ದೇಶದಲ್ಲಿ, ರಾಜ್ಯದಲ್ಲಿ ಜೆಡಿಎಸ್‌ಗೆ ಅಸ್ತಿತ್ವವೇ ಇಲ್ಲ. ಇನ್ನು ಶಿರಾದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಅನುಕಂಪದ ಅಲೆ ಎಲ್ಲಿಂದ ಬರುತ್ತದೆ ಎಂದು ಮುಖ್ಯಮಂತ್ರಿಗಳ ಕಾರ್ಯದರ್ಶಿ ರೇಣುಕಾಚಾರ್ಯ ವ್ಯಂಗ್ಯವಾಡಿದರು. ಕಾಂಗ್ರೆಸ್ ನಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಶೀತಲಸಮರ ನಡೆಯುತ್ತಿದ್ದು ಮುಖ್ಯಮಂತ್ರಿ ಹುದ್ದೆಗಾಗಿ ಈ ನಾಯಕರು ಹಗಲುಗನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೇಣುಕಾಚಾರ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಟೀಕಾಪ್ರಹಾರ ನಡೆಸಿದರು. ಶಿರಾದಲ್ಲಿ ಜೆಡಿಎಸ್ ಗೆ ಅನುಕಂಪದ ಅಲೆ ಇದೆ ಎನ್ನಲಾಗುತ್ತಿದೆ. ಆದರೆ ದೇಶದಲ್ಲಿ ರಾಜ್ಯದಲ್ಲಿ ಜೆಡಿಎಸ್ ಅಡ್ರಸ್ಸೇ ಇಲ್ಲ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಶೀತಲಸಮರ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರ ನಡುವೆ ಮುಖ್ಯಮಂತ್ರಿ ಹುದ್ದೆ ಪಡೆಯುವುದಕ್ಕಾಗಿ ಶೀತಲಸಮರ ನಡೆಯುತ್ತಿದೆ. ಅವರಲ್ಲಿ ಒಗ್ಗಟ್ಟಿನ ಕೊರತೆ ಇದೆ. ಸಿದ್ದರಾಮಯ್ಯ ಅವರು ಬಿಜೆಪಿ ಮತ್ತು ಪ್ರಧಾನಿ ಮೋದಿಯವರನ್ನು ಟೀಕಿಸುವುದನ್ನು ಬಿಟ್ಟರೆ ಅವರಿಗೆ ಬೇರೆ ಕೆಲಸವೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಇದು ಕೇವಲ ಉಪ ಚುನಾವಣೆಯಲ್ಲ, ನೈತಿಕ ರಾಜಕಾರಣ ಉಳಿಸುವ ಗುರುತರ ಜವಾಬ್ಧಾರಿ!
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಯ ಹಗಲುಗನಸು ಕಾಣುತ್ತಿದ್ದಾರೆ. ಇದು ನೆರವೇರುವುದಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಹಲವು ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಹೀಗಾಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂದೆ 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ. ಇದು ಶತಃಸಿದ್ಧ. ಬಿಜೆಪಿ 20 ವರ್ಷ ಅಧಿಕಾರದಲ್ಲಿ ಮುಂದುವರಿಯುವುದು ನೂರಕ್ಕೆ ನೂರರಷ್ಟು ಸತ್ಯ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು.
ಬಿಜೆಪಿ ಬಗ್ಗೆ ಯುವಕರಲ್ಲಿ ವಿಶೇಷ ಕಾಳಜಿ ಇದ್ದು, ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಜನರ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ. ಅವರ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ನಾವು ಸಂಘಟಿತರಾಗಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್ ನಲ್ಲಿ ಅಂತಹ ವಾತಾವರಣ ಇಲ್ಲ. ಶಿರಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಭ್ಯರ್ಥಿಯಾದರೆ, ಆರ್.ಆರ್. ನಗರ ಕ್ಷೇತ್ರಕ್ಕೆ ಡಿ.ಕೆ.ಶಿವಕುಮಾರ ಅಭ್ಯರ್ಥಿ ಅಂತಾರೆ. ಇದು ಏನನ್ನು ಸೂಚಿಸುತ್ತದೆ ಎಂದು ಟೀಕಿಸಿದರು.
ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್ ಮೇಲೆ ಮೀಟಿಂಗ್


