ಪೋಕ್ಸೊ ಪ್ರಕರಣದಲ್ಲಿ ಜಾಮೀನು ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.
ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಇಂದು (ಆ.30) ನಡೆಯಿತು.
ಸಿಐಡಿ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಅವರು “ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಲಾಗುತ್ತಿದ್ದು, ಸ್ವಲ್ಪ ಕಾಲಾವಕಾಶ ನೀಡಬೇಕು” ಎಂದರು.
ಯಡಿಯೂರಪ್ಪ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿವಿ ನಾಗೇಶ್ ಅವರು, ಸರ್ಕಾರದ ಸಚಿವರು, ಶಾಸಕರು ಯಡಿಯೂರಪ್ಪ ವಿರುದ್ದ ಹೇಳಿಕೆ ನೀಡುತ್ತಿರುವುದಕ್ಕೆ ನ್ಯಾಯಾಲಯದಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.
“ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜೈಲಿಗೆ ಹೋಗುತ್ತಾರೆ ಎಂದು ಆಡಳಿತಾರೂಢ ಕಾಂಗ್ರೆಸ್‌ನ ಸಚಿವರು, ಶಾಸಕರು ದಿನ ಬೆಳಗಾದರೆ ಹೇಳಿಕೆ ನೀಡುತ್ತಿದ್ದಾರೆ. ಹಾಗಾದರೆ, ಅವರೇ ಬಂದು ವಾದಿಸಲಿ” ಎಂದು ಸಿವಿ ನಾಗೇಶ್ ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿದರು.
ಎರಡೂ ಕಡೆಯವರ ವಾದ ಆಲಿಸಿದ ನ್ಯಾಯಾಲಯ, ಮಧ್ಯಂತರ ಆದೇಶ ಮುಂದುವರಿಯಲಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಲಾಗಿದೆ ಎಂದು ಆದೇಶಿಸಿತು.
ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳ ಗೌಪ್ಯ ವಿಚಾರಣೆಗೆ ಎಸ್‌ಐಟಿ ಮನವಿ


