ಮಧ್ಯಪ್ರದೇಶದಲ್ಲಿ 28 ಕ್ಷೇತ್ರಗಳಿಗೆ ನವೆಂಬರ್ 3ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಪ್ರಬುದ್ದ ಮತದಾರರು ಕೇಸರಿ ಪಕ್ಷವನ್ನು ತಿರಸ್ಕರಿಸಲಿದ್ದಾರೆ ಮತ್ತು ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಪತನಕ್ಕೆ ಕಾರಣವಾದ ಬಿಜೆಪಿ ರಾಜ್ಯದಲ್ಲಿ ಯಾವ ಕೆಲಸವನ್ನೂ ಮಾಡಿಲ್ಲ. ಜನರು ಬೇಸತ್ತಿದ್ದಾರೆ. ಹೀಗಾಗಿ ಎಲ್ಲಾ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಮತ್ತೆ ಕಾಂಗ್ರೆಸ್ ಸರ್ಕಾರ ಸ್ಥಾಪನೆಯಾಗಲಿದೆ ಎಂದು ಹೇಳಿದ್ದಾರೆ.
ಬಿಜೆಪಿಯು ಪ್ರಜಾಸತ್ತಾತ್ಮಕ ರೀತಿಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿತು. ಇದು ಜನರಿಗೆ ಗೊತ್ತಿದೆ. ಕಾಂಗ್ರೆಸ್ ಪಕ್ಷ ಜನರು ಮತ್ತು ಮತದಾರರ ಮೇಲೆ ಅಪಾರ ನಂಬಿಕೆ ಇಟ್ಟಿಕೊಂಡಿದೆ. ಜನಾದೇಶದೊಂದಿಗೆ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಮತದಾರರನ್ನು ಖದೀಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಬಿಜೆಪಿ ಸರ್ಕಾರದ ಬಗ್ಗೆ ಮತದಾರರು ಎಚ್ಚೆತ್ತುಕೊಂಡಿದ್ದಾರೆ. ಬಿಜೆಪಿ ಏಳು ತಿಂಗಳ ಆಡಳಿತವನ್ನು ನೋಡಿ ರೋಸಿಹೋಗಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಜನ ಮತ ಚಲಾಯಿಸಲಿದ್ದಾರೆ ಎಂದರು.
ಮಧ್ಯಪ್ರದೇಶದಲ್ಲಿ ರೈತರ ಸ್ಥಿತಿ ಚಿಂತಾಜನಕವಾಗಿದೆ. ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ಜನರ ಕಷ್ಟವನ್ನು ಕೇಳುವವರೇ ಇಲ್ಲವಾಗಿದೆ. ಇಂತಹ ಸಂದರ್ಭದಲ್ಲೂ ಬಿಜೆಪಿ ಸರ್ಕಾರ ಜನರ ನೆರವಿಗೆ ಬಂದಿಲ್ಲ ಎಂದು ಆರೋಪಿಸಿದ್ದಾರೆ.
ರಾಜ್ಯದ ಮತದಾರರು ಸರಳ ಸಜ್ಜನರು, ಬಡವರು, ಬುದ್ದಿವಂತರು. ಉಪಚುನಾವಣೆಯಲ್ಲಿ ಒಳ್ಳೆಯ ತೀರ್ಮಾನ ಕೈಗೊಳ್ಳುತ್ತಾರೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮಧ್ಯಪ್ರದೇಶ: ವಿವಾದಾತ್ಮಕ ಹೇಳಿಕೆ; ಬಿಜೆಪಿ ನಾಯಕಿಗೆ ನೋಟಿಸ್!


