ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ (ಏ.15) ಘೋಷಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ತೀರ್ಪು ಪ್ರಕಟಿಸಿದ್ದಾರೆ. ಇಬ್ಬರು ಮಾಫಿ ಸಾಕ್ಷಿಗಳನ್ನು ಬಿಟ್ಟು ಉಳಿದವರ ತೀರ್ಪು ಇಂದು ಪ್ರಕಟವಾಗಿದೆ. ನಾಳೆ ಶಿಕ್ಷೆ ಪ್ರಮಾಣವನ್ನು ಕೋರ್ಟ್ ಪ್ರಕಟಿಸಲಿದೆ ಎಂದು ಈದಿನ.ಕಾಂ ವರದಿ ಮಾಡಿದೆ.
ತೀರ್ಪು ಪ್ರಕಟವಾದ ಬಳಿಕ ಯಾವುದೇ ಅಹಿತಕರ ಘಟನೆ ನಡೆಯದಂತೆ ವಿನಯ್ ಕುಲಕರ್ಣಿ ಅವರ ಧಾರವಾಡದಲ್ಲಿರುವ ಮನೆಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಹಾಗೆಯೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ ಎಂದು ವರದಿ ಹೇಳಿದೆ.
ಪ್ರಕರಣದ ಹಿನ್ನೆಲೆ : ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರನ್ನು 2016ರ ಜೂನ್ 15ರಂದು ಜಿಮ್ ಮುಂಭಾಗದಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 21 ಆರೋಪಿಗಳಿದ್ದು, ಅದರಲ್ಲಿ 15ನೇ ಆರೋಪಿ ವಿನಯ್ ಕುಲಕರ್ಣಿಯಾಗಿದ್ದಾರೆ.
ಈ ಪ್ರಕರಣದ ಮೊದಲ ಆರೋಪಿ ಬಸವರಾಜ ಮುತ್ತಗಿ ಮಾಫಿ ಸಾಕ್ಷಿಯಾಗಿ ಹೇಳಿಕೆ ದಾಖಲಿಸಿ ಈ ಕೊಲೆಯಲ್ಲಿ ವಿನಯ್ ಕುಲಕರ್ಣಿ ಪಾತ್ರವಿದೆ ಎಂದು ದೂರಿದ್ದರು. ಹಾಗೆಯೇ ತನ್ನನ್ನೂ ಕೊಲೆ ಮಾಡಲು ವಿನಯ್ ಸಂಚು ರೂಪಿಸುತ್ತಿದ್ದಾರೆ ಎಂದಿದ್ದರು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 20 ಲಕ್ಷ ರೂಪಾಯಿ ಸುಪಾರಿ ಕೊಟ್ಟು ಯೋಗೀಶ್ ಗೌಡ ಅವರನ್ನು ಕೊಲೆ ಮಾಡಿಸಿದ ಆರೋಪ ಮಾಡಲಾಗಿತ್ತು.
ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿ ಆರು ಮಂದಿಯನ್ನು ಬಂಧಿಸಿದ್ದರು. ಆದರೆ, ಕುಟುಂಬದ ಒತ್ತಾಯದ ಮೇರೆಗೆ 2019ರಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಸಿಬಿಐ ಆರೋಪಿಸಿದೆ. ವಿನಯ್ ಕುಲಕರ್ಣಿ ಅವರನ್ನು ಈ ಕೊಲೆಯ ಮುಖ್ಯ ಸಂಚುಗಾರ ಎಂದು ಸಿಬಿಐ ತನ್ನ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರು 2020ರಲ್ಲಿ ಬಂಧನಕ್ಕೊಳಗಾಗಿ ಒಂಬತ್ತು ತಿಂಗಳುಗಳ ಕಾಲ ಜೈಲಿನಲ್ಲಿದ್ದರು. ನಂತರ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಹೊರಬಂದಿದ್ದರು. ಸುಮಾರು 10 ವರ್ಷಗಳ ಸುದೀರ್ಘ ಕಾನೂನು ಪ್ರಕ್ರಿಯೆಯ ನಂತರ ಇದೀಗ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.


