ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಯಡಿಯೂರಪ್ಪ ಮತ್ತು ಇತರರ ವಿರುದ್ಧದ ದೂರನ್ನು ಮರುಸ್ಥಾಪಿಸಿದ ರಾಜ್ಯ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಮೇಲೆ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಖಾಸಗಿ ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ.
ಯಡಿಯೂರಪ್ಪ ಅವರ ಪರವಾಗಿ ಹಾಜರಾದ ಹಿರಿಯ ವಕೀಲರಾದ ಸಿದ್ಧಾರ್ಥ್ ದವೆ ಮತ್ತು ಮುಕುಲ್ ರೋಹಟಗಿ ಅವರು “ಸಾರ್ವಜನಿಕ ಸೇವಕನ ನಿರ್ಧಾರಗಳು ಅಥವಾ ಕ್ರಮಗಳಿಗೆ ಸಂಬಂಧಿಸಿದಂತೆ ಮಾಡಿದ ಅಪರಾಧಗಳ ಬಗ್ಗೆ ಯಾವುದೇ ರೀತಿಯ ವಿಚಾರಣೆ ಅಥವಾ ತನಿಖೆ ನಡೆಸುವ ಮೊದಲು ಭ್ರಷ್ಟಾಚಾರ ತಡೆ ಕಾಯಿದೆ (ಪಿಸಿ ಆಕ್ಟ್) ಪೂರ್ವ ಮಂಜೂರಾತಿ ಅಗತ್ಯವಿದೆ” ಎಂದು ಪ್ರತಿಪಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 7 ರಂದು ಮರುಸ್ಥಾಪಿಸಿತು. ಸರ್ಕಾರಿ ಗುತ್ತಿಗೆ ನೀಡಲು ಲಂಚ ಪಡೆದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.
ಇದನ್ನೂ ಓದಿ: ಬಿಜೆಪಿ ಸಂಸದೀಯ ಮಂಡಳಿ: ಬಿ.ಎಸ್.ಯಡಿಯೂರಪ್ಪ ಒಳಗೆ, ನಿತಿನ್ ಗಡ್ಕರಿ ಔಟ್; ಆದಿತ್ಯನಾಥ್‌ಗೆ ಸ್ಥಾನವಿಲ್ಲ!
ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯವು ಈ ಹಿಂದೆ ವಜಾಗೊಳಿಸಿತ್ತು. ಆ ಸಮಯದಲ್ಲಿ ಆಗಿನ ರಾಜ್ಯಪಾಲರು ಅದಕ್ಕೆ ಅನುಮತಿ ನೀಡಲು ನಿರಾಕರಿಸಿದ್ದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಗುತ್ತಿಗೆ ನೀಡುವುದಕ್ಕೆ ಪ್ರತಿಯಾಗಿ ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪನಿ ಮತ್ತು ಇತರ ಶೆಲ್ ಕಂಪನಿಗಳಿಂದ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರು ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ದಾಖಲಿಸಿದ್ದಾರೆ. ಅಬ್ರಹಾಂ ಅವರು ಕಳೆದ ವರ್ಷವೂ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಆದರೆ ಯಡಿಯೂರಪ್ಪ ಆಗ ಮುಖ್ಯಮಂತ್ರಿಯಾಗಿದ್ದ ಕಾರಣ ಅನುಮೋದನೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅದು ವಜಾಗೊಳಿಸಿತ್ತು.
ಸೆಪ್ಟೆಂಬರ್ 16 ರಂದು ಕರ್ನಾಟಕ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ಪ್ರಕರಣದಲ್ಲಿ ಯಡಿಯೂರಪ್ಪ, ಅವರ ಮಗ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಅವರ ಕುಟುಂಬದ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿದೆ.
ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶಿಕಾರಿಪುರ: ಯಡಿಯೂರಪ್ಪ ಸಂಸ್ಥಾನದಲ್ಲಿ ಬಿಜೆಪಿಯೇ ಕಾಣೆ!!
ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ (ಪಿಸಿಎ) ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕ ಲೋಕಾಯುಕ್ತ ಪೊಲೀಸರು ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ, ಸೆಪ್ಟೆಂಬರ್ 19 ರಂದು ಯಡಿಯೂರಪ್ಪ ಅವರು ಪ್ರಕರಣವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.


