Homeಮುಖಪುಟಕುಸ್ತಿ ಫೆಡರೇಷನ್‌ ನೂತನ ಅಧ್ಯಕ್ಷರಾಗಿ ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಸಂಜಯ್‌ ಸಿಂಗ್‌ ಆಯ್ಕೆ

ಕುಸ್ತಿ ಫೆಡರೇಷನ್‌ ನೂತನ ಅಧ್ಯಕ್ಷರಾಗಿ ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಸಂಜಯ್‌ ಸಿಂಗ್‌ ಆಯ್ಕೆ

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಶನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸಂಜಯ್ ಸಿಂಗ್ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬ್ರಿಜ್ ಭೂಷಣ್ ವಿರುದ್ದ ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ, ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸಾಕ್ಷಿ ಮಲಿಕ್ ಮತ್ತು ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಖ್ಯಾತ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಸಂಜಯ್ ಸಿಂಗ್‌ಗೆ ಪ್ರತಿಸ್ಪರ್ಧಿಯಾಗಿ ಕುಸ್ತಿಪಟುಗಳನ್ನು ಬೆಂಬಲಿಸುವ ಕಾಮನ್‌ವೆಲ್ತ್‌ ಚಿನ್ನದ ಪದಕ ವಿಜೇತೆ ಅನಿತಾ ಶಿಯೋರನ್ ಸ್ಪರ್ಧಿಸಿದ್ದರು. ಒಟ್ಟು 50 ಮತಗಳ ಪೈಕಿ ಸಂಜಯ್ ಸಿಂಗ್ 40 ಮತಗಳನ್ನು ಪಡೆದಿದ್ದಾರೆ.

ಕುಸ್ತಿ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿಯಾಗಿ ಪ್ರತಿಭಟನಾ ನಿರತ ಕುಸ್ತಿಪಟುಗಳ ಬೆಂಬಲಿತ ಬಣದ ಪ್ರೇಮ್ ಚಂದ್ ಲೋಚಬ್ ಅವರು ಆಯ್ಕೆಯಾಗಿದ್ದಾರೆ.

ವಾರಣಾಸಿ ಮೂಲದ ಸಂಜಯ್‌ ಸಿಂಗ್ ಅವರು ಬ್ರಿಜ್ ಭೂಷಣ್ ಅವರ ನಿಕಟ ಸಹವರ್ತಿಯಾಗಿದ್ದಾರೆ. ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸಂಜಯ್‌ ಸಿಂಗ್ ಅವರು ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸೂಚಿಸಲು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರಿಗೆ ಒತ್ತಾಯಿಸಿದ್ದರು ಎಂದು ವರದಿಗಳು ಹೇಳಿವೆ.

ನವದೆಹಲಿಯ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಪ್ರಧಾನ ಕಚೇರಿಯಲ್ಲಿ ಗುರುವಾರ ಮತದಾನ ನಡೆಯಿತು. ಅಧ್ಯಕ್ಷರು ಮಾತ್ರವಲ್ಲದೆ, ಪ್ರಧಾನ ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ, ಇಬ್ಬರು ಜಂಟಿ ಕಾರ್ಯದರ್ಶಿಗಳು, ನಾಲ್ವರು ಉಪಾಧ್ಯಕ್ಷರು ಮತ್ತು ಐವರು ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಗಿದೆ.

ಈ ವರ್ಷದ ಆಗಸ್ಟ್‌ನಲ್ಲಿ ವಿಶ್ವ ಕುಸ್ತಿ ಫೆಡರೇಶನ್ (UWW)ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸಲು ವಿಫಲವಾದ ಕಾರಣಕ್ಕಾಗಿ ಭಾರತೀಯ ಕುಸ್ತಿ ಫೆಡರೇಶನ್‌ನ ಸದಸ್ಯತ್ವವನ್ನು ಅಮಾನತುಗೊಳಿಸಿತ್ತು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದ ಕಾರಣ ಚುನಾವಣೆ ವಿಳಂಬವಾಗಿತ್ತು.

ಕುಸ್ತಿ ಫೆಡರೇಶ್ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಬಾಕಿ ಇರುವ ರಿಟ್ ಅರ್ಜಿಯ ಅಂತಿಮ ತೀರ್ಪಿಗೆ ಅನುಗುಣವಾಗಿ ಚುನಾವಣೆಯ ಫಲಿತಾಂಶ ಒಳಪಟ್ಟಿರುತ್ತದೆ ಎಂದು ಡಬ್ಲ್ಯುಎಫ್‌ಐ ಚುನಾವಣಾಧಿಕಾರಿ ಹಾಗೂ ನ್ಯಾಯಮೂರ್ತಿ (ನಿವೃತ್ತ) ಎಂ.ಎಂ.ಕುಮಾರ್ ಹೇಳಿದ್ದಾರೆ.

ಕುಸ್ತಿಪಟುಗಳಿಂದ ಪ್ರತಿಭಟನೆ:

ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ಭಾರತದ ಖ್ಯಾತ ಮಹಿಳಾ ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಹಲವು ಜನಪರ ಮತ್ತು ರೈತ ಸಂಘಟನೆಗಳೂ ಸಾಥ್ ನೀಡಿತ್ತು. ಒಂದೆರಡು ಬಾರಿ ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ ದೌರ್ಜನ್ಯ ನಡೆಸಿದ್ದರು.

ಬ್ರಿಜ್ ಭೂಷಣ್ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕುಸ್ತಿಪಟುಗಳು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿಯಾಗಿದ್ದರು. ಮಾಧ್ಯಮಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದರು. ಆದರೆ, ಸರ್ಕಾರ ಕುಸ್ತಿಪಟುಗಳ ಅಳಲು ಕೇಳಿಸಿಕೊಂಡಿರಲಿಲ್ಲ. ದೆಹಲಿ ಪೊಲೀಸರು ಕೂಡ ಬ್ರಿಜ್ ಭೂಷಣ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಬಳಿಕ ಬ್ರಿಜ್ ಭೂಷಣ್ ಸಿಂಗ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಬ್ರಿಜ್ ಭೂಷಣ್ ವಿರುದ್ಧ ಎಫ್‌ಐಅರ್ ದಾಖಲಿಸಲು ಸೂಚಿಸಿತ್ತು. ಕೋರ್ಟ್‌ ಆದೇಶದ ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪೂರ್ತಿಗೊಳಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ದೇಣಿಗೆ ಸಂಗ್ರಹ ವೆಬ್‌ಸೈಟ್‌ಗೆ 20,400 ಬಾರಿ ಸೈಬರ್ ದಾಳಿ: ವರದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...