ದಲಿತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ಬಿಬಿಎಂಪಿ ಗುತ್ತಿಗೆದಾರನಿಗೆ ಬೆದರಿಕೆ ಹಾಕಿರುವ ಆರೋಪದ ಆಡಿಯೋ ಕ್ಲಿಪ್ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿ, ಪಕ್ಷವು ನಾಡಿನ ದಲಿತ ಸಮುದಾಯದವರ ಬಳಿ ಬಹಿರಂಗ ಕ್ಷಮೆ ಕೇಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ” ಎಂದು ಹೇಳಿದ್ದಾರೆ.
ಇದನ್ನೂಓದಿ: ಲಂಚ ಮತ್ತು ಜಾತಿ ನಿಂದನೆ | ಹಿರಿಯ BJP ಶಾಸಕ ಮುನಿರತ್ನ ಬಂಧನ
“ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತ. ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಅವರು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣರು. ಈ ಸಮುದಾಯಗಳ ಬಗ್ಗೆ BJP ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ, ಅಸಹನೆಗೆ ಮುನಿರತ್ನ ಬಾಯಿಂದ ಉದುರಿದ ಅಣಿಮುತ್ತುಗಳು ಸಾಕ್ಷಿ” ಎಂದು ಅವರು ಹೇಳಿದ್ದಾರೆ.
“ವೈರಲ್ ಆಗಿರುವ ಆಡಿಯೋದಲ್ಲಿ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ, ಮನಸೋ ಇಚ್ಛೆ ನಿಂದಿಸಿದ್ದಾರೆ, ಆತನಿಂದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ, ಕೊನೆಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇವೆಲ್ಲವೂ ಅತ್ಯಂತ ಗಂಭೀರ ಸ್ವರೂಪದ ಅಪರಾಧಗಳಾಗಿವೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
“40% ಕಮಿಷನ್ ಸರ್ಕಾರ ತೊಲಗಿದರೂ ಅದರಿಂದ ಹುಟ್ಟಿರುವ ರಕ್ತಬೀಜಾಸುರರು ಉಳಿದಿದ್ದಾರೆ. ಈಗ ನಾವು ಕೈಗೆತ್ತಿಕೊಂಡಿರುವ ಸ್ವಚ್ಚತಾ ಅಭಿಯಾನದಲ್ಲಿ ಈ ಹೊಲಸನ್ನು ಎಲ್ಲಿ ಇಡಬೇಕು ಅಲ್ಲಿಗೆ ಖಂಡಿತಾ ತಲುಪಿಸುತ್ತೇವೆ.” ಎಂದು ಮುಖ್ಯಮಂತ್ರಿ ಪ್ರತಿಜ್ಞೆ ಮಾಡಿದ್ದಾರೆ.
ಇದನ್ನೂ ಓದಿ: ಜಾತಿ ನಿಂದನೆ, ಕೊಲೆ ಬೆದರಿಕೆ ಪ್ರಕರಣ; ಎರಡು ದಿನ ಪೊಲೀಸ್ ವಶಕ್ಕೆ ಬಿಜೆಪಿ ಶಾಸಕ ಮುನಿರತ್ನ
“ಮಾದ್ಯಮಗಳ ಮುಂದೆ ನಿಂತು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಉಪದೇಶ ಕೊಡುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ತಮ್ಮದೇ ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯಾ?” ಎಂದು ಮುಖ್ಯಮಂತ್ರಿ ಕೇಳಿದ್ದಾರೆ.
“ಈಗ ಬಿಜೆಪಿ ನಾಯಕರಿಗೆ ಉಳಿದಿರುವುದು ಎರಡೇ ದಾರಿ. ಒಂದು ಮುನಿರತ್ನ ಅವರ ಹೇಳಿಕೆಗೆ ಬೆಂಬಲ ಕೊಟ್ಟು ತಾವು ದಲಿತ ವಿರೋಧಿಗಳು ಎಂದು ಒಪ್ಪಿಕೊಳ್ಳುವುದು, ಇಲ್ಲವೇ ನಾಡಿನ ದಲಿತ ಸಮುದಾಯದವರ ಬಳಿ ಬಹಿರಂಗ ಕ್ಷಮೆ ಕೇಳಿ, ಮುನಿರತ್ನ ಅವರನ್ನು ಪಕ್ಷದಿಂದ ಹೊರದಬ್ಬುವುದು” ಎಂದು ಅವರು ಹೇಳಿದ್ದಾರೆ.
ಬಿಜೆಪಿ ಶಾಸಕ ಮುನಿರತ್ನ ಅವರ ಆಡಿಯೊವೊಂದು ಇತ್ತಿಚೆಗೆ ವೈರಲ್ ಆಗಿದ್ದು, ಅದರಲ್ಲಿ ಬಿಬಿಎಂಪಿ ಗುತ್ತಿಗೆದಾರ, ಒಕ್ಕಲಿಗ ಸಮುದಾಯದ ಚೆಲುವರಾಜು ಅವರ ತಾಯಿ ಸೇರಿದಂತೆ ಅವರ ಸಮುದಾಯ ಹಾಗೂ ದಲಿತರ ಬಗ್ಗೆ ಕೀಳು ಮಟ್ಟದಲ್ಲಿ ನಿಂದಿಸುವುದು ದಾಖಲಾಗಿದೆ. ಈ ನಡುವೆ ಗುತ್ತಿಗೆದಾರ ಚಲುವರಾಜು ಶನಿವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನ್ಯಾಯ ದೊರಕಿಸುವಂತೆ ವಿನಂತಿ ಮಾಡಿದ್ದಾರೆ.
ಇದನ್ನೂ ಓದಿ: ಉದ್ಯಮಿಯ ಕ್ಷಮಾಪಣೆ ವಿಡಿಯೋ ಸೋರಿಕೆ ಪ್ರಕರಣ; ಕಾರ್ಯಕರ್ತನನ್ನು ಉಚ್ಚಾಟಿಸಿದ ತಮಿಳುನಾಡು ಬಿಜೆಪಿ
ದಲಿತರ ಪ್ರತಿಭಟನೆ
ಎಂಎಲ್ಸಿ ಸುಧಾಮ್ ದಾಸ್ ನೇತೃತ್ವದಲ್ಲಿ ಶನಿವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ನ ದಲಿತ ಮುಖಂಡರು ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
”ಸರ್ಕಾರ ವಿಶೇಷ ಸರಕಾರಿ ಅಭಿಯೋಜಕರನ್ನು ನೇಮಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೈಲಿಗೆ ಹೋಗುವವರೆಗೂ ಸಮುದಾಯ ಪ್ರತಿಭಟನೆ ನಡೆಸಲಿದೆ. ನ್ಯಾಯ ಸಿಗುವವರೆಗೂ ದಲಿತರು ಉಗ್ರ ಹೋರಾಟ ನಡೆಸಲಿದ್ದಾರೆ’ ಎಂದು ಸುಧಾಮ್ ದಾಸ್ ಗುಡುಗಿದ್ದಾರೆ. ಮುನಿರತ್ನ ವಿರುದ್ಧ ಹಲವು ಪ್ರಕರಣಗಳಿವೆ ಎಂದು ಹೇಳಿದ ಅವರು,”ಅವರು ಶಾಶ್ವತವಾಗಿ ಜೈಲಿನಲ್ಲಿರಲು ಯೋಗ್ಯ ವ್ಯಕ್ತಿಯಾಗಿದ್ದಾರೆ” ಎಂದು ಹೇಳಿದ್ದಾರೆ.
ಮಂಗಳವಾರ ವಿವಿಧ ದಲಿತ ಸಂಘಟನೆಗಳ ಸದಸ್ಯರು ರಾಜ್ಯ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ ಎಂದು ದಲಿತ ಮುಖಂಡ ಹೆಣ್ಣೂರು ಶ್ರೀನಿವಾಸ್ ತಿಳಿಸಿದ್ದಾರೆ.
ವಿಡಿಯೊ ನೋಡಿ: ಕಟ್ಟುತ್ತೇವಾ ನಾವು ಜಾತಿ ಇಲ್ಲದ ಭೀತಿ ಇಲ್ಲದ ನಾಡ ಕಟ್ಟುತ್ತೇವೆ; ಹಾಡು ನೋಡಿ


