ಮನೆಯಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನನ್ನು ತಪ್ಪಿತಸ್ಥ ಎಂದು ಘೋಷಿಸಿ ಆಂತರಿಕ ಸಮಿತಿ ಸಲ್ಲಿಸಿದ್ದ ವರದಿಯನ್ನು ರದ್ದುಗೊಳಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ (7) ವಜಾಗೊಳಿಸಿದೆ.
ನ್ಯಾಯಮೂರ್ತಿ ವರ್ಮಾ ಅವರ ನಡವಳಿಕೆಯು ವಿಶ್ವಾಸವನ್ನು ತುಂಬುವಲ್ಲಿ ವಿಫಲವಾಗಿದೆ ಎಂದು ಹೇಳಿದ ನ್ಯಾಯಪೀಠ, ಅವರ ಅರ್ಜಿಯು ಪರಿಗಣನೆಗೆ ಅರ್ಹವಲ್ಲ ಎಂದು ನಿರ್ಧರಿಸಿದೆ.
ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಚಿಸಿದ್ದ ನ್ಯಾಯಾಧೀಶರ ಆಂತರಿಕ ತನಿಖಾ ಸಮಿತಿಯು ಸೂಕ್ತ ಪ್ರಕ್ರಿಯೆಯನ್ನು ಅನುಸರಿಸಿದೆ ಎಂದು ನ್ಯಾಯಾಲಯ ಹೇಳಿದೆ.
ನ್ಯಾಯಮೂರ್ತಿ ವರ್ಮಾ ಅವರನ್ನು ಪದಚ್ಯುತಗೊಳಿಸಲು ಶಿಫಾರಸು ಮಾಡಿದ ಸಮಿತಿಯ ವರದಿಯನ್ನು ಪ್ರಧಾನ ಮಂತ್ರಿ ಮತ್ತು ರಾಷ್ಟ್ರಪತಿಗಳಿಗೆ ರವಾನಿಸುವುದು ಸಾಂವಿಧಾನಿಕವಾಗಿ ಮಾನ್ಯವಾಗಿದೆ ಎಂದು ತಿಳಿಸಿದೆ.
“ಸಿಜೆಐ ಮತ್ತು ಆಂತರಿಕ ಸಮಿತಿ ಫೋಟೋಗಳು ಮತ್ತು ವೀಡಿಯೊ ಅಪ್‌ಲೋಡ್ ಮಾಡುವುದನ್ನು ಹೊರತುಪಡಿಸಿ, ಉಳಿದ ಪ್ರಕ್ರಿಯೆಗಳನ್ನು ಸೂಕ್ಷ್ಮವಾಗಿ ಅನುಸರಿಸಿದೆ. ಫೋಟೋ, ವಿಡಿಯೋ ಅಪ್ಲೋಡ್ ಅಗತ್ಯವಿಲ್ಲ ಎಂದು ನಾವು ಹೇಳಿದ್ದೇವೆ. ನೀವು ಈ ಹಿಂದೆ ಈ ಬಗ್ಗೆ ಪ್ರಶ್ನಿಸಿದ ಕಾರಣ ನಾವು ಮಾಡಿಲ್ಲ” ಎಂದು ಎಂದು ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಹೇಳಿದೆ.
ಸುಪ್ರೀಂ ಕೋರ್ಟ್ ಅರ್ಜಿ ತಿರಸ್ಕರಿಸಿರುವ ಹಿನ್ನೆಲೆ, ಅದೇ ಪೀಠದ ಮುಂದೆ ಪುನರ್ ಪರಿಶೀಲನೆ ಮತ್ತು ಕ್ಯುರೇಟಿವ್ ಅರ್ಜಿ ಸಲ್ಲಿಸುವುದು ನ್ಯಾಯಮೂರ್ತಿ ವರ್ಮಾ ಮುಂದಿರುವ ಪರ್ಯಾಯ ಕಾನೂನು ಆಯ್ಕೆ ಎಂದು ವರದಿಗಳು ಹೇಳಿವೆ.
ನ್ಯಾಯಮೂರ್ತಿ ವರ್ಮಾ ಅವರು ತಮ್ಮ ಪರ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಮುಕುಲ್ ರೋಹಟಗಿ ಮೂಲಕ ಮಾಡಿದ ಎಲ್ಲಾ ಮನವಿ ಮತ್ತು ಪ್ರಶ್ನೆಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ ಎಂದು ವರದಿಯಾಗಿದೆ.
ನ್ಯಾಯಮೂರ್ತಿ ವರ್ಮಾ ಅವರ ಎಲ್ಲಾ ರೀತಿಯ ವಾದಗಳನ್ನು ಆಲಿಸಿದ್ದ ನ್ಯಾಯಮೂರ್ತಿಗಳಾದ ದತ್ತ ಮತ್ತು ಮಸಿಹ್ ಅವರಿದ್ದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ, ಜುಲೈ 30ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಈ ವೇಳೆ “ಈ ಪ್ರಕರಣದಲ್ಲಿ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಲಾಗಿದೆ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಪ್ರಕರಣದ ಹಿನ್ನೆಲೆ: ನ್ಯಾ.ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರು ಉಳಿದುಕೊಂಡಿದ್ದ ದೆಹಲಿಯ ಮನೆಯಲ್ಲಿ 2025ರ ಮಾರ್ಚ್ 14ರ ಸಂಜೆ ಬೆಂಕಿ ಅವಘಡ ಸಂಭವಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಾಗ ಮನೆಯಲ್ಲಿ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿತ್ತು ಎನ್ನಲಾಗಿದೆ. ಈ ವಿಚಾರ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಆದರೆ, ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪವನ್ನು ನಿರಾಕರಿಸಿದ್ದ ನ್ಯಾ. ವರ್ಮಾ, “ಇದು ನನ್ನನ್ನು ಸಿಲುಕಿಸಲು ನಡೆದಿರುವ ಪಿತೂರಿ” ಎಂದಿದ್ದರು.
ಘಟನೆಯ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾ. ವರ್ಮಾ ಅವರನ್ನು ಅಲಾಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿತ್ತು. ವರ್ಗಾವಣೆಯಾದರೂ ಅವರಿಗೆ ಯಾವುದೇ ಕೆಲಸ ವಹಿಸದಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಆದರೆ, ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರಾಕರಿಸಿತ್ತು. ಮತ್ತೊಂದೆಡೆ ತನಿಖೆಗೆ ಸಿಜೆಐ ಆಂತರಿಕ ಸಮಿತಿ ರಚಿಸಿದ್ದರು.
ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾದ ಬಳಿಕ ನ್ಯಾಯಾಂಗದ ಪಾರದರ್ಶಕತೆಯ ಬಗ್ಗೆ ದೇಶದಲ್ಲಿ ಚರ್ಚೆಯಾಗಿತ್ತು. ಇದನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿತ್ತು. ಏಪ್ರಿಲ್ 1ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಬಹಿರಂಗಪಡಿಸಲು ನಿರ್ಧರಿಸಿದ್ದರು. ಅದರಂತೆ, ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ನ 21 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದರು.
ಸುಪ್ರೀಂ ಕೋರ್ಟ್ ನಿಯೋಜಿಸಿದ್ದ ಆಂತರಿಕ ಸಮಿತಿಯು ಮಾರ್ಚ್ 25ರಂದು ತನಿಖೆ ಆರಂಭಿಸಿ, ಮೇ 3ರಂದು ತನ್ನ ವರದಿಯನ್ನು ಅಂತಿಮಗೊಳಿಸಿತ್ತು. ಅದನ್ನು ಮೇ4 ರಂದು ಸಿಜೆಐಗೆ ಸಲ್ಲಿಸಿತ್ತು. ವರದಿಯಲ್ಲಿ ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪ ನಿಜ ಎಂದು ಸಮಿತಿ ದೃಢಪಡಿಸಿತ್ತು.
ಆಂತರಿಕ ಸಮಿತಿಯ ವರದಿಯನ್ನು ಪ್ರಶ್ನಿಸಿ ನ್ಯಾ. ವರ್ಮಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಅತ್ತ ಸಂಸತ್ತಿನಲ್ಲಿ ನ್ಯಾ.ವರ್ಮಾ ಪದಚ್ಯುತಿಗೆ ಸಿದ್ದತೆ ನಡೆದಿದೆ. ಈಗಾಗಲೇ 100ಕ್ಕೂ ಹೆಚ್ಚು ಸಂಸದರು ಪದಚ್ಯುತಿ ನೋಟಿಸ್‌ಗೆ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರಸ್ತುತ ನಡೆಯುತ್ತಿರುವ ಮಳೆಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಪದಚ್ಯುತಿ ನಿರ್ಣಯ ಮಂಡಿಸಿ ಅಂಗೀಕಾರ ಪಡೆಯುವ ಸಾಧ್ಯತೆ ಇದೆ.
ಮಾಧ್ಯಮ ನಿರ್ಬಂಧ| ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಧರ್ಮಸ್ಥಳ ಹರ್ಷೇಂದ್ರ ಕುಮಾರ್


