ಬಿಜೆಪಿ ಕಾರ್ಯಕರ್ತರೊಬ್ಬರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ಬಳ್ಳಾರಿಯಲ್ಲಿ ನಡೆದಿದೆ. ಮಂಜುನಾಥ್ (35) ಎಂಬ ಬಿಜೆಪಿ ಕಾರ್ಯಕರ್ತರು ಕೊಲೆಯಾಗಿದ್ದಾರೆ.
ಮಂಜುನಾಥ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಬಳಿಕ ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೊಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಆರೋಪಿಗಳು ಕೊಲೆಯಾದ ಯುವಕನ ಸ್ನೇಹಿತರು ಇರಬಹುದು. ಹಳೇ ದ್ವೇಷದಿಂದ ಕೊಲೆ ಮಾಡಿರಬಹುದು ಎಂದು ಪೊಲೀಸರು ತಿಳಿಸಿದ್ದು, ಈ ಸಂಬಂಧ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಕೊಲೆಯಾಗುತ್ತಿರುವುದು ರಾಜಕೀಯ ಚರ್ಚೆಗೂ ಅವಕಾಶ ನೀಡುತ್ತಿದೆ. ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯಾದಾಗ ದೊಡ್ಡ ಮಟ್ಟದಲ್ಲಿ ಬಿಜೆಪಿ ನಾಯಕರು ಹೋರಾಟ ಮಾಡಿದ್ದರು.
ಪ್ರವೀಣ್ ನೆಟ್ಟಾರು ಕೊಲೆಯಾದಾಗ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಅಧಿಕಾರದಲ್ಲಿದ್ದರೂ ಬಿಜೆಪಿ ಕಾರ್ಯಕರ್ತರೇ ಕೊಲೆಯಾಗುತ್ತಿದ್ದಾರೆ. ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾರಿಗೆ ಮತ್ತಿಗೆ ಹಾಕಿ, ಉರುಳಿಸುವ ಪ್ರಯತ್ನವನ್ನು ಬಿಜೆಪಿ ಕಾರ್ಯಕರ್ತರು ಮಾಡಿದ್ದರು.
ಯಾದಗಿರಿ: ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ; ಪ್ರಕರಣ ದಾಖಲು
ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಯಾದಗಿರಿ ಜಿಲ್ಲೆಯಲ್ಲಿ ಜಗಳವಾಗಿದ್ದು, ಎರಡು ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.
ಯಾದಗಿರಿ ತಾಲೂಕಿನ ಸಾವೂರು ಗ್ರಾಮದಲ್ಲಿ ಅಡಿಗಲ್ಲು ಸಮಾರಂಭದಲ್ಲಿ ಬ್ಯಾನರ್ ವಿಚಾರಕ್ಕೆ ಘಟನೆ ನಡೆದಿದೆ. ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ್ ಹಾಗೂ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ಸಮ್ಮುಖದಲ್ಲಿ ನಡೆದಿದ್ದ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಜೆಡಿಎಸ್ನ ಬಂದಪ್ಪಗೌಡ ಹಾಗೂ ಬಿಜೆಪಿಯ ಶಿವರಾಜ್ ಸೇರಿ ಇತರರ ಮೇಲೆ ಕೇಸ್ ಹಾಕಲಾಗಿದೆ ಎಂದು ತಿಳಿದುಬಂದಿದೆ.