ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕಠಿಣ ಪೈಪೋಟಿ ನೀಡಿದ್ದ ಇಂಡಿಯಾ ಮೈತ್ರಿಕೂಟ, ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಲಕ್ಷಣ ಕಾಣುತ್ತಿದೆ.
ಈ ಸುದ್ದಿಯ ಬರೆಯುವ ಹೊತ್ತಿಗೆ (2:20 pm)ಇಂಡಿಯಾ ಮೈತ್ರಿಕೂಟ ಮೂರು ಸ್ಥಾನಗಳನ್ನು ಗೆದ್ದಿತ್ತು ಮತ್ತು ಇತರ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು.
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ (ಟಿಎಂಸಿ), ಎಎಪಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಂಜಾಬ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ, ಮಧ್ಯ ಪ್ರದೇಶ, ಬಿಹಾರ ಮತ್ತು ತಮಿಳುನಾಡಿನ ವಿವಿಧ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಇಂಡಿಯಾ ಮೈತ್ರಿಕೂಟದ ಪಕ್ಷಗಳಾಗಿವೆ.
ಪಂಜಾಬ್‌ನಲ್ಲಿ ಎಎಪಿಯ ಮೊಹಿಂದರ್ ಭಗತ್ ಅವರು ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ 23,000 ಮತಗಳಿಂದ ಗೆದ್ದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳು ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಪತ್ನಿ ಕಮಲೇಶ್ ಠಾಕೂರ್ ಅವರು ಡೆಹ್ರಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದಾರೆ. ರಾಜ್ಯದ ಮತ್ತೊಂದು ಕ್ಷೇತ್ರ ನಲಗಢದಲ್ಲಿಯೂ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರೆ, ಹಮೀರ್‌ಪುರದಲ್ಲಿ ಬಿಜೆಪಿಯ ಆಶಿಶ್ ಶರ್ಮಾ ಮುಂದಿದ್ದಾರೆ.
ಉತ್ತರಾಖಂಡದ ಬದರಿನಾಥ್ ಮತ್ತು ಮಂಗಳೂರ್ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಮಧ್ಯ ಪ್ರದೇಶದ ಅಮರವಾರ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಧೀರನ್ ಶಾ ಇನ್ವಾಟಿ 4,000 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಿಹಾರದಲ್ಲಿ ಜೆಡಿಯುನ ಕಲಾಧರ್ ಪ್ರಸಾದ್ ಮಂಡಲ್ ರುಪೌಲಿಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ತಮಿಳುನಾಡಿನ ವಿಕ್ರವಾಂಡಿ ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆಯ ಅಣ್ಣಿಯುರ್ ಶಿವ 10,000 ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳ ಮತ ಎಣಿಕೆ ಇಂದು (ಜುಲೈ 13, ಶನಿವಾರ) ಬೆಳಗ್ಗೆ ಆರಂಭವಾಗಿದೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯ ಪ್ರದೇಶ, ಉತ್ತರಾಖಂಡ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಸ್ಥಾನಗಳಿಗೆ ಬುಧವಾರ (ಜುಲೈ 10) ಮತದಾನ ನಡೆದಿತ್ತು.


