ಬೆಳಗಾವಿಯ ಅನಗೋಳದ ಕನಕದಾಸ ಕಾಲೋನಿಯಲ್ಲಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿರುವುದಕ್ಕೆ ನಟ ದರ್ಶನ್ ತೂಗುದೀಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಕ್ಕೆ ಜೀವನ ಮುಡುಪಿಟ್ಟ ಹೋರಾಟಗಾರನ ಪ್ರತಿಮೆ ಭಗ್ನಗೊಳಿಸಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.
“ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು” ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಬಾವುಟಕ್ಕೆ ಬೆಂಕಿ ಇಟ್ಟವರನ್ನು ಶಿಕ್ಷಿಸಿ, ನಮ್ಮ ಧ್ವಜ ಹಿಡಿದ ಭುಜಗಳನ್ನು ರಕ್ಷಿಸಿ: ಡಾ.ಹಂಸಲೇಖ
ಅನಗೋಳದ ಕನಕದಾಸ ಕಾಲೋನಿಯಲ್ಲಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿ, ಖಡ್ಗ, ಗುರಾಣಿ ಕಿತ್ತುಹಾಕಿರುವ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಪರಿಸ್ಥಿತಿ ಉಲ್ಬಣಗೊಂಡ ಹಿನ್ನೆಲೆ ಜಿಲ್ಲೆಯಲ್ಲಿ ಪೊಲೀಸರು 144 ಸೆಕ್ಷನ್ ಜಾರಿಗೊಳಿಸಿದ್ದಾರೆ.
ಘಟನೆ ಸಂಬಂಧ ತಿಲಕವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲವರನ್ನು ಬಂಧಿಸಲಾಗಿದೆ. ಸದ್ಯಕ್ಕೆ ಭಗ್ನಗೊಂಡಿರುವ ಪುತ್ಥಳಿಯನ್ನು ವಶಕ್ಕೆ ತೆಗೆದುಕೊಂಡಿದ್ದು ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ರಾತ್ರಿ 8 ಗಂಟೆಯವರೆಗೂ 144 ಸೆಕ್ಷನ್ ಜಾರಿಯಲ್ಲಿರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಘಟನೆಗೆ ಪ್ರತಿಕ್ರಿಯಿಸಿ, “ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ ಸಿಎಂ ಬಸವರಾಜ ಬೊಮ್ಮಾಯಿಯವರು ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ ಆದೇಶ ನೀಡಬೇಕು. ಇದಕ್ಕೆಲ್ಲ ‘ಕ್ರಿಯೆಗೆ ಪ್ರತಿಕ್ರಿಯೆ’ ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ. ಇದೇ ವೇಳೆ ಕನ್ನಡ ಬಂಧುಗಳು ಆವೇಶಕ್ಕೆ ಒಳಗಾಗದೆ, ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು ಬರಬೇಕೆಂದು ಮನವಿ ಮಾಡುತ್ತೇನೆ” ಎಂದಿದ್ದಾರೆ.