ವಿಧಾನಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಸಿ.ಟಿ ರವಿ ಅಶ್ಲೀಲ ಪದ ಬಳಸಿದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಮಂಗಳವಾರ (ಡಿ.24) ಹುಬ್ಬಳ್ಳಿಯಲ್ಲಿ ಮಾತನಾಡಿದ ಪರಮೇಶ್ವರ್ ಅವರು, “ಸಿ.ಟಿ ರವಿ ತಾನು ಅವಾಚ್ಯ ಪದ ಬಳಕೆ ಮಾಡಿಲ್ಲ ಎಂದು ಹೇಳಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಇತರ ಕೆಲ ಪರಿಷತ್ ಸದಸ್ಯರು ಅವಾಚ್ಯ ಪದ ಬಳಸಿರುವುದು ನಿಜ ಎಂದಿದ್ದಾರೆ. ಹಾಗಾಗಿ, ಇವೆಲ್ಲದರ ಕುರಿತು ತನಿಖೆ ನಡೆಯಲಿದೆ. ಸಿಐಡಿ ಸತ್ಯಾಸತ್ಯತೆ ಪರಿಶೀಲಿಸಿ ವರದಿ ನೀಡಲಿದೆ ಎಂದು ಹೇಳಿದ್ದಾರೆ.
ಸಿ.ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, “ಪೊಲೀಸರು ತಮ್ಮ ಕೆಲಸ ಮಾಡಿದ್ದಾರೆ. ಸಭಾಪತಿ ಅವರ ಕೆಲಸ ಮಾಡಿದ್ದಾರೆ. ಪೊಲೀಸ್ ಇಲಾಖೆಗೆ ತನ್ನದೇ ಆದ ಜವಬ್ದಾರಿಗಳಿರುತ್ತದೆ. ಏನೇ ಕ್ರಮ ಕೈಗೊಳ್ಳಬೇಕಿದ್ದರೂ ಮುಖ್ಯಮಂತ್ರಿ ಅಥವಾ ಗೃಹ ಸಚಿವರು ಆದೇಶ ನೀಡಬೇಕು. ಇಲಾಖೆಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ನ್ಯಾಯಾಂಗ ತನಿಖೆ ಬಿಜೆಪಿ ಮನವಿ:
ಇತ್ತ ಸಿ.ಟಿ ವಿರುದ್ದದ ಆರೋಪದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದರೆ, ಅತ್ತ ಬಿಜೆಪಿ ನಿಯೋಗ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಪ್ರಕರಣದ ನ್ಯಾಯಾಂಗ ತನಿಖೆಗೆ ಕೋರಿದೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿಯ ಇತರ ಹಿರಿಯ ನಾಯಕರ ನೇತೃತ್ವದ ನಿಯೋಗ ನಿನ್ನೆ (ಡಿ.24) ಸಂಜೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ರಾಜ್ಯಪಾಲ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, “ಸಿ.ಟಿ ರವಿ ಅವರ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ಕುರಿತು ರಾಜ್ಯಪಾಲರಿಗೆ ವಿವರಿಸಿದ್ದೇವೆ. ಅವರ ವಿರುದ್ದದ ಆರೋಪ ಮತ್ತು ನಂತರ ನಡೆದ ಬೆಳವಣಿಗೆಗಳ ಕುರಿತು ನ್ಯಾಯಾಂಗ ತನಿಖೆಗೆ ಆಗಹಿಸಿದ್ದೇವೆ” ಎಂದು ಹೇಳಿದ್ದಾರೆ.
ಅಂಬೇಡ್ಕರ್‌ಗೆ ಅವಮಾನ| ಅಮಿತ್ ಶಾ ಪ್ರತಿಕೃತಿ ದಹಿಸಿ ಡಿಎಸ್‌ಎಸ್ ಪ್ರತಿಭಟನೆ


