ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್.ರವಿಕುಮಾರ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತು ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ. ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಜುಲೈ 1ರಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಇತರ ಪ್ರಮುಖರು ಉಪ ಪೊಲೀಸ್ ಆಯುಕ್ತ (ವಿಧಾನಸೌಧ ಭದ್ರತೆ) ಎಂ. ಎನ್ ಕರಿಬಸವನಗೌಡ ಅವರೊಂದಿಗೆ ಮಾತನಾಡುತ್ತಿದ್ದರು. ಆಗ ಪರಿಷತ್ ವಿಪಕ್ಷ ಮುಖ್ಯ ಸಚೇತಕರೂ ಆಗಿರುವ ಎನ್. ರವಿಕುಮಾರ್ ಶಾಲಿನಿ ರಜನೀಶ್ ಅವರ ಕುರಿತು ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಮನೋಹರ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ.
ರವಿಕುಮಾರ್ ಬಳಸಿರುವ ಪದಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ. ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದೇವೆ. ಈ ಹಿಂದೆ ಸಿ.ಟಿ ರವಿ ಸದನದಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ತಿಂಗಳ ಹಿಂದೆ ರವಿ ಕುಮಾರ್ ಕಲಬುರಗಿ ಡಿಸಿ ವಿರುದ್ದ ಹೇಳಿಕೆ ಕೊಟ್ಟು ಹೈಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿದ್ದರು ಎಂದಿದ್ದಾರೆ.
ಇವರ ಈ ವರ್ತನೆಗಳು ಬಿಜೆಪಿಯ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಬಿಜೆಪಿಗೆ ಏನಾದರು ನೈತಿಕತೆ ಇದ್ದರೆ ರವಿಕುಮಾರ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಮನೋಹರ್ ಆಗ್ರಹಿಸಿದ್ದಾರೆ.
ಪೊಲೀಸ್ ಮಹಾನಿರ್ದೇಶಕರು, ಮಹಿಳಾ ಆಯೋಗಕ್ಕೆ ಪತ್ರ
ಶಾಲಿನಿ ರಜನೀಶ್ ಕುರಿತು ಮಾನಹಾನಿಕರ ಹೇಳಿಕೆ ನೀಡಿರುವ ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಕೋರಿ ಮೈಸೂರಿನ ಒಡನಾಡಿ ಸಂಸ್ಥೆಯ ಪರಶುರಾಮ್ ಎಂ.ಎಲ್ ಮತ್ತು ಸ್ಟ್ಲ್ಯಾನ್ಲಿ ಕೆ.ವಿ ಅವರು ಪೊಲೀಸ್ ಮಹಾನಿರ್ದೇಶಕರು ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ಪತ್ರದ ಸಾರಾಂಶ ಹೀಗಿದೆ
“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು “ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ” ಎಂದು ಬಿಜೆಪಿಯ ಎನ್.ರವಿಕುಮಾರ್ ಅವರು ನೀಡಿರುವ ನೀಡಿರುವ ದ್ವಂದ್ವ ಹೇಳಿಕೆ ಆಶ್ಚರ್ಯಕರ ಹಾಗೂ ಅಸಹನೀಯವಾಗಿದೆ. ಇವರ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ತಾವು ದಯಮಾಡಿ ಈ ನಿಟ್ಟಿನಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಕೋರುತ್ತಿದ್ದೇವೆ. ಇವರ ಹೇಳಿಕೆಯು ರಾಜ್ಯದಲ್ಲಿ ಉದ್ಯೋಗ ಮಾಡುತ್ತಿರುವ ಹೆಣ್ಣು ಮಕ್ಕಳ ಘನತೆಗೆ ಧಕ್ಕೆ ತರುವಂತಹ ಪರಿಸ್ಥಿತಿ ನಿರ್ಮಾಣವಾಗಲು ಕಾರಣವಾಗುತ್ತದೆ. ತಾವು ದಯಮಾಡಿ ಈ ವಿಚಾರದಲ್ಲಿ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಎನ್. ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ವಿನಂತಿಸಿಕೊಳ್ಳುತ್ತಿದ್ದೇವೆ.”
“ಮುಖ್ಯವಾಗಿ ಸಾಮಾಜಿಕ ಹೋರಾಟದ ಮುಂಚೂಣಿಯಲ್ಲಿರುವ ಒಡನಾಡಿ ಸಂಸ್ಥೆಯು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳೆದ 35 ವರ್ಷಗಳಿಂದ ಮಹಿಳೆಯರ ಸಶಕ್ತತೆ ಹಾಗೂ ಅವರ ಘನತೆಯುಕ್ತ ಜೀವನ ಕಟ್ಟಿಕೊಡುವಲ್ಲಿ ಶ್ರಮಿಸುತ್ತಿದೆ. ಇವರ ಹೇಳಿಕೆಯು ಮಹಿಳೆಯರ ಘನತೆಯನ್ನು ಕುಗ್ಗಿಸುವಂತಲ್ಲದೇ ಆತಂಕವನ್ನು ಸೃಷ್ಟಿಸುವಂತಾಗಿದೆ. ತಾವು ದಯಮಾಡಿ ಸೂಕ್ತ ತನಿಖೆಯನ್ನು ಕೈಗೊಳ್ಳಬೇಕೆಂದು ಈ ಮೂಲಕ ತಮ್ಮಲ್ಲಿ ವಿನಂತಿ. ಇದರೊಟ್ಟಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಲಿಂಕ್ ಅನ್ನು ಲಗತ್ತಿಸಲಾಗಿದೆ. https://www.facebook.com/share/p/1ZiquTtRut/.”
“ಪತ್ರದ ಪ್ರತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಉಚ್ಚ ನ್ಯಾಯಾಲಯ, ಕರ್ನಾಟಕ ಇವರಿಗೂ ಕಳಿಸಲಾಗಿದೆ.”
ಬೈಕ್ ಟ್ಯಾಕ್ಸಿ ಸೇವೆಯು ಹೆಚ್ಚು ಸುರಕ್ಷಿತ, ಅನುಕೂಲಕರ: ಹೈಕೋರ್ಟ್‌ನಲ್ಲಿ ಮಹಿಳಾ ಪ್ರಯಾಣಿಕರ ವಾದ


