ರಾಜ್ಯದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ದಿನೇ ದಿನೇ ಏರಿಕೆಯಾಗುತ್ತಿದ್ದು, ಕೊರೊನಾ ಪರಿಸ್ಥಿತಿ ನಿರ್ವಹಣೆ, ಸೋಂಕಿತರ ಪ್ರಾಣ ರಕ್ಷಣೆ ಮಾಡುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ವಿಕಾಸಸೌಧದ ಬಳಿ ಪ್ರತಿಭಟನೆ ನಡೆಸಿದೆ.
ಕೊರೊನಾ ಸೋಂಕಿತರಿಗೆ ಬೆಡ್, ಆಕ್ಸಿಜನ್, ವೆಂಟಿಲೇರ್ ಒದಗಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿ, ವಿಕಾಸಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಸಿದರು.
ಲಾಕ್‌ಡೌನ್ ಎಂದು ಪದ ಬಳಸದೇ ರಾಜ್ಯದಲ್ಲಿ ಲಾಕ್‌ಡೌನ್ ವಿಧಿಸಿ ಬಡವರಿಗಾಗಿ ಪ್ಯಾಕೇಜ್ ಘೋಷಿಸದ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ’ಅನ್ನಭಾಗ್ಯ ಕೊಟ್ಟವರು ನಾವು, ಸಾವಿನ ಭಾಗ್ಯ ಕೊಟ್ಟವರು ನೀವು’-ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ
ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೊಷಣೆಗಳನ್ನು ಕೂಗುತ್ತಾ, ಭಿತ್ತಿಪತ್ರಗಳನ್ನು ಹಿಡಿದು, ಗಾಂಧಿ ಪ್ರತಿಮೆಯ ಬಳಿ ದೈಹಿಕ ಅಂತರ ಕಾಪಾಡಿಕೊಂಡು ಧರಣಿ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನೇತೃತ್ವ ವಹಿಸಿದ್ದರು.
ಧರಣಿಯಲ್ಲಿ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ರಮೇಶ್ ಕುಮಾರ್, ಕೃಷ್ಣಬೈರೇಗೌಡ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್ ಮತ್ತಿತರರು ಭಾಗವಹಿಸಿದ್ದರು.
ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ನಲ್ಲಿ 14 ದಿನ ಉಚಿತ ಆಹಾರ ನೀಡಲು ಪೌರಾಡಳಿತ ಇಲಾಖೆ ನಿರ್ಧಾರ


