ಬೆಳಗಾವಿ ಪಾಲಿಕೆ ಚುನಾವಣೆ: ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಬಿಜೆಪಿ

ರಾಜ್ಯದ ಮೂರು ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬೆಳಗಾವಿ ಮಹಾನಗರ ಪಾಲಿಕೆಯ 58 ಸ್ಥಾನಗಳಲ್ಲಿ 35 ಸ್ಥಾನಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿದೆ. ಈ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಸಿದ್ಧವಾಗಿದೆ.

ಬೆಳಗಾವಿ ಪಾಲಿಕೆಯ 58 ವಾರ್ಡ್‌ಗಳ ಫಲಿತಾಂಶ ಪ್ರಕಟವಾಗಿದ್ದು, ಈ ಪೈಕಿ ಬಿಜೆಪಿ 35 ವಾರ್ಡ್ ಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 10, ಎಂಇಎಸ್ 2, ಪಕ್ಷೇತರ ಅಭ್ಯರ್ಥಿಗಳು 10 ಹಾಗೂ ಎಐಎಂಐಎಂ 1 ವಾರ್ಡ್‌‌ನಲ್ಲಿ ಗೆಲುವು ಸಾಧಿಸಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಜೆಡಿಎಸ್‌ ಪಕ್ಷ ಒಂದು ಸ್ಥಾನವನ್ನು ಗೆಲ್ಲುವಲ್ಲಿ ವಿಫಲವಾಗಿದ್ದು, ಶೂನ್ಯ ಸಾಧನೆ ಮಾಡಿದೆ.

ಇದನ್ನೂ ಓದಿ: ದಾಬೋಲ್ಕರ್‌ ಹತ್ಯೆ: ಸೆ.7ರಂದು ಯುಎಪಿಎ ಅಡಿಯಲ್ಲಿ ಐವರ ಮೇಲೆ ಚಾರ್ಜ್‌ಶೀಟ್ ಸಲ್ಲಿಕೆ?

ಬೆಳಗಾವಿಯಲ್ಲಿ ಬರೊಬ್ಬರಿ 25 ವರ್ಷಗಳ ಬಳಿಕ ಮೊದಲ ಬಾರಿಗೆ ಅಭ್ಯರ್ಥಿಗಳು ರಾಜಕೀಯ ಪಕ್ಷಗಳ ಚಿನ್ಹೆಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಇಳಿದಿದ್ದರು. ಈಗ ಬಿಜೆಪಿ 35 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರಕ್ಕೇರಲು ಸಿದ್ಧವಾಗಿದೆ. ಬಿಜೆಪಿ ಗೆಲುವಿಗೆ ಬೆಳಗಾವಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

ಸಂಭ್ರಮಾಚರಣೆ ವೇಳೆ ಬಿಜೆಪಿ ಕಾರ್ಯಕರ್ತರು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತ, ಕಲಬುರ್ಗಿ ಪಾಲಿಕೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ. ಹುಬ್ಬಳಿ-ಧಾರವಾಡ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವ ಸಾಧ್ಯತೆ ಇದೆ. ಅಲ್ಲದೆ, ಮೈಸೂರು ಮಹಾನಗರ ಪಾಲಿಕೆ ಮತ್ತು ದಾಂಡೇಲಿ ನಗರಸಭೆಗಳ ಒಂದೊಂದು ಸ್ಥಾನಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪುರಸಭೆಯ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಪುರಸಭೆಯ ಅಧಿಕಾರದ ಗದ್ದುಗೆಯನ್ನು ತನ್ನದಾಗಿಸಿಕೊಂಡಿದೆ. ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.


ಇದನ್ನೂ ಓದಿ: ತರೀಕೆರೆ ಪುರಸಭೆ ಚುನಾವಣೆ: ಕಾಂಗ್ರೆಸ್‌ಗೆ ಭರ್ಜರಿ ಜಯ, ಒಂದು ಸ್ಥಾನಕ್ಕೆ ತೃಪ್ತಿ ಪಟ್ಟ ಬಿಜೆಪಿ

LEAVE A REPLY

Please enter your comment!
Please enter your name here