ಟ್ರದ ವಿಧಾನ ಭವನದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆದಿತ್ಯ ಠಾಕ್ರೆ, ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಿಂದಾಗಿ ಸಂಭ್ರಮಾಚರಣೆ ನಡೆಯುತ್ತಿದೆ. ಮತ್ತೊಂದೆಡೆ, ಬೆಳಗಾವಿಯ ಪರಿಸ್ಥಿತಿಯನ್ನು ನೋಡಿ. ನೆರೆಯ ಈ ಪ್ರದೇಶದಲ್ಲಿ ಮರಾಠಿ ಭಾಷಿಕರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದಿದ್ದರು.
ಮಹಾರಾಷ್ಟ್ರದ ಮಾಜಿ ಸಿಎಂ ಉದ್ದವ್ ಠಾಕ್ರೆಯವರ ಮಗ ಆದಿತ್ಯ ಠಾಕ್ರೆ, ಶಿವಸೇನೆ (ಉದ್ದವ್ ಠಾಕ್ರೆ ಬಣ) ಪಕ್ಷದ ನಾಯಕರಾಗಿದ್ದಾರೆ. ಶಿವಸೇನೆ (ಯುಬಿಟಿ) ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ)ಯ ಭಾಗವಾಗಿದೆ.
ಇದನ್ನೂ ಓದಿ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ


