ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪರಾಧ ವಿಭಾಗ ಮತ್ತು ಬೆಂಗಳೂರು ಪೊಲೀಸರು ಶುಕ್ರವಾರ ಬೆಳಿಗ್ಗೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB)ನ ಮಾರ್ಕೆಟಿಂಗ್ ಮ್ಯಾನೇಜರ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬೆಂಗಳೂರು ಕಾಲ್ತುಳಿತ
ನಾಲ್ವರು ಪರಾರಿಯಾಗಲು ಯತ್ನಿಸುತ್ತಿದ್ದಾಗ ನಗರದ ಹೊರವಲಯದಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಅವರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಇಲಾಖೆ ಮತ್ತು ಕೇಂದ್ರ ಅಪರಾಧ ವಿಭಾಗದ (CCB) ಉನ್ನತ ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
“ನಾಲ್ವರನ್ನು ಸುರಕ್ಷಿತವಾಗಿರಿಸಲಾಗಿದೆ ಮತ್ತು ಮುಂದಿನ ಪ್ರಕ್ರಿಯೆ ನಡೆಯುತ್ತಿದೆ. ಅವರನ್ನು ಇನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿಲ್ಲ ಮತ್ತು ಬಂಧನ ಪ್ರಕ್ರಿಯೆಯ ಔಪಚಾರಿಕೀಕರಣ ನಡೆಯುತ್ತಿದೆ” ಎಂದು ಮೂಲಗಳು ತಿಳಿಸಿವೆ.
ಪ್ರಮುಖ ಶಂಕಿತರಲ್ಲಿ ಒಬ್ಬನನ್ನು ಆರ್‌ಸಿಬಿಯ ಮಾರ್ಕೆಟಿಂಗ್ ಮತ್ತು ಕಂದಾಯ ಮುಖ್ಯಸ್ಥ ನಿಖಿಲ್ ಸೋಸಲೆ ಎಂದು ಮೂಲಗಳು ಗುರುತಿಸಿವೆ. ಇತರ ಮೂವರ ವಿವರಗಳನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ, ಆದರೆ ಕೆಲವು ಮಾಧ್ಯಮ ವರದಿಗಳು ಎರಡನೇ ಶಂಕಿತನನ್ನು ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯಾದ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್‌ನ ಸುನಿಲ್ ಮ್ಯಾಥ್ಯೂ ಎಂದು ಗುರುತಿಸಿವೆ. ಇತರ ಇಬ್ಬರ ಗುರುತುಗಳು ಇನ್ನೂ ತಿಳಿದುಬಂದಿಲ್ಲ.
ಗುರುವಾರದಂದು ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ನ ನಂತರ ಈ ಕ್ಷಿಪ್ರ ಕಾರ್ಯಾಚರಣೆ ನಡೆದಿದೆ.
ಬುಧವಾರ ಆರ್‌ಸಿಬಿ ತನ್ನ ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ಸಂಭ್ರಮಾಚರಣೆಯಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಸಾವನ್ನಪ್ಪಿದವರಲ್ಲದೆ, ಅರವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರವು, ಆರ್‌ಸಿಬಿ ಸಂಸ್ಥೆ, ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿತ್ತು.
ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ನಗರದ ಪೊಲೀಸ್ ಕಮೀಷನರ್ ಅವರನ್ನು ತಕ್ಷಣದಿಂದ ಅಮಾನತ್ತು ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಆರ್‌ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ.” ಎಂದು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು, “ಆರ್‌ಸಿಬಿ ಸಂಸ್ಥೆ, ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ” ಎಂದು ಹೇಳಿದ್ದರು.
“ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ.” ಎಂದು ಸಿಎಂ ಹೇಳಿದ್ದರು.
“ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.” ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು. ಬೆಂಗಳೂರು ಕಾಲ್ತುಳಿತ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ರಾಜಭವನದಲ್ಲಿ ಅರೆಸ್ಸೆಸ್ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ
ರಾಜಭವನದಲ್ಲಿ ಅರೆಸ್ಸೆಸ್ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

