ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಬ್ಬರೂ ಗುರುವಾರ ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದು, ನಾಯಕತ್ವ ಬದಲಾವಣೆ, ಶಾಸಕರ ಅಸಮಾಧಾನ ವಿಚಾರ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಬ್ಬರೂ ನಾಯಕರು ದೆಹಲಿಗೆ ತಮ್ಮ ಭೇಟಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಲು ಎಂದು ಹೇಳಿಕೊಂಡಿದ್ದಾರೆ. ಆದರೆ, ಇಬ್ಬರೂ ರಾಹುಲ್ ಗಾಂಧಿಯೊಂದಿಗೆ ನೇರ ಮಾತುಕತೆಗಾಗಿ ಪ್ರತ್ಯೇಕ ಸಮಯವಕಾಶ ಕೋರಿರುವುದು ಕುತೂಹಲ ಮೂಡಿಸಿದೆ.
ಅವಕಾಶ ಸಿಕ್ಕರೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವುದಾಗಿ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದ್ದು, “ರಣದೀಪ್ ಸಿಂಗ್ ಸುರ್ಜೇವಾಲ (ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ) ನವದೆಹಲಿಗೆ ಆಗಮಿಸಲಿದ್ದಾರೆ. ನಾಲ್ಕು ವಿಧಾನಪರಿಷತ್ ಸ್ಥಾನಗಳಿಗೆ ನಾಮನಿರ್ದೇಶನ, ಮಂಡಳಿಗಳು ಮತ್ತು ನಿಗಮಗಳಿಗೆ ನೇಮಕಾತಿಗಳ ಬಗ್ಗೆ ನಾವು ಚರ್ಚಿಸುತ್ತೇವೆ. ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರ ಸಮಯ ಕೇಳಿದ್ದೇವೆ ಎಂದು ಹೇಳಿದ್ದಾರೆ.
ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಇದೇ ಮಾತನ್ನು ಹೇಳಿದ್ದು, “ಮುಂದಿನ ವಿಧಾನಸಭಾ ಅಧಿವೇಶನಕ್ಕೂ ಮುನ್ನ ನಾಲ್ಕು ವಿಧಾನಪರಿಷತ್ ಸ್ಥಾನಗಳ ನಾಮನಿರ್ದೇಶನ ನಡೆಯಲಿದೆ. ನಾನು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿಲ್ಲ, ಆದರೆ ಸಮಯ ಕೇಳಿದ್ದೇನೆ” ಎಂದಿದ್ದಾರೆ.
“ಸಚಿವ ಸಂಪುಟ ಪುನರ್‌ರಚನೆ ಬಗ್ಗೆ ಹೈಕಮಾಂಡ್ ಜೊತೆ ಯಾವುದೇ ಚರ್ಚೆ ನಡೆದಿಲ್ಲ. ಬೆಂಗಳೂರಿನಲ್ಲಿ ಕೆಲವು ರಸ್ತೆ ಅಗಲೀಕರಣ ಯೋಜನೆಗಳಿಗೆ ರಕ್ಷಣಾ ಭೂಮಿ ಅಗತ್ಯವಿರುವುದರಿಂದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲು ನಾವು ಇಲ್ಲಿಗೆ ಬಂದಿದ್ದೇವೆ” ಎಂದು ಡಿ.ಕೆ ಶಿವಕುಮಾರ್ ಬುಧವಾರ ಹೇಳಿದ್ದರು.
ರಾಹುಲ್ ಬುಧವಾರ ಸಂಜೆ ದೆಹಲಿಗೆ ಆಗಮಿಸಿದ್ದು, ಗುರುವಾರ ಇಬ್ಬರೂ ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
ಸಂಪುಟ ಸಹೋದ್ಯೋಗಿಗಳಾದ ಕೆ.ಜೆ. ಜಾರ್ಜ್, ಎಂ.ಬಿ ಪಾಟೀಲ್, ಬೈರತಿ ಸುರೇಶ್ ಹಾಗೂ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರೊಂದಿಗೆ ಸಿಎಂ ಮತ್ತು ಡಿಸಿಎಂ ಬುಧವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿದ್ದರು. ಮೈಸೂರು ದಸರಾ ಸಂದರ್ಭದಲ್ಲಿ ವೈಮಾನಿಕ ಪ್ರದರ್ಶನಕ್ಕೆ ಅನುಮತಿ ಮತ್ತು ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸ್ಥಾಪನೆ ಮಾಡುವಂತೆ ಕೋರಿದ್ದಾಗಿ ತಿಳಿಸಿದ್ದಾರೆ.
ಡಿ.ಕೆ ಶಿವಕುಮಾರ್ ಬುಧವಾರ ಬೆಳಿಗ್ಗೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ. ಇದು ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ಮತ್ತಷ್ಟು ಪುಷ್ಠಿ ನೀಡಿದೆ.
ಈ ನಡುವೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿದ್ದಾರೆ. ಹಾಗಾಗಿ, ರಾಹುಲ್ ನಾಯಕತ್ವದಲ್ಲಿ ಯಾವುದೇ ಬದಲಾವಣೆಯ ಬಗ್ಗೆ ನಿರ್ಧರಿಸಬೇಕಾಗುತ್ತದೆ ಅಥವಾ ಇಬ್ಬರು ನಾಯಕರನ್ನು ಸಮಾಧಾನಪಡಿಸಬೇಕಾಗುತ್ತದೆ ಎಂದು ವರದಿಗಳು ಹೇಳಿವೆ.
ರಾಜ್ಯಕ್ಕೆ ಆಗಮಿಸಿ ಎರಡು ಹಂತಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಭೇಟಿಯಾಗಿ, ಅವರ ಅಹವಾಲು ಕೇಳಿರುವ ರಣದೀಪ್ ಸುರ್ಜೇವಾಲಾ ಅವರು, ರಾಹುಲ್ ಗಾಂಧಿಗೆ ವರದಿ ಒಪ್ಪಿಸಲಿದ್ದಾರೆ. ಆ ವರದಿಯಲ್ಲಿ ನಾಯಕತ್ವ ಬದಲಾವಣೆ ಮತ್ತು ಅನುದಾನ ಬಿಡುಗಡೆಯ ಕುರಿತ ಶಾಸಕ ಪರ-ವಿರೋಧ ಅಭಿಪ್ರಾಯಗಳು ಇವೆ ಎನ್ನಲಾಗಿದೆ.
ಸಚಿವ ಸಂಪುಟ ಪುನರ್‌ರಚನೆ ಸದ್ಯಕ್ಕಿಲ್ಲ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್


