ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಬಲ್ಡೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್) ಕಾರ್ಖಾನೆ ಸ್ಥಾಪನೆಯ ಎಲ್ಲಾ ಸಿದ್ದತೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಲ್ ಅರಸಿದ್ದಿ ಅವರಿಗೆ ಮಂಗಳವಾರ (ಮಾ.4) ಸೂಚಿಸಿದ್ದಾರೆ.
ಬಿಎಸ್‌ಪಿಎಲ್ ಕಂಪನಿಯು 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆಯನ್ನು ಕೊಪ್ಪಳ ಜಿಲ್ಲಾ ಕೇಂದ್ರದ ಸಮೀಪದಲ್ಲಿಯೇ ಸ್ಥಾಪನೆ ಮಾಡಲು ಮುಂದಾಗಿರುವುದು ಜನರ ತೀವ್ರ ವಿರೋಧಕ್ಕೆ ಕಾರಣವಾಗಿದೆ.
ಈ ಸಂಬಂಧ ಇತ್ತೀಚೆಗೆ ಕೊಪ್ಪಳ ತಾಲೂಕು ಪರಿಸರ ಹಿತರಕ್ಷಣಾ ವೇದಿಕೆ ಕರೆ ನೀಡಿದ್ದ ಜಿಲ್ಲಾ ಬಂದ್ ಯಶಸ್ವಿಯಾಗಿತ್ತು. ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮಿ, ರೈತರು, ಹೋರಾಟಗಾರರು ಮತ್ತು ಜನ ಸಾಮಾನ್ಯರು ಕಾರ್ಖಾನೆ ವಿರೋಧಿಸಿ ಪ್ರತಿಭಟಿಸಿದ್ದರು.
ಹೋರಾಟದ ಮುಂದಿನ ಹಂತವಾಗಿ ಇಂದು (ಮಾ.4) ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳು ಹಾಗೂ ಕೊಪ್ಪಳ ಪರಿಸರ ಹಿತರಕ್ಷಣಾ ವೇದಿಕೆ ಪ್ರಮುಖರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಕಾರ್ಖಾನೆ ವಿಸ್ತರಣೆ ಮಾಡಿದರೆ ಜಿಲ್ಲಾಕೇಂದ್ರಕ್ಕೆ ವಿಪರೀತ ದೂಳು ಬರುತ್ತದೆ. ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ವಿಸ್ತರಣೆಗೆ ಅವಕಾಶ ಕೊಡಬಾರದು ಎಂದು ಮನವಿ ಮಾಡಿದ್ದರು.

ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಕಾರ್ಖಾನೆ ಕೆಲಸವನ್ನು ನಿಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ.
ಜಿಲ್ಲಾ ಉಸ್ತುವಾರಿ ಶಿವರಾಜ ತಂಗಡಗಿ ನೇತೃತ್ವದ ನಿಯೋಗದಲ್ಲಿ ಸಂಸದ ರಾಜಶೇಖರ ಹಿಟ್ನಾಳ, ರಾಘವೇಂದ್ರ ಹಿಟ್ನಾಳ್, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಶಾಸಕ ಗಾಲಿ ಜನಾರ್ದನ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಶರಣಗೌಡ ಬಯ್ಯಾಪುರ, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ಮುಖಂಡರಾದ ವೀರೇಶ ಮಹಾಂತಯ್ಯನಮಠ, ಸಂತೋಷ ದೇಶಪಾಂಡೆ, ಶರಣಪ್ಪ ಸಜ್ಜನ, ಮುನಿರಾಬಾದ್ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ, ಮಾಜಿ ಶಾಸಕರಾದ ಕೆ. ಬಸವರಾಜ ಹಿಟ್ನಾಳ, ಕೆ. ಶರಣಪ್ಪ ಕರಿಯಣ್ಣ ಸಂಗಟಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು, ಸಂಘಟನೆಗಳ ಪ್ರಮುಖರು ಇದ್ದರು.


