ರಾಜ್ಯದಲ್ಲಿ 15 ಕ್ಷೇತ್ರಗಳ ಉಪಚುನಾವಣೆ ಹತ್ತಿರವಿರುವಾಗಲೇ ಕಾಂಗ್ರೆಸ್, ಜೆಡಿಎಸ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ದೇಶದ್ರೋಹ, ಅಪರಾಧಿಕ ಪಿತೂರಿ, ಭಾರತ ಸರ್ಕಾರದ ವಿರುದ್ದ ಸಮರಕ್ಕೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ನ್ಯೂಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಖಾಸಗಿ ದೂರು ನೀಡಿದ ಆಧಾರದ ಮೇಲೆ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಸಾ.ರ. ಮಹೇಶ್, ಡಿ.ಸಿ.ತಮ್ಮಣ್ಣ ಮತ್ತು ಹಿರಿಯ ಪೊಲೀಸ್ ಅಧಿಕಾರಿ ಬೆಂಗಳೂರು ಪೊಲೀಸ್ ಮಾಜಿ ಆಯುಕ್ತ ಸುನೀಲ್ ಕುಮಾರ್ ಮತ್ತು ಇತರರ ವಿರುದ್ದ ಭಾರತೀಯ ದಂಡ ಸಂಹಿತೆಯಡಿ 20 ಸೆಕ್ಷನ್ ಗಳನ್ನು ಹಾಕಿ ಎಫ್ಐಆರ್ ದಾಖಲಿಸಿದ್ದಾರೆ.
ಮಾರ್ಚ್ 27 ರಂದು ಆದಾಯ ತೆರಿಗೆ ಇಲಾಖೆ ವಿರುದ್ಧ ಹೇಳಿಕೆ ನೀಡಿರುವುದು ಮತ್ತು ಐಟಿ ದಾಳಿ ನಡೆಸಿರುವುದರ ವಿರುದ್ದ ಮಾರ್ಚ್ 28ರಂದು ಬೆಂಗಳೂರಿನ ಐಟಿ ಕಚೇರಿ ಎದುರು ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಇದನ್ನೂ ಓದಿ: 81 ಶಾಲಾ ಮಕ್ಕಳಿಗೆ ಕೇವಲ 1 ಲೀ. ಹಾಲು: ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ವಿಡಿಯೋ ಬಯಲಿಗೆ..
ಲೋಕಸಭಾ ಚುನಾವಣೆಗಳು ಹತ್ತಿರವಿದ್ದವು. ಈ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೇ ಪ್ರತಿಭಟನೆ ನಡೆಸಲಾಗಿತ್ತು. ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಪ್ರಕರಣ ದಾಖಲಿಸಲಾಗಿದೆ.
ತುಮಕೂರು ಜಿಲ್ಲೆಯ ಗುಬ್ಬಿ ನಿವಾಸಿ, ಸಾಮಾಜಿಕ ಕಾರ್ಯಕರ್ತ ಮಲ್ಲಿಕಾರ್ಜುನ ಆಲೇಗೌಡ ಎಂಬುವರು ಖಾಸಗಿ ದೂರನ್ನು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಹೂಡಿದ್ದರು. ಮಾರ್ಚ್ 27ರಂದು ಎಚ್.ಡಿ.ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಐಟಿ ಅಧಿಕಾರಿಗಳು ಜೆಡಿಎಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸುವ ಮಾಹಿತಿ ದೊರೆತಿದೆ ಎಂದು ಹೇಳಿದ್ದರು.
ಅದಾದ ಮರು ದಿನ ಅಂದರೆ ಮಾರ್ಚ್ 28ರಂದು ಬೆಂಗಳೂರಿನ ಕ್ವೀನ್ಸ್ ಸರ್ಕಲ್ ನಲ್ಲಿರುವ ಐಟಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದರು ಎಂದು ಮಲ್ಲಿಕಾರ್ಜುನ ಆಲೇಗೌಡ ಆರೋಪಿಸಿದ್ದಾರೆ.
ಪ್ರತಿಭಟನೆಯ ವೇಳೆ ಐಟಿ ಇಲಾಖೆ ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಲಾಗಿತ್ತು. ನೂರಾರು ಮಂದಿ ಪ್ರತಿಭಟನೆ ನಡೆಸಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳದಲ್ಲಿ ಪೊಲೀಸರು ಇದ್ದರೂ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ ಎಂದು ಆಪಾದಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಕೇಸು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.


