Homeಮುಖಪುಟವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

- Advertisement -
- Advertisement -

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30) ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಮೂಲ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಜನರ ಉದ್ಯೋಗದ ಬೇಡಿಕೆ ಮತ್ತು ಹಕ್ಕು ಆಧಾರಿತವಾಗಿತ್ತು ಎಂದು ಸಿಎಂ ಪತ್ರದಲ್ಲಿ ಹೇಳಿದ್ದಾರೆ.

ಹೊಸ ಕಾಯ್ದೆಯು ಉದ್ಯೋಗದ ದಿನಗಳನ್ನು 100 ರಿಂದ 125 ಕ್ಕೆ ಏರಿಸಿದರೂ, ಯೋಜನೆ ಅನುಷ್ಠಾನದಲ್ಲಿ ಕೇಂದ್ರದ ನಿಗದಿತ ಅನುದಾನದ ಖಾತ್ರಿಯಿರುವುದಿಲ್ಲ. ಕೇಂದ್ರ ಸರ್ಕಾರದ ಹಣಕಾಸು ಹೊಣೆಗಾರಿಕೆಯನ್ನು ಪ್ರತಿ ರಾಜ್ಯದ “ಅಧಿಸೂಚಿತ” ಪ್ರದೇಶಕ್ಕೆ “ಮಾನದಂಡ ಹಂಚಿಕೆ” ಗೆ ಸೀಮಿತಗೊಳಿಸಲಾಗಿದೆ. ಇದರಲ್ಲಿ ಕೇಂದ್ರವು 60% ಮಾತ್ರ ನೀಡುತ್ತದೆ (ಬಹುತೇಕ ರಾಜ್ಯಗಳಲ್ಲಿ). ಇದರಿಂದಾಗಿ, 125 ದಿನಗಳ ಕಾಯ್ದೆಬದ್ಧ ಭರವಸೆ ಪೂರ್ಣವಾಗಿರದೆ, ಕೇಂದ್ರವು ನಿಗದಿ ಮಾಡುವ ಹಣಕಾಸು ಮಿತಿಗೆ ಒಳಪಟ್ಟಿರುತ್ತದೆ. ಇದರಿಂದ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ನಿಜವಾದ ಬೇಡಿಕೆ ಇದ್ದರೂ ಹಣದ ಅಭಾವ ಉಂಟಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಹೊಸ ಕಾಯ್ದೆಯ ಪ್ರಕಾರ ಕೇಂದ್ರ ಸರ್ಕಾರವು “ವಸ್ತುನಿಷ್ಠ ನಿಯತಾಂಕಗಳ” ಆಧಾರದ ಮೇಲೆ ರಾಜ್ಯವಾರು ಮಾನದಂಡ ಹಂಚಿಕೆ ನಿಗದಿ ಮಾಡುತ್ತದೆ. ಈ ನಿಯತಾಂಕಗಳು ಕಾಯ್ದೆಯಲ್ಲಿ ಸೇರಿರದೆ, ಯಾವುದೇ ಸಮಯದಲ್ಲಿ ಬದಲಾಯಿಸಬಹುದು
ಇದರಿಂದಾಗಿ ಬೇಡಿಕೆ-ಚಾಲಿತ ವ್ಯವಸ್ಥೆಯು, ಸರಬರಾಜು-ಚಾಲಿತ, ಮೇಲಿನಿಂದ-ಕೆಳಗಿನ ವ್ಯವಸ್ಥೆಯಾಗಿ ಮಾರ್ಪಡುವ ಅಪಾಯವಿದೆ. ಇದು ಮೂಲ ಕಾಯ್ದೆಯಲ್ಲಿರುವ ಸಹಭಾಗಿತ್ವದ ವಿಧಾನಕ್ಕೆ (ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಮಿಕ ಬಜೆಟ್, ಗ್ರಾಮಗಳ ಬೇಡಿಕೆಗೆ ಅನುಗುಣವಾದ ಹಂಚಿಕೆ) ವಿರುದ್ಧವಾಗಿದೆ ಎಂದಿದ್ದಾರೆ.

ಹೊಸ ಕಾಯ್ದೆಯಲ್ಲಿನ ಹಣಕಾಸು ಹಂಚಿಕೆಯೂ ಸಹ ಕಳವಳಕಾರಿಯಾಗಿದೆ. ಮೂಲ ಕಾಯ್ದೆಯ ಚೌಕಟ್ಟಿನಲ್ಲಿ ಹೆಚ್ಚಿನ ರಾಜ್ಯಗಳಲ್ಲಿ 90:10 (ಕೇಂದ್ರ-ರಾಜ್ಯ) ಹಂಚಿಕೆ ಇದೆ. ಹೊಸ ಕಾಯ್ದೆಯು ಇದನ್ನು 60:40 ಗೆ ಬದಲಾಯಿಸಿ, ಕಾನೂನುಬದ್ಧ ಭರವಸೆಯನ್ನು ಸಾಮಾನ್ಯ ಯೋಜನೆಯಾಗಿ ಮಾರ್ಪಡಿಸುತ್ತದೆ. ಇದು ರಾಜ್ಯ ಹಣಕಾಸಿನ ಮೇಲೆ ಹೆಚ್ಚುವರಿ ಹೊರೆಯನ್ನು ಹೇರುತ್ತದೆ. ರಾಜ್ಯ ಸರ್ಕಾರಗಳೊಂದಿಗೆ ಅರ್ಥಪೂರ್ಣ ಸಮಾಲೋಚನೆ ಇಲ್ಲದೆ ಈ ಬದಲಾವಣೆ ಮಾಡಲಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಹೊಸ ಕಾಯ್ದೆಯು ರಾಜ್ಯವು ತನ್ನ ಮಾನದಂಡ ಹಂಚಿಕೆಯನ್ನು ಮೀರಿ ಖರ್ಚು ಮಾಡಿದಲ್ಲಿ, ಆ ಖರ್ಚನ್ನು ಕೇಂದ್ರ ನಿಗದಿ ಮಾಡುವ ವಿಧಾನದ ಪ್ರಕಾರ ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಹೇಳುತ್ತದೆ. ಇದರಿಂದ ಕೇಂದ್ರ ನಿಗದಿ ಮಿತಿಗಿಂತ ಹೆಚ್ಚಿನ ಬೇಡಿಕೆಗಳ ಅನುಷ್ಠಾನಕ್ಕೆ ರಾಜ್ಯಗಳು ಶೇ.100ರಷ್ಟು ಹೊಣೆಗಾರಿಕೆ ಹೊರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಕಾಯ್ದೆಯು ರಾಜ್ಯಗಳು ಬಿತ್ತನೆ ಮತ್ತು ಬೆಳೆ ಕಟಾವಿನ ಅವಧಿಯ 60 ದಿನಗಳನ್ನು ಮುಂಚಿತವಾಗಿ ಅಧಿಸೂಚಿಸುವಂತೆ ನಿರ್ದೇಶಿಸುತ್ತದೆ. ಈ ಅವಧಿಯಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಾಗಿರಬಹುದಾದರೂ, ಇದು ಕೃಷಿ ಕಾರ್ಮಿಕರ, ಆದಿವಾಸಿ, ದುರ್ಬಲ ಸಮುದಾಯಗಳ ಮಜೂರಿ ಕೂಲಿಯ ಹಕ್ಕನ್ನು ಕಸಿಯುವ ಸಾಧ್ಯತೆಯಿದೆ. ಇದರಿಂದ ಜೀವನೋಪಾಯಕ್ಕಾಗಿ ಒತ್ತಡದಿಂದ ಕಡಿಮೆ ಕೂಲಿ ಕೆಲಸ ಮಾಡುವ ಆ ಮೂಲಕ ನಗರಗಳಿಗೆ ವಲಸೆ ಪ್ರಮಾಣ ಹೆಚ್ಚುವ ಸಾಧ್ಯತೆಯಿದೆ ಎಂದಿದ್ದಾರೆ.

ಹೊಸ ಕಾಯ್ದೆ ಮೂಲ ಉದ್ಯೋಗ ಖಾತ್ರಿ ಯೋಜನೆಯ ಆಶಯಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಹೊಸ ಕಾಯ್ದೆ “ಕೆಲಸದ ಹಕ್ಕು” ನಿಂದ “ಅನುಮತಿ ಇದ್ದರೆ ಮಾತ್ರ ಕೆಲಸ” ಕ್ಕೆ, “ಗ್ರಾಮೀಣ ಪ್ರದೇಶಗಳಾದ್ಯಂತ ಕೆಲಸ”ದಿಂದ “ಅನುಮತಿ ಇರುವೆಡೆ ಮಾತ್ರ ಕೆಲಸ” ಕ್ಕೆ, ಮತ್ತು “ವರ್ಷದಾದ್ಯಂತ ಕೆಲಸ” ನಿಂದ “ಕೃಷಿ ಚಟುವಟಿಕೆ ಋತುವಿನಲ್ಲಿ ಕೆಲಸವಿಲ್ಲ” ಎಂಬ ನಿಯಮಾವಳಿಯನ್ನು ಸೃಷ್ಟಿಸಿದೆ. ಇದು ಗ್ರಾಮೀಣ ಭಾಗದಲ್ಲಿ ಸಂಪನ್ಮೂಲ ಸೃಷ್ಟಿಯ ಆಶಯವನ್ನು ಗುತ್ತಿಗೆದಾರರ ಕೇಂದ್ರಿತ ಮಾದರಿಗೆ ದಾರಿ ಮಾಡಿಕೊಡುವ ಅಪಾಯವಿದೆ ಎಂದು ಸಿಎಂ ತಿಳಿಸಿದ್ದಾರೆ.

ಹೊಸ ಕಾಯ್ದೆಯಲ್ಲಿ ಹೆಚ್ಚಿನ ತಾಂತ್ರಿಕ ಹಸ್ತಕ್ಷೇಪಕ್ಕೆ ಅವಕಾಶವಿದ್ದು, ಇದರಿಂದ ಬಡತನ ರೇಖೆಗಿಂತ ಕೆಳಗಿರುವ ಮತ್ತು ಡಿಜಿಟಲ್ ಸೌಲಭ್ಯವಿಲ್ಲದ ಗ್ರಾಮೀಣ ನಾಗರಿಕರನ್ನು, ವಿಶೇಷವಾಗಿ ದಲಿತ ಮತ್ತು ಆದಿವಾಸಿ ಸಮುದಾಯಗಳನ್ನು ಯೋಜನೆಯಿಂದ ದೂರ ಮಾಡಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ವಿಬಿ-ಜಿ ರಾಮ್ ಜಿ ಕಾಯ್ದೆಯ ಜಾರಿಯು ಸಂವಿಧಾನದ 258 ಮತ್ತು 280ನೇ ವಿಧಿಗಳನ್ನು ಉಲ್ಲಂಘಿಸುತ್ತದೆ. ಸಂವಿಧಾನದ ಈ ವಿಧಿಗಳು ಕೇಂದ್ರ ಪ್ರಾಯೋಜಿತ ಯೋಜನೆಗಳಡಿ ಹಣಕಾಸು ಚೌಕಟ್ಟು ವಿಧಿಸುವ ಮುನ್ನ ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚನೆ, ಹಣಕಾಸು ಒಕ್ಕೂಟ, ಮತ್ತು ಸ್ಥಳೀಯ ಆಡಳಿತ ಬಲಗೊಳಿಸುವಿಕೆಗೆ ಮಹತ್ವ ನೀಡುತ್ತದೆ. ಆದರೆ ಕೇಂದ್ರ ಸರ್ಕಾರದ ಧೋರಣೆ ಸಹಕಾರಿ ಒಕ್ಕೂಟದ ಅಡಿಪಾಯಕ್ಕೆ ಅಪಾಯಕಾರಿಯಾಗಿದೆ ಎಂದಿದ್ದಾರೆ.

ಉದ್ಯೋಗ ಭರವಸೆ ಕಾನೂನು ಕೇವಲ ಒಂದು ಕಲ್ಯಾಣ ಕ್ರಮವಲ್ಲ; ಇದೊಂದು ಐತಿಹಾಸಿಕ, ವಿಶ್ವಮಾನ್ಯತೆ ಪಡೆದ, ಹಕ್ಕು-ಆಧಾರಿತ ಶಾಸನವಾಗಿದೆ. ಇದು ಗ್ರಾಮ ಸ್ವರಾಜ್ ಮತ್ತು ಅಂತ್ಯೋದಯದ ಪ್ರತೀಕವಾದ ಮಹಾತ್ಮಾ ಗಾಂಧೀಜಿಯ ಹೆಸರನ್ನು ಹೊಂದಿರುವುದು ಅರ್ಥಪೂರ್ಣವಾಗಿದೆ. ಆದರೆ ಪ್ರಸ್ತುತ ಕಾನೂನಿನಲ್ಲಿ ಮಹಾತ್ಮಾ ಗಾಂಧಿ ಅವರ ಹೆಸರನ್ನು ತೆಗೆದುಹಾಕಿರುವುದು ದುರದೃಷ್ಟಕರ ಸಂದೇಶ ನೀಡುತ್ತಿದ್ದು, ಹೊಸ ಕಾಯ್ದೆಯ ನೈತಿಕ ಅಧಿಕಾರವನ್ನು ದುರ್ಬಲಗೊಳಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ವಿಬಿ-ಜಿ ರಾಮ್ ಜಿ ಕಾಯ್ದೆಯ ಅನುಷ್ಠಾನವನ್ನು ತಡೆಹಿಡಿಯಲು, ಜೀವನೋಪಾಯದ ಹಕ್ಕನ್ನು ಬಲಪಡಿಸಲು ಮತ್ತು ಸಂವಿಧಾನಬದ್ಧವಾಗಿ ರಾಜ್ಯ ಸರ್ಕಾರಗಳೊಂದಿಗಿನ ಸಮಾಲೋಚನೆಗಳನ್ನು ನಡೆಸುವ ನಿಟ್ಟಿನಲ್ಲಿ ತಾವು ವೈಯಕ್ತಿಕವಾಗಿ ಮುಂದಾಗಬೇಕು ಎಂದು ಸಿಎಂ ಪತ್ರದಲ್ಲಿ ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...