ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ ‘ಋತು ಚಕ್ರ ರಜೆ ನೀತಿ 2025’ ಕ್ಕೆ ಗುರುವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದರು.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ನಾಡಿನ ಲಕ್ಷಾಂತರ ಹೆಣ್ಣುಮಕ್ಕಳು, ಮಹಿಳೆಯರಿಗೆ ಋತುಚಕ್ರದ ಸಂದರ್ಭದಲ್ಲಿ ಕೆಲಸದ ಸ್ಥಳದಲ್ಲಿ ಎದುರಾಗುವ ಸವಾಲುಗಳು, ಅವರು ಅನುಭವಿಸುವ ಮಾನಸಿಕ ಹಾಗೂ ದೈಹಿಕ ನೋವು, ಸಂಕಟವನ್ನು ಅರಿತು ಈ ವೇಳೆ ಅವರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವ ತೀರ್ಮಾನವನ್ನು ನಮ್ಮ ಸರ್ಕಾರವು ಕೈಗೊಂಡಿದೆ” ಎಂದು ತಿಳಿಸಿದ್ದಾರೆ.
“ಸರ್ಕಾರವು ಮಾನವೀಯ ಕಾಳಜಿಯನ್ನು, ತನ್ನ ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಮಾತೃ ಹೃದಯವನ್ನು ಹೊಂದಿದ್ದಾಗ ಮಾತ್ರ ಇಂಥದ್ದೊಂದು ನಿರ್ಣಯ ಕೈಗೊಳ್ಳಲು ಸಾಧ್ಯ. ಈ ಐತಿಹಾಸಿಕ ನಿರ್ಣಯವನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಾವು ಕೈಗೊಂಡಿದ್ದೇವೆ ಎಂಬುದನ್ನು ನಿಮ್ಮೊಂದಿಗೆ ಅತ್ಯಂತ ಸಂತೋಷದಿಂದ ಹಂಚಿಕೊಳ್ಳುತ್ತಿದ್ದೇನೆ” ಎಂದಿದ್ದಾರೆ.


