ನಿನ್ನೆ (ಅ.11) ರಾತ್ರಿ ತಾಂತ್ರಿಕ ಸಮಸ್ಯೆ ಉಂಟಾಗಿ ಆತಂಕಕ್ಕೆ ಕಾರಣವಾಗಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ವರದಿಯಾಗಿದೆ.
ನಿನ್ನೆ ರಾತ್ರಿ ತಮಿಳುನಾಡಿನ ತಿರುಚ್ಚಿಯಿಂದ ಶಾರ್ಜಾಗೆ 141 ಪ್ರಯಾಣಿಕರನ್ನು ಹೊತ್ತು ವಿಮಾನ ಹೊರಟಿತ್ತು. ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಹೈಡ್ರಾಲಿಕ್ ವೈಫಲ್ಯ ಕಾಣಿಸಿಕೊಂಡಿದೆ. ಪರಿಣಾಮ ಸುಮಾರು ಒಂದೂವರೆ ತಾಸು ವಿಮಾನ ಆಕಾಶದಲ್ಲೇ ಸುತ್ತಿದೆ. ಕೊನೆಗೆ ಸುರಕ್ಷಿತವಾಗಿ ಲ್ಯಾಂಡ್ ಮಾಡುವಲ್ಲಿ ಪೈಲಟ್ ಯಶಸ್ವಿಯಾಗಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.
ಶುಕ್ರವಾರ ಸಂಜೆ ಆರು ಗಂಟೆಯ ಹೊತ್ತಿಗೆ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ತ್ವರಿತ ರಕ್ಷಣಾ ಕಾರ್ಯಚರಣೆಗಾಗಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿತ್ತು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ದು ಹೇಳಿದ್ದಾರೆ.
ಹೈಡ್ರಾಲಿಕ್ ವೈಫಲ್ಯದ ಕಾರಣ ತಿಳಿಯಲು ತನಿಖೆ ಕೈಗೊಳ್ಳಲಾಗಿದೆ. ಪ್ರಯಾಣಿಕರಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಸೂಚಿಸಲಾಗಿದೆ ಎಂದು ಸಚಿವರ ಕಚೇರಿ ತಿಳಿಸಿದೆ.
ಪ್ರಯಾಣಿಕರಿಗೆ ಮಾಹಿತಿಯೇ ಗೊತ್ತಿರಲಿಲ್ಲ
ವರದಿಗಳ ಪ್ರಕಾರ, ವಿಮಾನ ತಾಂತ್ರಿಕ ಸಮಸ್ಯೆಗೆ ಸಿಲುಕಿ ಸುಮಾರು ಒಂದೂವರೆ ತಾಸು ಆಕಾಶದಲ್ಲೇ ಗಿರಕಿ ಹೊಡೆಯುತ್ತಿದ್ದರೂ, ಅದರಲ್ಲಿದ್ದ ಪ್ರಯಾಣಿಕರಿಗೆ ಆ ಬಗ್ಗೆ ಮಾಹಿತಿಯೇ ಗೊತ್ತಿರಲಿಲ್ಲ. ಕೊನೆಯ 10-15 ನಿಮಿಷಗಳಲ್ಲಿ ಮಾತ್ರ ಪ್ರಯಾಣಿಕರಿಗೆ ಮಾಹಿತಿ ನೀಡಲಾಗಿದೆ.
ಇದನ್ನೂ ಓದಿ : ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ : 19 ಮಂದಿಗೆ ಗಾಯ


