ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬದ ಮೇಲೆ ನಡೆದ ಗೂಂಡಾಗಿರಿ ಪ್ರಕರಣದಲ್ಲಿ ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ ಹಾಗೂ ಬೇಗೂರು ಠಾಣೆ ಇನ್ಸ್‌ಪೆಕ್ಟರ್ ವಿರುದ್ಧ ಕರ್ತವ್ಯಲೋಪ ಮತ್ತು ಆರೋಪಿಗಳೊಂದಿಗೆ ಶಾಮೀಲಾಗಿರುವ ಗಂಭೀರ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಜನಾಧಿಕಾರ ಸಂಘರ್ಷ ಪರಿಷತ್ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದೆ.
ಬೇಗೂರಿನ ದಲಿತ ನಿವಾಸಿ ನಾಗರಾಜು ಮತ್ತು ಅವರ ಕುಟುಂಬಸ್ಥರಿಗೆ ಸೇರಿದ ಜಮೀನಿಗೆ ಮೇ 28ರಂದು ತಡರಾತ್ರಿ ಸುಮಾರು 400ಕ್ಕೂ ಅಧಿಕ ಮಂದಿ ನುಗ್ಗಿ, ಜೆಸಿಬಿಯಿಂದ ಜಮೀನಲ್ಲಿದ್ದ ಕಟ್ಟಡಗಳನ್ನು ಧ್ವಂಸಗೊಳಿಸಿದ್ದಾರೆ.
ಅಲ್ಲದೆ, ನಾಗರಾಜು ಹಾಗೂ ಅವರ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಎಚ್ ಆರ್. ರವಿಚಂದ್ರ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿಯ ಸಿಬ್ಬಂದಿ ನಯೀಮ್ ನೂರ್ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಆದರೆ, ಈ ಪ್ರಕರಣದ ತನಿಖೆಯನ್ನು ಪೊಲೀಸರು ಸರಿಯಾಗಿ ನಡೆಸುತ್ತಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ. ಜೊತೆಗೆ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ, ಬೇಗೂರು ಠಾಣೆ ಇನ್ಸ್‌ಪೆಕ್ಟರ್ ಹಾಗೂ ಆಗ್ನೇಯ ವಿಭಾಗದ ಡಿಸಿಪಿಯವರು ಪ್ರಕರಣದ ಆರೋಪಿಗಳೊಂದಿಗೆ ಶಾಮೀಲಾಗಿದ್ದಾರೆ ಎಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ನೀಡಿದ ದೂರಿನಲ್ಲಿ ಜನಾಧಿಕಾರ ಸಂಘರ್ಷ ಪರಿಷತ್ ಆರೋಪಿಸಿದೆ.
ಗೃಹ ಸಚಿವ ಜಿ. ಪರಮೇಶ್ವರ್‌ಗೆ ಮನವಿ ಸಲ್ಲಿಕೆ
ದಲಿತ ಕುಟುಂಬದ ಮೇಲೆ ನಡೆದ ದಬ್ಬಾಳಿಕೆ ಮತ್ತು ದೌರ್ಜನ್ಯ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ವಿಧಾನ ಪರಿಷತ್ ಸದಸ್ಯ ಎಚ್. ಪಿ ಸುಧಾಮ್ ದಾಸ್ ಅವರು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಬೇಗೂರು ಠಾಣೆ ಇನ್ಸ್‌ಪೆಕ್ಟರ್ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಹಾಗೂ ಆಗ್ನೇಯ ವಿಭಾಗದ ಡಿಸಿಪಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ ಅವರನ್ನು ಪ್ರಕರಣದ ತನಿಖೆ ಮುಗಿಯುವವರೆಗೆ ಬೇರೆಡೆಗೆ ವರ್ಗಾಯಿಸಬೇಕು ಎಂದು ಸುಧಾಮ್ ದಾಸ್ ಆಗ್ರಹಿಸಿದ್ದಾರೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಪರಮೇಶ್ವರ್ ಅವರು, ಪೊಲೀಸರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ.
ಪುತ್ತೂರು ವಿದ್ಯಾರ್ಥಿನಿಗೆ ವಂಚನೆ: ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ರಾವ್ ಬಂಧನ


