ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ದದ ತನಿಖೆಗೆ ನೀಡಿದ್ದ ಒಪ್ಪಿಗೆ ಹಿಂಪಡೆದಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸುಪ್ರೀಂ ಕೋರ್ಟ್ ಬುಧವಾರ (ಜ.29) ತೀವ್ರ ತರಾಟೆಗೆ ತೆಗೆದುಕೊಂಡಿದೆ. “ಈ ಮೇಲ್ಮನವಿಯ ಹಿಂದಿರುವ ರಾಜಕೀಯ ದುರುದ್ದೇಶವೇನು ಎಂದು ಪ್ರಶ್ನಿಸಿದೆ.”
ಡಿ.ಕೆ ಶಿವಕುಮಾರ್ ಅವರ ವಿರುದ್ಧದ ತನಿಖೆಗೆ ನೀಡಿದ್ದ ಒಪ್ಪಿಗೆ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಯತ್ನಾಳ್ ಅವರು ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಬುಧವಾರ ವಿಚಾರಣೆ ವೇಳೆ ನ್ಯಾಯಮೂರ್ತಿ ಸೂರ್ಯಕಾಂತ್ ಅವರು “ರಾಜಕೀಯ ಲಾಭಕ್ಕಾಗಿ ನೀವು ಸುಪ್ರೀಂ ಕೋರ್ಟ್ ಮುಂದೆ ಏಕೆ ಇದ್ದೀರಿ? ಅಲ್ಲಿಗೆ ಹೋಗಿ ಚುನಾವಣೆಯಲ್ಲಿ ಸ್ಪರ್ಧಿಸಿ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಯತ್ನಾಳ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ. ಪರಮೇಶ್ವರ್ ಅವರು “ಇದು ರಾಜಕೀಯ ದ್ವೇಷದ ಪ್ರಕರಣ ಅಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಪ್ರಕರಣವನ್ನು ಹಿಂತೆಗೆದುಕೊಂಡಿದೆ” ಎಂದಿದ್ದಾರೆ.
ಸಿಬಿಐ ಹಾಗೂ ಡಿ.ಕೆ. ಶಿವಕುಮಾರ್ ಅವರು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ಸರ್ಕಾರ ಪ್ರತಿ ಪ್ರಮಾಣಪತ್ರ ಸಲ್ಲಿಸಿದ ಬಳಿಕ ವಿಚಾರಣೆ ಮುಂದುವರಿಸಬಹುದು ಎಂದು ಹೇಳಿದ ಪೀಠ, ಮಾರ್ಚ್ 26ಕ್ಕೆ ವಿಚಾರಣೆ ಮುಂದೂಡಿದೆ ಎಂದು ತಿಳಿದು ಬಂದಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ದ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು 2024ರ ಆಗಸ್ಟ್ 29ರಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು.


